ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಲ್ಲು ಶಿಕ್ಷೆಗೆ ಒತ್ತಾಯಿಸಿ ಪ್ರತಿಭಟನೆ

ಪಶು ವೈದ್ಯೆ ಮೇಲಿನ ಅತ್ಯಾಚಾರ– ಕೊಲೆಗೆ ಖಂಡನೆ
Last Updated 3 ಡಿಸೆಂಬರ್ 2019, 15:51 IST
ಅಕ್ಷರ ಗಾತ್ರ

ಕೋಲಾರ: ತೆಲಂಗಾಣದ ಪಶು ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಜಿಲ್ಲೆಯ ಪಶು ವೈದ್ಯರ ಸಂಘದ ಸದಸ್ಯರು ಇಲ್ಲಿ ಮಂಗಳವಾರ ಪ್ರತಿಭಟನೆ ಮಾಡಿದರು.

ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕರ ಕಚೇರಿಯಿಂದ ಮೆಕ್ಕೆ ವೃತ್ತ, ಎಂ.ಬಿ ರಸ್ತೆ, ಎಂ.ಜಿ ರಸ್ತೆ ಮಾರ್ಗವಾಗಿ ಗಾಂಧಿವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ‘ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ. ಆಡಳಿತಾತ್ಮಕ ಅರಾಜಕತೆ ಸೃಷ್ಟಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಎಲ್ಲೆಡೆ ಅಪರಾಧ ಚಟುವಟಿಕೆ ಹೆಚ್ಚಿವೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಹೆಣ್ಣು ಮಕ್ಕಳು ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿಯಿದೆ. ಪಶು ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಎನ್.ಮಂಜುನಾಥ್‌ರೆಡ್ಡಿ ಕಳವಳ ವ್ಯಕ್ತಪಡಿಸಿದರು.

‘ಪಶು ವೈದ್ಯರ ಸಂಖ್ಯೆ ಕಡಿಮೆಯಾಗುತ್ತಿರುವ ಪರಿಸ್ಥಿತಿಯಲ್ಲಿ ಈ ಘಟನೆ ನಡೆದಿರುವುದರಿಂದ ಇಲಾಖೆ ಸಿಬ್ಬಂದಿಯಲ್ಲಿ ಆತಂಕ ಮೂಡಿದೆ. ತೆಲಂಗಾಣ ಸರ್ಕಾರವು ಸರ್ಕಾರಿ ನೌಕರರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಇಲಾಖೆಯ ಮಹಿಳಾ ವೈದ್ಯರು ಹಾಗೂ ಸಿಬ್ಬಂದಿಯು ಗ್ರಾಮೀಣ ಭಾಗದಲ್ಲಿ ಕಾರ್ಯ ನಿರ್ವಹಿಸಲು ಹಿಂಜರಿಯುವಂತಾಗಿದೆ’ ಎಂದು ಹೇಳಿದರು.

ಪೈಶಾಚಿಕ ಕೃತ್ಯ: ‘ಅಸಹಾಯಕರಾಗಿದ್ದ ವೈದ್ಯೆಯನ್ನು ನೆರವು ನೀಡುವ ಸೋಗಿನಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಪೈಶಾಚಿಕ ಕೃತ್ಯ. ಮಹಿಳೆಯರು ಸುರಕ್ಷಿತವಾಗಿ ಮನೆಗೆ ವಾಪಸ್‌ ಬರುವ ಖಾತರಿಯೇ ಇಲ್ಲವಾಗಿದೆ’ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

‘ಸಂತ್ರಸ್ತ ವೈದ್ಯೆಯ ಕುಟುಂಬಕ್ಕೆ ಪರಿಹಾರ ನೀಡಬೇಕು. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೆ ನ್ಯಾಯಯುತ ತನಿಖೆ ನಡೆಸಬೇಕು. ಇಲಾಖೆಯ ಮಹಿಳಾ ಸಿಬ್ಬಂದಿಗೆ ರಕ್ಷಣೆ ನೀಡಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು’ ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಡಾ.ಎನ್.ಜಗದೀಶ್‌ಕುಮಾರ್, ಉಪಾಧ್ಯಕ್ಷ ಡಾ.ಎಸ್.ವಿ.ಶ್ರೀನಿವಾಸಗೌಡ, ಪ್ರಧಾನ ಕಾರ್ಯದರ್ಶಿ ಡಾ.ಜಿ.ಟಿ.ರಾಮಯ್ಯ, ಪದಾಧಿಕಾರಿಗಳಾದ ಷಫೀವುಲ್ಲಾ, ಡಾ.ಅಫ್ಜಲ್ ಪಾಷಾ, ಡಾ.ಅಭಿಲಾಷ್, ಡಾ.ಶಿವಶಂಕರರೆಡ್ಡಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT