ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಪ್ರತಿನಿಧಿಗಳು ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆ: ಸಿಪಿಎಂ ರಾಜ್ಯ ಮುಖಂಡ

ಏಕಪಕ್ಷೀಯ ನಿರ್ಧಾರ: ಸಿಪಿಎಂ ರಾಜ್ಯ ಮುಖಂಡ ಲಕ್ಷ್ಮೀನಾರಾಯಣ ಕಿಡಿ
Last Updated 16 ನವೆಂಬರ್ 2021, 13:30 IST
ಅಕ್ಷರ ಗಾತ್ರ

ಕೋಲಾರ: ‘ದೇಶ ಆಳಲು ಮತ ನೀಡಿ ಕಳುಹಿಸಿದ ಜನಪ್ರತಿನಿಧಿಗಳು ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಗಳಾಗಿ ಜನವಿರೋಧಿ ಆಡಳಿತ ನಡೆಸುತ್ತಿದ್ದು, ಇದರ ವಿರುದ್ಧ ಧ್ವನಿ ಎತ್ತಬೇಕು’ ಎಂದು ಸಿಪಿಎಂ ರಾಜ್ಯ ಮುಖಂಡ ಎಚ್.ಬಿ.ಲಕ್ಷ್ಮೀನಾರಾಯಣ ಹೇಳಿದರು.

ಇಲ್ಲಿ ಮಂಗಳವಾರ ನಡೆದ ಸಿಪಿಎಂನ 8ನೇ ತಾಲ್ಲೂಕು ಸಮ್ಮೇಳನದಲ್ಲಿ ಮಾತನಾಡಿ, ‘ದೇಶದಲ್ಲಿ ಜಾಗತೀಕರಣದ ಪ್ರಭಾವವು ಬಡವರ ಭಾರತ ಮತ್ತು ಶ್ರೀಮಂತರ ಭಾರತವನ್ನು ಆಳುವ ಸರ್ಕಾರಗಳನ್ನು ಸೃಷ್ಟಿಸಿದೆ. ದುಡಿಯುವ ವರ್ಗದ ಜನರ ಹಿತ ಕಾಪಾಡಲು ಬಂಡವಾಳಶಾಹಿಗಳ ವಿರುದ್ಧ ಹೋರಾಟ ನಡೆಸಬೇಕಿದೆ’ ಎಂದರು.

‘ಗುಜರಾತ್ ಮಾದರಿ ಎಂದು ಹೇಳಿಕೊಂಡ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜನ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಮತ್ತು ವಿದ್ಯುತ್ ಕಾಯ್ದೆ ತಿದ್ದುಪಡಿಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದೆ. ಕೇಂದ್ರ ಸರ್ಕಾರವು ಯಾವುದೇ ವಿಷಯವನ್ನು ಜನಸಾಮಾನ್ಯರ ಮಧ್ಯೆ ಚರ್ಚಿಸದೆ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದೆ’ ಎಂದು ಕಿಡಿಕಾರಿದರು.

‘ಬಂಡವಾಳಶಾಹಿಗಳು, ಕಾರ್ಪೊರೇಟ್‌ ಕಂಪನಿಗಳು ಹಾಗೂ ಹಣವಂತ ರಾಜಕಾರಣಿಗಳಿಗೆ ಅನುಕೂಲ ಮಾಡಿಕೊಡಲು ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿದೆ. ಕೇಂದ್ರದ ಜನ ವಿರೋಧಿ ನಡೆಯಿಂದ ಇಡೀ ರೈತ ಕುಲ ತಬ್ಬಲಿಯಾಗುವ ದುಸ್ಥಿತಿ ಬಂದಿದೆ. ಸರ್ಕಾರಗಳು ಕೃಷಿ ಕ್ಷೇತ್ರ ನಾಶ ಮಾಡಿ ಆಹಾರ ಭದ್ರತೆಗಾಗಿ ಹೊರ ದೇಶಗಳತ್ತ ಕೈಚಾಚುವ ಪರಿಸ್ಥಿತಿ ಸೃಷ್ಟಿಸುತ್ತಿವೆ. ರೈತರ ಬೇಡಿಕೆಗಳಿಗೆ ಸ್ಪಂದಿಸುವುದನ್ನು ಬಿಟ್ಟು ರೈತರನ್ನು ಶೋಷಿಸುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತುಘಲಕ್‌ ದರ್ಬಾರ್‌: ‘ಸರ್ಕಾರಗಳು ಅಂಬಾನಿ, ಅದಾನಿಯಂತಹ ಉದ್ಯಮಿಗಳ ಹಿತರಕ್ಷಣೆಗಾಗಿ ಕಾಯ್ದೆಗಳಿಗೆ ಮನಬಂದಂತೆ ತಿದ್ದುಪಡಿ ಮಾಡುತ್ತಿವೆ. ಕೃಷಿ ಜಮೀನಿನ ಮೇಲೆ ಕಪ್ಪು ಹಣ ಹೂಡಿಕೆಗೆ ಸರ್ಕಾರಗಳು ಅವಕಾಶ ಕಲ್ಪಿಸುತ್ತಿವೆ. ರೈತರ ಹೆಸರಿನಲ್ಲಿ ಬಂಡವಾಳಶಾಹಿಗಳಿಗೆ, ಕಾರ್ಮಿಕರ ಹೆಸರಲ್ಲಿ ಕೈಗಾರಿಕೋದ್ಯಮಿಗಳಿಗೆ ಪರೋಕ್ಷವಾಗಿ ಸಹಕಾರ ನೀಡುತ್ತಿವೆ’ ಎಂದು ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಪಿ.ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದರು.

‘ಕೇಂದ್ರವು ಜನ ವಿರೋಧಿ ಕಾಯ್ದೆಗಳನ್ನು ಮಂಡಿಸಿ ತುಘಲಕ್‌ ದರ್ಬಾರ್‌ ನಡೆಸುತ್ತಿದೆ. ಲಜ್ಜೆಗೆಟ್ಟ ಸರ್ಕಾರಗಳಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ. ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಮಲ್ ಕಾರ್ಖಾನೆಯನ್ನು ಖಾಸಗೀಕರಣ ಮಾಡಲು ಹೊರಟಿರುವ ಸರ್ಕಾರ ಯಾರ ಪರವಾಗಿ ಇದೆ ಎಂಬುದನ್ನು ಸೂಚಿಸುತ್ತದೆ’ ಎಂದರು.

ಏಕ ಚಕ್ರಾಧಿಪತಿ: ‘ಪ್ರಧಾನಿ ನರೇಂದ್ರ ಮೋದಿ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕ ಚಕ್ರಾಧಿಪತಿಯಂತೆ ಆಡಳಿತ ನಡೆಸುತ್ತಿದ್ದಾರೆ. ನಾಗಪುರದ ಆರ್‌ಎಸ್ಎಸ್‌ ಕಚೇರಿಯು ಮೋದಿಯವರನ್ನು ರಿಮೋಟ್‌ ಕಂಟ್ರೋಲ್‌ನಂತೆ ನಿಯಂತ್ರಿಸುತ್ತಿದೆ. ಜನ ಎಚ್ಚರಿಕೆಯಿಂದ ಯೋಚಿಸಿ ಮುಂಬರುವ ದಿನಗಳಲ್ಲಿ ಮತದಾನ ಮಾಡಬೇಕು’ ಎಂದು ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಕಿವಿಮಾತು ಹೇಳಿದರು.

‘ಸಮಾಜದಲ್ಲಿ ಸತ್ಯ ಹೇಳಿದ ಸಂಗೀತ ನಿರ್ದೇಶಕ ಹಂಸಲೇಖ ಮರು ದಿನವೇ ಕ್ಷಮೆ ಕೇಳುವಂತೆ ಮಾಡುತ್ತಾರೆ. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಅವಮಾನ ಅವಹೇಳನಕಾರಿಯಾಗಿ ಮಾತನಾಡಿದ ಚಿತ್ರ ನಟಿ ಕಂಗನಾಗೆ ದೇಶಪ್ರೇಮಿ ಪಟ್ಟ ಕಟ್ಟುತ್ತಾರೆ. ಇದೇ ಬಿಜೆಪಿಯ ದೊಡ್ಡ ಸಾಧನೆ’ ಎಂದು ಲೇವಡಿ ಮಾಡಿದರು.

ಸಿಪಿಎಂ ತಾಲ್ಲೂಕು ಘಟಕದ ಕಾರ್ಯದರ್ಶಿ ಟಿ.ಎಂ.ವೆಂಕಟೇಶ್, ಸದಸ್ಯರಾದ ಎಂ.ವಿಜಯಕೃಷ್ಣ, ಎನ್‌.ಎನ್.ಶ್ರೀರಾಮ್, ಗಂಗಮ್ಮ, ದೇವರಾಜ್, ವಿ.ನಾರಾಯಣರೆಡ್ಡಿ, ಸುಶೀಲಾ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT