ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸಿ

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಮಂಜುನಾಥ್‌ ಹೇಳಿಕೆ
Last Updated 15 ಆಗಸ್ಟ್ 2019, 14:35 IST
ಅಕ್ಷರ ಗಾತ್ರ

ಕೋಲಾರ: ‘ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಹೋರಾಟವನ್ನೇ ಉಸಿರಾಗಿಸಿಕೊಂಡು ಬ್ರಿಟೀಷರ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಮಹನೀಯರನ್ನು ಸ್ಮರಿಸಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೇಳಿದರು.

ಜಿಲ್ಲಾಡಳಿತವು ಇಲ್ಲಿ ಗುರುವಾರ ಹಮ್ಮಿಕೊಂಡಿದ್ದ 73ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿ, ‘ಮಹಾತ್ಮ ಗಾಂಧೀಜಿ, ಸರ್ದಾರ್‌ ವಲ್ಲಭಾಬಾಯಿ ಪಟೇಲ್, ಜವಾಹರಲಾಲ್‌ ನೆಹರೂ ಸೇರಿದಂತೆ ಅನೇಕ ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು’ ಎಂದು ಸ್ಮರಿಸಿದರು.

‘ರಾಜ್ಯದ 22 ಜಿಲ್ಲೆಗಳಲ್ಲಿ ಜನ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಆಸ್ತಿ ಹಾಗೂ ಪ್ರಾಣ ಹಾನಿಯಾಗಿದೆ. ಜಿಲ್ಲೆಯ ಸಂಘ ಸಂಸ್ಥೆಗಳು ನೆರೆ ಸಂತ್ರಸ್ತರಿಗೆ ಸಹಾಯಹಸ್ತ ಚಾಚಿ ಸರ್ಕಾರದ ಜತೆ ಕೈಜೋಡಿಸಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಈಗಾಗಲೇ ₹ 2 ಕೋಟಿ ದೇಣಿಗೆ ಸಂಗ್ರಹಿಸಿವೆ. ಜನ ಸ್ವಪ್ರೇರಣೆಯಿಂದ ದಿನಬಳಕೆ ವಸ್ತುಗಳು, ಆಹಾರ ಸಾಮಗ್ರಿ ನೀಡಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಸರ್ಕಾರದ ವಿವಿಧ ಜಯಂತಿ ಹಾಗೂ ಸಮಾರಂಭಗಳನ್ನು ಸರಳವಾಗಿ ಆಚರಿಸಿ ಅದರ ಅನುದಾನವನ್ನು ನೆರೆ ಪರಿಹಾರಕ್ಕೆ ಬಳಸಲಾಗುವುದು. ಜಿಲ್ಲೆಯಲ್ಲಿ ಬರ ಪರಿಸ್ಥಿತಿಯಿದ್ದು, ಶೇ 33ರಷ್ಟು ಮಳೆ ಕೊರತೆ ಎದುರಾಗಿದೆ. ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಹಾಗೂ ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಸಲಾಗುತ್ತಿದೆ’ ಎಂದು ವಿವರಿಸಿದರು.

20 ಕೆರೆ ಭರ್ತಿ: ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 1.15 ಲಕ್ಷ ರೈತರನ್ನು ನೋಂದಾಯಿಸಿದ್ದು, ಮೊದಲ ಕಂತಿನ ₹ 2 ಸಾವಿರವನ್ನು 70,404 ರೈತರ ಖಾತೆಗೆ ಜಮಾ ಮಾಡಲಾಗಿದೆ. ಕೆ.ಸಿ ವ್ಯಾಲಿ ಯೋಜನೆ ವ್ಯಾಪ್ತಿಯ 136 ಕೆರೆಗಳ ಪೈಕಿ 20 ಕೆರೆ ತುಂಬಿವೆ. 2ನೇ ಹಂತದಲ್ಲಿ 233 ಕೆರೆಗಳಿಗೆ ನೀರು ಹರಿಸಲಾಗುವುದು. 2019ರ ಅಂತ್ಯಕ್ಕೆ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಸಣ್ಣ ನೀರಾವರಿ ಇಲಾಖೆಯ 138 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಸಿದ್ಧಪಡಿಸಲಾಗಿದೆ’ ಎಂದರು.

‘ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ₹ 20 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಿಸಲಾಗಿದೆ. ಜಿಲ್ಲಾ ಕೇಂದ್ರದ ದರ್ಗಾ ಮೊಹಲ್ಲಾದ ಪ್ರಾಥಮಿಕ ಆರೋಗ್ಯ ಕೇಂದ್ರ ನವೀಕರಿಸಿ 30 ಹಾಸಿಗೆ ಸಾಮರ್ಥ್ಯದ ಸಮುದಾಯ ಆರೋಗ್ಯ ಕೇಂದ್ರವಾಗಿ ಮಾಡಲಾಗಿದೆ. ಈ ಎರಡೂ ಆಸ್ಪತ್ರೆಗಳು ಸದ್ಯದಲ್ಲೇ ಕಾರ್ಯಾರಂಭ ಮಾಡಲಿವೆ’ ಎಂದು ಮಾಹಿತಿ ನೀಡಿದರು.

ಜಮೀನು ಮೀಸಲು: ‘ಗ್ರಾಮೀಣ ಭಾಗದಲ್ಲಿ 38,243 ಮಂದಿ ವಸತಿರಹಿತರು ಹಾಗೂ 9,056 ಮಂದಿ ನಿವೇಶನರಹಿತರನ್ನು ಗುರುತಿಸಲಾಗಿದ್ದು, ಬಡವರಿಗೆ ಸೂರು ಕಲ್ಪಿಸುವ ಉದ್ದೇಶಕ್ಕೆ 56 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 92.26 ಎಕರೆ ಜಮೀನನ್ನು ನಿವೇಶನಕ್ಕಾಗಿ ಮೀಸಲಿಡಲಾಗಿದೆ. ಇದರಿಂದ 3,680 ಫಲಾನುಭವಿಗಳಿಗೆ ನಿವೇಶನ ಸಿಗಲಿದೆ. 7,826 ಫಲಾನುಭವಿಗಳಿಗೆ ಮನೆ ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ತಿಳಿಸಿದರು.

ಸಂಸದ ಎಸ್.ಮುನಿಸ್ವಾಮಿ, ಶಾಸಕ ಕೆ.ಶ್ರೀನಿವಾಸಗೌಡ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಮ್ಮ, ಉಪಾಧ್ಯಕ್ಷೆ ಯಶೋದಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ, ಉಪ ವಿಭಾಗಾಧಿಕಾರಿ ಸೋಮಶೇಖರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT