ಭಾನುವಾರ, ಸೆಪ್ಟೆಂಬರ್ 19, 2021
30 °C

ರಮೇಶ ಜಾರಕಿಹೊಳಿಗೆ ಮುಂದೆ ಸಚಿವಗಾದಿ: ಎನ್‌.ಮುನಿರತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಕರ್ತರಾದ ರಮೇಶ ಜಾರಕಿಹೊಳಿ ಅವರಿಗೆ ಮುಂದೆ ಖಂಡಿತ ಸಚಿವ ಸ್ಥಾನ ಸಿಗುತ್ತದೆ. ಅವರಿಗೆ ಸಚಿವಗಾದಿ ಸಿಗಬೇಕು ಎನ್ನುವವರಲ್ಲಿ ನಾನು ಮೊದಲಿಗ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಮುನಿರತ್ನ ಹೇಳಿದರು.

ನಗರದ ಕೋಲಾರಮ್ಮ ದೇವಾಲಯದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ‘ರಮೇಶ ಜಾರಕಿಹೊಳಿ ನನಗೆ ಆತ್ಮೀಯರು. ಸದ್ಯಕ್ಕೆ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದರೆ, ಮುಂದೆ ಒಳ್ಳೆಯದಾಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಸಿ.ಪಿ.ಯೋಗೇಶ್ವರ್‌, ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಮ್ಮದು ಬಿಜೆಪಿ ಟೀಂ ಮಾತ್ರ, ಬೇರೆ ಟೀಂ ಇಲ್ಲ. ಮುಖ್ಯಮಂತ್ರಿಗಳು ನನ್ನನ್ನು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವನಾಗಿ ನೇಮಿಸಿದ್ದಾರೆ. ತೋಟಗಾರಿಕೆ ಇಲಾಖೆ ಖಾತೆ ನೀಡಿರುವುದಕ್ಕೆ ಸಂತಸವಾಗಿದೆ’ ಎಂದು ತಿಳಿಸಿದರು.

‘ಮುಖ್ಯಮಂತ್ರಿಗಳ ಜತೆ ಕೆಲಸ ಮಾಡಲು ಒಳ್ಳೆಯ ಅವಕಾಶ ಸಿಕ್ಕಿದೆ. ಪ್ರಾಮಾಣಿಕವಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತೇನೆ. ಹಿರಿಯರ ಸಲಹೆ ಪಡೆದು ಜವಾಬ್ದಾರಿ ನಿಭಾಯಿಸುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬರುವಂತೆ ಕೆಲಸ ಮಾಡುತ್ತೇನೆ’ ಎಂದರು.

ಆರೋಪ ಸಹಜ: ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಮನೆ ಮೇಲೆ ನಡೆದ ಜಾರಿ ನಿರ್ದೇಶನಾಲಯದ (ಇ.ಡಿ) ದಾಳಿ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಪ್ರತಿ ಬಾರಿ ಇ.ಡಿ ದಾಳಿ ನಡೆದಾಗ ವಿಪಕ್ಷಗಳು ರಾಜಕೀಯ ಪ್ರೇರಿತ ದಾಳಿ ಎಂದು ಆರೋಪಿಸುವುದು ಸಹಜ. ಇ.ಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸೂಕ್ತ ದಾಖಲೆಪತ್ರ ನೀಡುವುದು ಪ್ರತಿ ಭಾರತೀಯನ ಕರ್ತವ್ಯ. ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಒಂದೇ. ಇ.ಡಿ ದಾಳಿಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.