ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾನುಪಾತ ಅಂತರ ತಗ್ಗಿಸಿ: ಜಿಲ್ಲಾಧಿಕಾರಿ

Last Updated 18 ಸೆಪ್ಟೆಂಬರ್ 2019, 12:52 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯಲ್ಲಿ ಲಿಂಗಾನುಪಾತ ಅಂತರ ಕಡಿಮೆ ಮಾಡಲು ವಿಶೇಷ ಆಂದೋಲನ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅಧಿಕಾರಿಗಳಿಗೆ ಸೂಚಿಸಿದರು.

ಬಾಲ್ಯವಿವಾಹ ನಿಷೇಧ ಕಾಯ್ದೆ, ಮಹಿಳೆಯರು ಮತ್ತು ಮಕ್ಕಳ ಸಾಗಾಟ, ಬೇಟಿ ಬಚಾವೋ ಬೇಟಿ ಪಡಾವೋ, ಗೆಳತಿ ವಿಶೇಷ ಚಿಕಿತ್ಸಾ ಘಟಕ, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ, ಸಾಂತ್ವನ ಮತ್ತು ಸ್ಥೈರ್ಯ ನಿಧಿ ಯೋಜನೆ ಕುರಿತು ಇಲ್ಲಿ ಬುಧವಾರ ನಡೆದ ಜಿಲ್ಲಾ ಸಮಿತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

‘ಜಿಲ್ಲೆಯ ಬಂಗಾರಪೇಟೆ ಮತ್ತು ಮಾಲೂರು ತಾಲ್ಲೂಕಿನಲ್ಲಿ ಲಿಂಗಾನುಪಾತ ಕಡಿಮೆಯಿದ್ದು, ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಿಸಲು ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ವಿಶೇಷ ಆಂದೋಲನ ಹಮ್ಮಿಕೊಳ್ಳಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಗರ್ಭಪಾತ ಪ್ರಮಾಣ ಕಡಿಮೆ ಮಾಡಲು ಸರ್ಕಾರಿ ಆಸ್ಪತ್ರೆಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಸ್ಕ್ಯಾನಿಂಗ್ ಸೆಂಟರ್‌ ಇರದಂತೆ ಎಚ್ಚರ ವಹಿಸಿ. 200 ಮೀಟರ್ ವ್ಯಾಪ್ತಿಯಲ್ಲಿರುವ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ನೋಟಿಸ್‌ ನೀಡಿ ಸ್ಥಳಾಂತರ ಮಾಡಿ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯ್‌ಕುಮಾರ್ ಅವರಿಗೆ ಆದೇಶಿಸಿದರು.

‘ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆಯು ಗಂಭೀರ ಸಮಸ್ಯೆಯಾಗಿದ್ದು, ಇದರ ತಡೆಗೆ ಸ್ವಸಹಾಯ ಗುಂಪುಗಳು, ಯುವ ಸಂಘಟನೆಗಳು, ಚಲನಚಿತ್ರ ಹಾಗೂ ಪತ್ರಿಕೆಗಳ ಮೂಲಕ ಅರಿವು ಮೂಡಿಸಬೇಕು. ಬಾಲಕಿಯರ ವಸತಿನಿಲಯಗಳಿಗೆ ಆಗಾಗ್ಗೆ ಭೇಟಿ ನೀಡಿ ಪರಿಶೀಲಿಸಬೇಕು. ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು’ ಎಂದು ಹೇಳಿದರು.

‘ವಸತಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಳೆಗಾಲ ಆರಂಭವಾಗಿದ್ದು, ಸೊಳ್ಳೆ ಕಾಟ ಹೆಚ್ಚಿದೆ. ಇದರಿಂದ ವಿದ್ಯಾರ್ಥಿನಿಯರು ಅನಾರೋಗ್ಯಪೀಡಿತರಾಗುವ ಸಾಧ್ಯತೆ ಇದೆ. ಆದ ಕಾರಣ ಸೊಳ್ಳೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ. ವಿದ್ಯಾರ್ಥಿನಿಯರಿಗೆ ಸೊಳ್ಳೆ ಪರದೆ ವಿತರಿಸಿ’ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಂ.ಜಿ.ಪಾಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಪಲ್ಲವಿ ಹೊನ್ನಾಪುರ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT