ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಹಾಲು ಖರೀದಿ ದರ ಕಡಿತ, ಉತ್ಪಾದಕರಿಗೆ ದೊಡ್ಡ ಪೆಟ್ಟು

ಅವಿಭಜಿತ ಕೋಲಾರ ಜಿಲ್ಲೆಯ
Last Updated 1 ಜುಲೈ 2021, 19:30 IST
ಅಕ್ಷರ ಗಾತ್ರ

ಕೋಲಾರ: ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು (ಕೋಚಿಮುಲ್‌) ಹಾಲು ಖರೀದಿ ದರ ಕಡಿತಗೊಳಿಸಿ ಅವಿಭಜಿತ ಕೋಲಾರ ಜಿಲ್ಲೆಯ ಹಾಲು ಉತ್ಪಾದಕರಿಗೆ ದೊಡ್ಡ ಪೆಟ್ಟು ಕೊಟ್ಟಿದೆ.

ಕೋಚಿಮುಲ್‌ ವ್ಯಾಪ್ತಿಯ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1,870 ಪ್ರಾಥಮಿಕ ಹಾಲು ಸಹಕಾರ ಸಂಘಗಳಿದ್ದು, ಸುಮಾರು 2.87 ಲಕ್ಷ ಹಾಲು ಉತ್ಪಾದಕರು ಒಕ್ಕೂಟದ ಸದಸ್ಯರಾಗಿದ್ದಾರೆ. ಹೈನುಗಾರಿಕೆಯು ಅವಳಿ ಜಿಲ್ಲೆಯ ರೈತರ ಜೀವನಾಡಿಯಾಗಿದ್ದು, ಒಕ್ಕೂಟವು ಹಾಲು ಸಂಗ್ರಹಣೆಯಲ್ಲಿ ರಾಜ್ಯದಲ್ಲೇ 2ನೇ ಸ್ಥಾನದಲ್ಲಿದೆ.

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳು ಬರಪೀಡಿತ ಜಿಲ್ಲೆಗಳಾಗಿದ್ದು, ಕೃಷಿ ನಿರ್ವಹಣೆ ಕಷ್ಟವಾಗಿದೆ. ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದ್ದು, 2 ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ನೀರು ಸಿಗುವುದು ಕಷ್ಟ. ಹೀಗಾಗಿ ರೈತರು ಕೃಷಿ ಬದಲಿಗೆ ಹೈನುಗಾರಿಕೆಯತ್ತ ಮುಖ ಮಾಡಿದ್ದು, ಹೈನುಗಾರಿಕೆಯು ರೈತ ಕುಟುಂಬಗಳ ಬೆನ್ನೆಲುಬಾಗಿದೆ. ಕೃಷಿಗೆ ಪರ್ಯಾಯವಾಗಿ ಹೈನುಗಾರಿಕೆಯು ಪ್ರಮುಖ ಆದಾಯ ಮೂಲವಾಗಿದೆ.

ಒಕ್ಕೂಟವು ಕಳೆದ 6 ತಿಂಗಳಲ್ಲಿ 2 ಬಾರಿ ಹಾಲು ಖರೀದಿ ದರ ಪರಿಷ್ಕರಿಸಿದೆ. ಜ.24ರಂದು ಖರೀದಿ ದರದಲ್ಲಿ ₹ 2 ಏರಿಕೆ ಮಾಡಲಾಗಿತ್ತು. ಇದೀಗ ಲೀಟರ್‌ಗೆ ₹ 1.50 ಕಡಿತಗೊಳಿಸಲಾಗಿದ್ದು, ಪರಿಷ್ಕೃತ ದರ ಲೀಟರ್‌ಗೆ ₹ 25.50 ಆಗಿದೆ. ಹೊಸ ದರ ಗುರುವಾರ (ಜುಲೈ 1) ಬೆಳಗಿನ ಸರದಿಯಿಂದಲೇ ಜಾರಿಗೆ ಬಂದಿದೆ. ಪ್ರಾಥಮಿಕ ಹಾಲು ಸಹಕಾರ ಸಂಘಗಳ ನಿರ್ವಹಣೆಗಾಗಿ ಪ್ರತಿ ಲೀಟರ್‌ಗೆ ₹ 2.25 ಕೊಡಲಾಗುತ್ತಿದೆ.

10.50 ಲಕ್ಷ ಲೀಟರ್‌: ಅವಳಿ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಹಾಲು ಸಂಗ್ರಹಣೆ ಪ್ರಮಾಣ ಇಳಿಕೆಯಾಗಿತ್ತು. ಕಳೆದೊಂದು ತಿಂಗಳಿಂದ ಉತ್ತಮ ಮಳೆ ಆಗುತ್ತಿರುವುದರಿಂದ ದಿನದಿಂದ ದಿನಕ್ಕೆ ಹಾಲು ಸಂಗ್ರಹಣೆ ಪ್ರಮಾಣ ಏರು ಗತಿಯಲ್ಲಿ ಸಾಗಿದೆ. ಸದ್ಯ ಪ್ರತಿನಿತ್ಯ ಸುಮಾರು 10.50 ಲಕ್ಷ ಲೀಟರ್‌ ಹಾಲು ಶೇಖರಣೆಯಾಗುತ್ತಿದೆ. ಅದರೆ, ಕೋವಿಡ್‌ ಮತ್ತು ಲಾಕ್‌ಡೌನ್‌ ಕಾರಣಕ್ಕೆ ಹಾಲು ಹಾಗೂ ಹಾಲಿನ ಉತ್ಪನ್ನಗಳ ಮಾರಾಟ ಪ್ರಮಾಣ ಗಣನೀಯವಾಗಿ ಕುಸಿದಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಒಕ್ಕೂಟದಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳು ರಫ್ತಾಗುತ್ತಿಲ್ಲ. ಮತ್ತೊಂದೆಡೆ ಸ್ಥಳೀಯವಾಗಿ ನಿರೀಕ್ಷಿತ ಮಟ್ಟದಲ್ಲಿ ವಹಿವಾಟು ನಡೆಯುತ್ತಿಲ್ಲ.

ಜಾಗತಿಕವಾಗಿ ಹಾಲಿನ ಪುಡಿ ಮತ್ತು ಬೆಣ್ಣೆ ಬೆಲೆ ದಾಖಲೆ ಪ್ರಮಾಣದಲ್ಲಿ ಕುಸಿದಿದ್ದು, ಮಾರುಕಟ್ಟೆಯಲ್ಲಿ ಹಾಲಿನ ಪುಡಿ ಹಾಗೂ ಬೆಣ್ಣೆಗೆ ಬೇಡಿಕೆ ಇಲ್ಲವಾಗಿದೆ. ಹೀಗಾಗಿ ಹಾಲಿನ ಪುಡಿ ಮತ್ತು ಬೆಣ್ಣೆಯು ಗೋದಾಮುಗಳಲ್ಲೇ ಉಳಿದಿದ್ದು, ಒಕ್ಕೂಟಕ್ಕೆ ನಷ್ಟದ ಭೀತಿ ಎದುರಾಗಿದೆ. ಕೋಚಿಮುಲ್‌ ಆಡಳಿತ ಮಂಡಳಿಯು ಈ ಸಂಕಷ್ಟದಿಂದ ಪಾರಾಗಲು ಅನಿವಾರ್ಯವಾಗಿ ಹಾಲು ಖರೀದಿ ದರ ಇಳಿಕೆ ಮಾಡಿದೆ.

ಈಗಾಗಲೇ ರೈತರು ಕೋವಿಡ್‌, ಲಾಕ್‌ಡೌನ್‌ ಹಾಗೂ ಕೃಷಿ ಉತ್ಪನ್ನಗಳ ಬೆಲೆ ಕುಸಿತದಿಂದ ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಇದೀಗ ಗಾಯದ ಮೇಲೆ ಬರೆ ಎಳೆದಂತೆ ಒಕ್ಕೂಟವು ಹಾಲು ಖರೀದಿ ದರ ತಗ್ಗಿಸಿ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT