ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ಲೋಪಕ್ಕೆ ಆಸ್ಪದ ಬೇಡ

ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮಂಜುನಾಥ್‌ ಸೂಚನೆ
Last Updated 6 ಜನವರಿ 2020, 13:13 IST
ಅಕ್ಷರ ಗಾತ್ರ

ಕೋಲಾರ: ‘ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸೂಚಿಸಿದರು.

ಗಣರಾಜ್ಯೋತ್ಸವ ಸಂಬಂಧ ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಜ.26ರಂದು ಗಣರಾಜ್ಯೋತ್ಸವ ನಡೆಯಲಿದ್ದು, ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಗಣರಾಜ್ಯೋತ್ಸವವು ನಮ್ಮೆಲ್ಲರ ಹೆಮ್ಮೆಯ ದಿನ. ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕು’ ಎಂದು ತಿಳಿಸಿದರು.

‘ಗಣರಾಜ್ಯೋತ್ಸವದ ಹಿಂದಿನ ದಿನ ಜ.25ರಂದು ಎಲ್ಲಾ ಸರ್ಕಾರಿ ಕಚೇರಿಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡಬೇಕು. 26ರಂದು ಬೆಳಿಗ್ಗೆ 8 ಗಂಟೆಗೆ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ 8.30ಕ್ಕೆ ನಡೆಯುವ ಕಾರ್ಯಕ್ರಮಕ್ಕೆ ಬರಬೇಕು’ ಎಂದು ಹೇಳಿದರು.

‘ಪ್ರತಿ ವರ್ಷದಂತೆ ಪರೇಡ್‍ ಉತ್ತಮವಾಗಿ ನಡೆಸಬೇಕು. 22 ತಂಡಗಳು ಪರೇಡ್‌ ತಾಲೀಮು ನಡೆಸಬೇಕು. ಭಾರತ ಸೇವಾದಳದವರು ಬಾವುಟದ ಸಿದ್ಧತೆ ಮಾಡಬೇಕು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು 8.55ಕ್ಕೆ ಧ್ವಜಾರೋಹಣ ನೆರವೇರಿಸುತ್ತಾರೆ. ಅವರ ಭಾಷಣಕ್ಕೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಗಳಿಂದ ಪ್ರಮುಖ ಮಾಹಿತಿಯನ್ನು ಸಂಕ್ಷಿಪ್ತವಾಗಿ ಜ.10ರೊಳಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಒದಗಿಸಬೇಕು’ ಎಂದರು.

‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಗಣರಾಜ್ಯೋತ್ಸವ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ನಡೆಸಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ವ್ಯವಸ್ಥೆ ಮಾಡಬೇಕು. ಎಲ್ಲಾ ದೇವಾಲಯ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸಲು ಕ್ರಮ ಕೈಗೊಳ್ಳಬೇಕು. ಬೆಸ್ಕಾಂನವರು ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು’ ಎಂದು ಸೂಚಿಸಿದರು.

ಪೇಡ ವಿತರಣೆ: ‘ಕಾರ್ಯಕ್ರಮಕ್ಕೆ ಬರುವ ಮಕ್ಕಳಿಗೆ ಪೇಡ ವಿತರಿಸುವ ಸಂಬಂಧ ಕೋಚಿಮುಲ್ ಅಧ್ಯಕ್ಷರು ಮತ್ತು ವ್ಯವಸ್ಥಾಪಕರೊಂದಿಗೆ ಚರ್ಚಿಸಲಾಗುವುದು. ಕ್ರೀಡಾಂಗಣದಲ್ಲಿ ಆಂಬುಲೆನ್ಸ್‌ ಮತ್ತು ಅಗ್ನಿನಂದಕ ವಾಹನಗಳ ವ್ಯವಸ್ಥೆ ಮಾಡಬೇಕು. ಶಾಮಿಯಾನ, ವೇದಿಕೆ ಮತ್ತು ಧ್ವನಿವರ್ದಕದ ವ್ಯವಸ್ಥೆ ಮಾಡಬೇಕು’ ಎಂದು ಸೂಚನೆ ನೀಡಿದರು.

‘ಪ್ಲಾಸ್ಟಿಕ್‌ ಧ್ವಜ ಮಾರಾಟ ಮಾಡುವ ಅಂಗಡಿಗಳ ಮೇಲೆ ನಗರಸಭೆ ಸಿಬ್ಬಂದಿಯು ದಾಳಿ ನಡೆಸಬೇಕು. ಜತೆಗೆ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಪ್ಲಾಸ್ಟಿಕ್‌ ಧ್ವಜ ಜಪ್ತಿ ಮಾಡಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಚ್ಛತೆಗೆ ಒತ್ತು ಕೊಡಬೇಕು ಮತ್ತು ಕುಡಿಯುವ ನೀರಿನ ಸೌಕರ್ಯ ಕಲ್ಪಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ದರ್ಶನ್, ಹೆಚ್ಚುವರಿ ಜಿಲ್ಲಾಧಿಕಾರಿ ಪುಷ್ಪಲತಾ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ದೇವಿಕಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT