ಸೋಮವಾರ, ಸೆಪ್ಟೆಂಬರ್ 16, 2019
22 °C
ಮುಖ್ಯಮಂತ್ರಿ ಪ್ರತಿಕೃತಿ ದಹಿಸಿ ರೈತ ಸಂಘ ಸದಸ್ಯರ ಆಕ್ರೋಶ

ರೆಸಾರ್ಟ್‌ ವಾಸ್ತವ್ಯ ಖಂಡಿಸಿ ಧರಣಿ

Published:
Updated:
Prajavani

ಕೋಲಾರ: ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಚಿವರು ರೈತರ ಕಷ್ಟಕ್ಕೆ ಸ್ಪಂದಿಸದೆ ರೆಸಾರ್ಟ್‌ನಲ್ಲಿ ಮೋಜು ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಗುರುವಾರ ಧರಣಿ ನಡೆಸಿದರು.

ಮೆಕ್ಕೆ ವೃತ್ತದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರತಿಕೃತಿ ದಹಿಸಿದ ಧರಣಿನಿರತರು, ‘ಬರಗಾಲ ಹಾಗೂ ಮಳೆ ಅನಾಹುತದಿಂದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಮುಖ್ಯಮಂತ್ರಿಯವರಿಗೆ ಹಾಗೂ ಸಚಿವರಿಗೆ ಇದರ ಅರಿವಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದೆಲ್ಲೆಡೆ ಹಿಂದಿನ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟಿದ್ದರಿಂದ ಕೋಟ್ಯಂತರ ರೂಪಾಯಿ ಬೆಳೆ ನಷ್ಟವಾಗಿದೆ. ಮತ್ತೊಂದೆಡೆ ಇತ್ತೀಚೆಗೆ ಸುರಿದ ಮಳೆಯಿಂದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ ನೀರು ಹಾಗೂ ಮೇವಿನ ಸಮಸ್ಯೆ ಎದುರಾಗಿದ್ದು, ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ಮಾರುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಹೇಳಿದರು.

‘ಅನಾವೃಷ್ಟಿ ಕಾರಣಕ್ಕೆ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ರೈತರು ಹಾಗೂ ಕೃಷಿ ಕಾರ್ಮಿಕರು ಕೆಲಸಕ್ಕಾಗಿ ನಗರ ಪ್ರದೇಶಕ್ಕೆ ಗುಳೆ ಹೋಗುತ್ತಿದ್ದಾರೆ. ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಲೋಕಸಭಾ ಚುನಾವಣೆ ಒತ್ತಡದಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರು ಜನರ ಸಮಸ್ಯೆ ಮರೆತಿದ್ದಾರೆ’ ಎಂದು ಕಿಡಿಕಾರಿದರು.

ಆಡಳಿತ ಯಂತ್ರ ಕುಸಿದಿದೆ: ‘ಉದ್ಯೋಗ ಖಾತ್ರಿ ಯೋಜನೆ ಹಾಗೂ ಬರ ನಿರ್ವಹಣೆ ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಬರ ಪರಿಸ್ಥಿತಿ ಮತ್ತು ಮಳೆ ಅನಾಹುತದ ಪರಿಶೀಲನೆ ನಡೆಸಬೇಕಾದ ಮುಖ್ಯಮಂತ್ರಿ ಹಾಗೂ ಸಚಿವರು ರೆಸಾರ್ಟ್‌ ಸೇರಿಕೊಂಡಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ’ ಎಂದು ಧರಣಿನಿರತರು ದೂರಿದರು.

‘ಅಧಿಕಾರಕ್ಕಾಗಿ ಹಾದಿ ಬೀದಿಯಲ್ಲಿ ಕಚ್ಚಾಡುತ್ತಿರುವ ಜನಪ್ರತಿನಿಧಿಗಳು ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದ್ದಾರೆ. ಸ್ವಾರ್ಥಕ್ಕಾಗಿ ಜನರನ್ನು ಬಲಿಪಶು ಮಾಡಿರುವ ಸರ್ಕಾರವನ್ನು ವಜಾಗೊಳಿಸಿ ರಾಜ್ಯಪಾಲರ ಆಡಳಿತ ಜಾರಿಗಳಿಸಬೇಕು. ಜತೆಗೆ ಹೊಣೆಗೇಡಿ ಶಾಸಕರ ಸದಸ್ಯತ್ವ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್‌, ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ, ಸದಸ್ಯರಾದ ನಾಗರಾಜಗೌಡ, ಮುನಿಯಪ್ಪ, ಚಂದ್ರಪ್ಪ, ಕೃಷ್ಣೇಗೌಡ, ರಾಜೇಶ್, ಪುರುಷೋತ್ತಮ್, ನಾಗೇಶ್, ತಿಮ್ಮಣ್ಣ ಪಾಲ್ಗೊಂಡಿದ್ದರು.

Post Comments (+)