ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆ ಹಿಂಪಡೆಯಲಿ: ಮನವಿ

Last Updated 28 ಜೂನ್ 2021, 15:09 IST
ಅಕ್ಷರ ಗಾತ್ರ

ಕೋಲಾರ: ಕೇಂದ್ರ ಸರ್ಕಾರವು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಪ್ರೊ.ನಂಜುಂಡಸ್ವಾಮಿ ಬಣ) ಸದಸ್ಯರು ಇಲ್ಲಿ ಸೋಮವಾರ ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.

‘ಕೇಂದ್ರವು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ. ರೈತರು ಈ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಸತತ 7 ತಿಂಗಳಿಂದ ಹೋರಾಟ ನಡೆಸುತ್ತಿದ್ದರೂ ಕೇಂದ್ರವು ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸರ್ಕಾರಗಳಿಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ’ ಎಂದು ಸಂಘಟನೆ ಸದಸ್ಯರು ಕಿಡಿಕಾರಿದರು.

‘ದೆಹಲಿ ಗಡಿಯಲ್ಲಿನ ಹೋರಾಟದಲ್ಲಿ ಸುಮಾರು 500 ರೈತರು ಮೃತಪಟ್ಟಿದ್ದಾರೆ. ತಮ್ಮ ಹಕ್ಕುಗಳ ರಕ್ಷಣೆಗಾಗಿ ನ್ಯಾಯಯುತ ರೀತಿಯಲ್ಲಿ ಹೋರಾಟ ಮಾಡುತ್ತಿದ್ದ ರೈತ ಮುಖಂಡರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಪೊಲೀಸ್‌ ಬಲ ಬಳಸಿ ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆದಿದೆ’ ಎಂದು ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ರಾಮುಶಿವಣ್ಣ ದೂರಿದರು.

‘ಪ್ರತಿಭಟನಾ ಸ್ಥಳಕ್ಕೆ ತೆರಳಿ ಮನವಿ ಸ್ವೀಕರಿಸಿ ರೈತರ ಪ್ರಾಣ ರಕ್ಷಿಸಬೇಕಾದ ಪ್ರಧಾನಿ ಮೋದಿ ಅವರು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಬಂಡವಾಳಶಾಹಿಗಳು, ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಮೋದಿಯವರು ಕೃಷಿ ಕ್ಷೇತ್ರ ನಾಶ ಮಾಡಲು ಹೊರಟಿದ್ದಾರೆ. ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿ ತುಘಲಕ್‌ ದರ್ಬಾರ್‌ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು.

ಉದ್ಯಮಿಗಳ ಕೈಗೊಂಬೆ: ‘ಕೇಂದ್ರ ಸರ್ಕಾರವು ರೈತರನ್ನು ಬೀದಿಗೆ ತಳ್ಳಿ ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಹಿತ ಕಾಯಲು ಹೊರಟಿವೆ. ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಕೈಗೊಂಬೆಯಾಗಿರುವ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ಸಣ್ಣ ಭೂ ಹಿಡುವಳಿದಾರರು ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ’ ಎಂದು ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಸರ್ಕಾರವು ಬ್ರಿಟೀಷರಿಗಿಂತಲೂ ಕಡೆಯಾದ ಅಪಾಯಕಾರಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ. ರೈತ ಕುಲಕ್ಕೆ ಮಾರಕವಾಗಿರುವ ಈ ಕಾಯ್ದೆಗಳನ್ನು ಹಿಂಪಡೆಯಬೇಕು. ಸ್ವಾಮಿನಾಥನ್‌ ಆಯೋಗದ ವರದಿ ಜಾರಿಗೊಳಿಸಬೇಕು. ಇಲ್ಲವಾದರೆ ಜನರು ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ತಕ್ಕ ಪಾಠ ಕಲಿಸುತ್ತಾರೆ’ ಎಂದು ಗುಡುಗಿದರು.

ಸಂಘಟನೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ಸದಸ್ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT