ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿತ್ತನೆ ಬೀಜ–ರಸಗೊಬ್ಬರ ಪೂರೈಕೆಗೆ ಮನವಿ

Last Updated 21 ಮೇ 2021, 16:22 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಮುಂಗಾರು ಬಿತ್ತನೆಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಕೆ ಮಾಡಬೇಕೆಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶುಕ್ರವಾರ ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

‘ಕೋಲಾರ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ರೈತ ಕುಟುಂಬಗಳು ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿವೆ. ಕೋವಿಡ್‌ ಹಾಗೂ ಲಾಕ್‌ಡೌನ್‌ನಿಂದ ರೈತರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಕಾಲಕ್ಕೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಿಗದಿದ್ದರೆ ರೈತರಿಗೆ ತೀವ್ರ ಸಮಸ್ಯೆಯಾಗುತ್ತದೆ’ ಎಂದು ಸಂಘಟನೆ ಸದಸ್ಯರು ಹೇಳಿದರು.

‘ಕೋವಿಡ್‌ 2ನೇ ಅಲೆ ಆರ್ಭಟದಿಂದ ದೇಶದಲ್ಲಿ ಅಲ್ಲೋಲ ಕಲ್ಲೋಲವಾಗುತ್ತಿದೆ. ಲಾಕ್‌ಡೌನ್‌ ಕೃಷಿ ಕ್ಷೇತ್ರಕ್ಕೆ ದೊಡ್ಡ ಪೆಟ್ಟು ಕೊಟ್ಟಿದೆ. ಇದರ ನಡುವೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಕೃಷಿ ಚಟುವಟಿಕೆ ಆರಂಭವಾಗುತ್ತಿವೆ. ರೈತರು ಜಮೀನು ಹದಗೊಳಿಸಿ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ತಿಳಿಸಿದರು.

‘ಕೋವಿಡ್ ದುರಿತ ಕಾಲದಲ್ಲಿ ರೈತರಿಗೆ ಕೃಷಿ ಕಾಯಕವೊಂದೆ ಆಶಾಕಿರಣ. ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ, ರಸಗೊಬ್ಬರ ಸಿಗದಿದ್ದರೆ ಕೃಷಿ ಚಟುವಟಿಕೆಗೆ ಹಿನ್ನಡೆಯಾಗುತ್ತದೆ. ಹೀಗಾಗಿ ಸರ್ಕಾರ ಕೃಷಿಗೆ ಎಲ್ಲಾ ಸವಲತ್ತು ಕಲ್ಪಿಸಿಕೊಟ್ಟು ಸಂಕಷ್ಟದಲ್ಲಿರುವ ರೈತರ ನೆರವಿಗೆ ನಿಲ್ಲಬೇಕು’ ಎಂದು ಮನವಿ ಮಾಡಿದರು.

ಸಮಸ್ಯೆಗೆ ಸ್ಪಂದಿಸಿ: ‘ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬೇಡಿಕೆ ತಕ್ಕಂತೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ಸಮಸ್ಯೆಗೆ ತಕ್ಷಣವೇ ಸ್ಪಂದಿಸಬೇಕು. ಕಳಪೆ ಬಿತ್ತನ ಬೀಜ ಮಾರಾಟ ದಂಧೆಗೆ ಕಡಿವಾಣ ಹಾಕಬೇಕು’ ಎಂದು ಸಂಘಟನೆ ಸದಸ್ಯರು ಕೋರಿದರು.

ಸಂಘಟನೆಯ ರಾಜ್ಯ ಘಟಕದ ಸಂಚಾಲಕ ನಾಗರಾಜಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ಸದಸ್ಯರಾದ ನವೀನ್, ವೇಣು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT