ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಕೇಂದ್ರಕ್ಕೆ ಸೋಂಕಿತರ ಸ್ಥಳಾಂತರ

ಗ್ರಾಮೀಣ ಭಾಗದಲ್ಲಿ ಕ್ವಾರಂಟೈನ್‌ ನಿಯಮ ಉಲ್ಲಂಘನೆ
Last Updated 20 ಮೇ 2021, 14:22 IST
ಅಕ್ಷರ ಗಾತ್ರ

ಕೋಲಾರ: ‘ಗ್ರಾಮೀಣ ಭಾಗದಲ್ಲಿ ಮನೆಗಳಲ್ಲೇ ಕ್ವಾರಂಟೈನ್‌ ಆಗಿರುವ ಕೊರೊನಾ ಸೋಂಕಿತರ ಪೈಕಿ ಸಾಕಷ್ಟು ಮಂದಿ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸುತ್ತಿದ್ದು, ಅವರನ್ನು ಕೋವಿಡ್‌ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಹೇಳಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕಿತರು ಕ್ವಾರಂಟೈನ್‌ ನಿಯಮಗಳನ್ನು ಉಲ್ಲಂಘಿಸಿ ಮನೆಯಿಂದ ಹೊರಬಂದು ಓಡಾಡುತ್ತಿರುವ ಬಗ್ಗೆ ದೂರು ಬಂದಿವೆ. ಇದರಿಂದ ಹಳ್ಳಿಗಳಲ್ಲಿ ಸೋಂಕು ಹರಡುವಿಕೆ ಹೆಚ್ಚುವ ಆತಂಕವಿದೆ’ ಎಂದರು.

‘ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರಿಗೆ ಔಷಧ ಮಾತ್ರೆ ನೀಡಲಾಗುತ್ತಿದೆ. ಗ್ರಾಮೀಣ ಜನರಲ್ಲಿ ಕೋವಿಡ್‌ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ’ ಎಂದು ವಿವರಿಸಿದರು.

‘ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ಗೆ ದಾಖಲಾಗಲು ಕೆಲವರು ಹಿಂದಿನ ಬಾಗಿಲಿನಿಂದ ಬರುತ್ತಿದ್ದ ಬಗ್ಗೆ ದೂರು ಬಂದಿದ್ದವು. ಇದಕ್ಕೆ ಕಡಿವಾಣ ಹಾಕುವ ಉದ್ದೇಶಕ್ಕಾಗಿ ಆಸ್ಪತ್ರೆಯ ಹಿಂಬಾಗಿಲು ಮುಚ್ಚಿಸಲಾಗಿದೆ. ಸಾಮಾನ್ಯ ಪ್ರಕ್ರಿಯೆಯಂತೆ ಸೋಂಕಿತರು ಆಸ್ಪತ್ರೆಗೆ ದಾಖಲಾಗಬೇಕು. ತುರ್ತು ಚಿಕಿತ್ಸೆ ಅಗತ್ಯವಿರುವ ಕೆಲವರನ್ನು ಮಾತ್ರ ನೇರವಾಗಿ ದಾಖಲು ಮಾಡಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಲಾಗಿದೆ.

ವಾಹನ ವಶಕ್ಕೆ: ‘ಜಿಲ್ಲೆಯಲ್ಲಿ ಲಾಕ್‌ಡೌನ್‌ ಜಾರಿಯಾದ ದಿನದಿಂದ ಈವರೆಗೆ 2,123 ವಾಹನಗಳನ್ನು ವಶಕ್ಕೆ ಪಡೆದಿದ್ದು, 1,306 ಮಂದಿ ವಾಹನ ಸವಾರರಿಗೆ ದಂಡ ಹಾಕಿ ವಾಹನಗಳನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರ ಮತ್ತು ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿದ ಸಂಬಂಧ 149 ಹಾಗೂ ಮಾಸ್ಕ್ ಧರಿಸದ ಸಂಬಂಧ 36 ಸಾವಿರ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ ಹೇಳಿದರು.

‘ಜಿಲ್ಲೆಯಲ್ಲಿ ಇಲಾಖೆಯ 66 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 3 ಸಿಬ್ಬಂದಿ ಪೈಕಿ ಇಬ್ಬರು ಆರ್‍.ಎಲ್.ಜಾಲಪ್ಪಯಲ್ಲಿ ಹಾಗೂ ಒಬ್ಬರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಸಿಬ್ಬಂದಿ ಮನೆಗಳಲ್ಲೇ ಕ್ವಾರಂಟೈನ್‌ ಆಗಿದ್ದಾರೆ. ಕಾಳಸಂತೆಯಲ್ಲಿ ರೆಮ್‌ಡಿಸಿವರ್‌ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಸಂಬಂಧ ಪ್ರತ್ಯೇಕ 2 ಪ್ರಕರಣದಲ್ಲಿ 7 ಮಂದಿಯನ್ನು ಬಂಧಿಸಲಾಗಿದೆ’ ಎಂದರು.

ಸಂಪೂರ್ಣ ಲಾಕ್‌ಡೌನ್‌ ಅವಧಿಯಲ್ಲಿ ಮದುವೆಗೆ ಅವಕಾಶ ನೀಡುವುದಿಲ್ಲ. ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಅಂತಹವರಿಗೆ 20 ಮಂದಿಯನ್ನು ಒಳಗೊಂಡಂತೆ ಮದುವೆ ನಡೆಸಿಕೊಳ್ಳಲು ಅನುಮತಿ ಕೊಡುತ್ತೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT