ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 50ರ ಅನುಪಾತದಲ್ಲಿ ಕೆಲಸಕ್ಕೆ ಮನವಿ

Last Updated 14 ಜನವರಿ 2022, 16:13 IST
ಅಕ್ಷರ ಗಾತ್ರ

ಕೋಲಾರ: ಕೊರೊನಾ ಸೋಂಕು ತೀವ್ರ ಗತಿಯಲ್ಲಿ ಹರಡುತ್ತಿರುವ ಕಾರಣ ಸಾರ್ವಜನಿಕರು ಮತ್ತು ಸರ್ಕಾರಿ ನೌಕರರ ಸುರಕ್ಷತೆ ದೃಷ್ಟಿಯಿಂದ ಕಚೇರಿಗಳಲ್ಲಿ 50:50ರ ಅನುಪಾತದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಬೇಕೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಸದಸ್ಯರು ಇಲ್ಲಿ ಶುಕ್ರವಾರ ಪ್ರಭಾರ ಜಿಲ್ಲಾಧಿಕಾರಿ ಯುಕೇಶ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.

‘ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಗಂಭೀರವಾಗಿದೆ. ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಹಲವು ಇಲಾಖೆಗಳ ಕಚೇರಿಗಳಲ್ಲಿ 30ಕ್ಕೂ ಹೆಚ್ಚು ಸಿಬ್ಬಂದಿಗೆ ಸೋಂಕು ಹರಡಿರುವುದು ಖಚಿತವಾಗಿದೆ’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ತಿಳಿಸಿದರು.

‘ಸೋಂಕು ಇದೇ ರೀತಿ ಉಲ್ಬಣಗೊಂಡರೆ ಎಲ್ಲಾ ಕಚೇರಿಗಳನ್ನು ಸೀಲ್‌ಡೌನ್‌ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗುತ್ತದೆ. ಇದನ್ನು ತಪ್ಪಿಸಲು ಕಚೇರಿಗಳಲ್ಲಿ ಸಿಬ್ಬಂದಿಗೆ ಶೇ.50:50ರ ಅನುಪಾತದಲ್ಲಿ ಕಾರ್ಯ ನಿರ್ವಹಿಸಲು ಆದೇಶಿಸಬೇಕು’ ಎಂದು ಮನವಿ ಮಾಡಿದರು.

‘ಸರ್ಕಾರಿ ನೌಕರರು ಕೋವಿಡ್ 1 ಮತ್ತು 2ನೇ ಅಲೆಯಲ್ಲಿ ಆತಂಕದ ನಡುವೆಯೂ ಕರ್ತವ್ಯ ನಿರ್ವಹಿಸಿದ್ದಾರೆ, ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಸ್ನೇಹಿತರನ್ನು ಕಳೆದುಕೊಂಡಿದ್ದೇವೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಸೇವೆ ಸಲ್ಲಿಸುವ ನೌಕರರಿಗೆ 50:50ರ ಅನುಪಾತದಲ್ಲಿ ಹಾಜರಾತಿಗೆ ಅವಕಾಶ ಕಲ್ಪಿಸಬೇಕು’ ಎಂದು ಕೋರಿದರು.

‘ಕೋವಿಡ್ ಆತಂಕದ ನಡುವೆಯೂ ನೌಕರರು ಕರ್ತವ್ಯ ನಿರ್ವಹಣೆಗೆ ಸಿದ್ಧರಿದ್ದಾರೆ. ಆದರೆ, ಸೋಂಕು ವ್ಯಾಪಿಸುವುದನ್ನು ತಡೆಯಲು ಶೇ 50:50ರ ಅನುಪಾತದಲ್ಲಿ ಸಿಬ್ಬಂದಿ ಕಚೇರಿಗೆ ಬರುವಂತೆ ಮಾಡಬೇಕು. ಜತೆಗೆ ಕಚೇರಿಗಳಲ್ಲಿ ಸಾರ್ವಜನಿಕರು ಕೋವಿಡ್‌ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡಬೇಕು’ ಎಂದು ಹೇಳಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಸ್.ಚೌಡಪ್ಪ, ಖಜಾಂಚಿ ಕೆ.ವಿಜಯ್, ಹಿರಿಯ ಉಪಾಧ್ಯಕ್ಷ ಸುಬ್ರಮಣಿ, ಉಪಾಧ್ಯಕ್ಷರಾದ ಮಂಜುನಾಥ್, ಅಜಯ್‌ಕುಮಾರ್, ಎಂ.ನಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT