ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರವೇ ಜಿಲ್ಲಾ ಕೇಂದ್ರದ ರಸ್ತೆ ದುರಸ್ತಿ

Last Updated 27 ಸೆಪ್ಟೆಂಬರ್ 2019, 9:39 IST
ಅಕ್ಷರ ಗಾತ್ರ

ಕೋಲಾರ: ‘ಒಳಚರಂಡಿ (ಯುಜಿಡಿ) ಕಾಮಗಾರಿಯಿಂದ ಜಿಲ್ಲಾ ಕೇಂದ್ರದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಶೀಘ್ರವೇ ರಸ್ತೆಗಳನ್ನು ಪುನರ್‌ ನಿರ್ಮಾಣ ಮಾಡುತ್ತೇವೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಭರವಸೆ ನೀಡಿದರು.

ಇಲ್ಲಿ ಗುರುವಾರ ನಗರ ಪ್ರದಕ್ಷಿಣೆ ನಡೆಸಿ ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ, ‘ನಗರದೆಲ್ಲೆಡೆ ಅಮೃತ್‌ ಯೋಜನೆಯಡಿ ಯುಜಿಡಿ ಹಾಗೂ ಕುಡಿಯುವ ನೀರು ಸರಬರಾಜು ಪೈಪ್‌ಲೈನ್‌ ಕಾಮಗಾರಿ ನಡೆಯುತ್ತಿದೆ. ಕಾರಣಾಂತರದಿಂದ ಕೆಲವೆಡೆ ಕಾಮಗಾರಿ ಪೂರ್ಣಗೊಂಡಿಲ್ಲ. ಹೀಗಾಗಿ ರಸ್ತೆ ದುರಸ್ತಿ ಕಾರ್ಯ ತಡವಾಗಿದೆ’ ಎಂದರು.

‘ರಸ್ತೆಗಳು ಹಾಳಾಗಿರುವುದರಿಂದ ಜನರ ಓಡಾಟಕ್ಕೆ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸಾಧ್ಯವಾದಷ್ಟು ಬೇಗನೆ ಯುಜಿಡಿ ಮತ್ತು ನೀರಿನ ಪೈಪ್‌ಲೈನ್‌ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ತಕ್ಷಣ ರಸ್ತೆ ದುರಸ್ತಿ ಕಾರ್ಯ ಆರಂಭಿಸುವಂತೆ ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ’ ಎಂದು ತಿಳಿಸಿದರು.

‘ನಗರದ ಬಹುತೇಕ ಕಡೆ ಕಸ ರಾಶಿಯಾಗಿ ಬಿದ್ದಿದೆ. ಕಸ ವಿಲೇವಾರಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೆಲ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್‌ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಪ್ಲಾಸ್ಟಿಕ್‌ ಕವರ್‌ ಮಾರಾಟ ಮಾಡುವ ಅಂಗಡಿ ಮಾಲೀಕರಿಗೆ ದಂಡ ವಿಧಿಸಬೇಕು’ ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಟಿ.ಚನ್ನಯ್ಯ ರಂಗಮಂದಿರ ರಸ್ತೆ, ಕಾಳಿಕಾಂಬ ರಸ್ತೆ, ಎಂ.ಬಿ ರಸ್ತೆ, ಶಾರದಾ ಚಿತ್ರಮಂದಿರ ರಸ್ತೆ ಅವ್ಯವಸ್ಥೆಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು. ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ನಗರಸಭೆ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT