ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ಉಳಿದರೆ ಮನುಕುಲದ ಉಳಿವು

ರೇಷ್ಮೆ ಇಲಾಖೆ ಉಪ ನಿರ್ದೇಶಕ ಪ್ರಭಾಕರ್ ಕಿವಿಮಾತು
Last Updated 16 ಆಗಸ್ಟ್ 2019, 15:11 IST
ಅಕ್ಷರ ಗಾತ್ರ

ಕೋಲಾರ: ‘ಕೈಗಾರಿಕೆಗಳು ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು. ಪರಿಸರ ಉಳಿದರೆ ಮನುಕುಲ ಉಳಿಯುತ್ತದೆ’ ಎಂದು ರೇಷ್ಮೆ ಇಲಾಖೆ ಉಪ ನಿರ್ದೇಶಕ ಪ್ರಭಾಕರ್ ಕಿವಿಮಾತು ಹೇಳಿದರು.

ರೇಷ್ಮೆ ಇಲಾಖೆ, ಎಚ್‌.ಪಿ ಕಂಪನಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಹಯೋಗದಲ್ಲಿ ತಾಲ್ಲೂಕಿನ ಕ್ಯಾಲನೂರಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಆದರೆ, ಮನುಷ್ಯನ ದುರಾಸೆಯ ಫಲವಾಗಿ ಪರಿಸರ ನಾಶವಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಹಿಂದಿನ ಕಾಲದಲ್ಲಿ ಖಾಲಿ ಜಾಗದಲ್ಲಿ ಗಿಡ ಮರ ಕಾಣುತ್ತಿದ್ದೆವು. ಅರಣ್ಯ ಸಂಪತ್ತು ಸಮೃದ್ಧವಾಗಿತ್ತು. ಹೀಗಾಗಿ ಸಕಾಲಕ್ಕೆ ಮಳೆಯಾಗಿ ಕೆರೆ ಕುಂಟೆಗಳಲ್ಲಿ ನೀರು ಸಂಗ್ರಹವಾಗುತ್ತಿತ್ತು. ಆದರೆ, ಈಗ ಗಿಡ ಮರ ನಾಶದಿಂದ ವಾತಾವರಣ ಕಲುಷಿತಗೊಂಡು ಆರೋಗ್ಯ ಸಮಸ್ಯೆ ಎದುರಾಗಿದೆ. ಜತೆಗೆ ಪ್ರಾಕೃತಿಕ ವಿಕೋಪ ಸಂಭವಿಸುತ್ತಿವೆ’ ಎಂದು ವಿಷಾದಿಸಿದರು.

ಈಗ ಖಾಲಿ ಜಾಗದಲ್ಲೆಲ್ಲಾ ಗಗನಚುಂಬಿ ಕಟ್ಟಡಗಳು ತಲೆಎತ್ತಿವೆ. ಮರ ಗಿಡ ಕಡಿದಿರುವುದರಿಂದ ಪ್ರಾಣಿ ಪಕ್ಷಿ ಸಂಕುಲ ನಾಶವಾಗುತ್ತಿದೆ. ಪರಿಸರ ಹಾಗೂ ಸಾರ್ವಜನಿಕ ಆಸ್ತಿ ರಕ್ಷಣೆಗೆ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಪರಿಸರ ನಾಶದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯಡಿ ಪರಿಸರ ರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.

‘ಜನಸಂಖ್ಯೆಗೆ ಹೋಲಿಸಿದರೆ ಮರಗಳ ಸಂಖ್ಯೆ ಕಡಿಮೆಯಿದ್ದು, ಶುದ್ಧ ಗಾಳಿ ಸಿಗುತ್ತಿಲ್ಲ. ಇದರಿಂದ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಸಕಾಲಕ್ಕೆ ಮಳೆಯಾಗದೆ ಬರ ಪರಿಸ್ಥಿತಿ ಎದುರಾಗಿದೆ. ಶುದ್ಧ ಗಾಳಿಗಾಗಿ ಗ್ರಾಮೀಣ ಭಾಗದಲ್ಲಿ ರಸ್ತೆ ಅಕ್ಕಪಕ್ಕ ಹಾಗೂ ಶಾಲೆ ಆವರಣದಲ್ಲಿ ಗಿಡ ನೆಟ್ಟು ಬೆಳೆಸಬೇಕು’ ಎಂದು ಮನವಿ ಮಾಡಿದರು.

ಅರಣ್ಯೀಕರಣ: ‘ಜಿಲ್ಲೆಯಲ್ಲಿ ಖಾಲಿ ಸರ್ಕಾರಿ ಜಾಗ ಗುರುತಿಸಲಾಗಿದೆ. ಅಲ್ಲಿ ಸಸಿ ನೆಟ್ಟು ಪೋಷಿಸುವಂತೆ ಖಾಸಗಿ ಕಂಪನಿ ಹಾಗೂ ಸಂಸ್ಥೆಗಳಿಗೆ ಮನವಿ ಮಾಡಿದ್ದು, ಜಿಲ್ಲೆಯನ್ನು ಅರಣ್ಯೀಕರಣಗೊಳಿಸಲು ದೃಢ ಸಂಕಲ್ಪ ಮಾಡಿದ್ದೇವೆ’ ಎಂದು ಅರಣ್ಯ ಇಲಾಖೆ ಸಹಾಯಕ ಸಂರಕ್ಷಣಾಧಿಕಾರಿ ಹರ್ಷವರ್ಧನ್ ವಿವರಿಸಿದರು.

‘ಜಿಲ್ಲೆಯಲ್ಲಿ ಕೈಗಾರಿಕೆಗಳು ವರ್ಷಕ್ಕೆ 5 ಸಾವಿರ ಸಸಿ ನೆಟ್ಟು ಪೋಷಿಸುವ ಕೆಲಸ ಮಾಡಬೇಕು. ಇಂತಹ ಸಾಮಾಜಿಕ ಕಾರ್ಯಕ್ಕೆ ಸಂಸ್ಥೆಯ ಸ್ವಯಂ ಸೇವಕರು ಕೈಜೋಡಿಸುತ್ತಾರೆ’ ಎಂದು ಭಾರತ್‌ ಸ್ಕೌಟ್ಸ್ ಮತ್ತು -ಗೈಡ್ಸ್ ಸಂಸ್ಥೆಯ ಜಿಲ್ಲಾ ಸ್ಥಾನಿಕ ಆಯುಕ್ತ ತ್ಯಾಗರಾಜ್ ಭರವಸೆ ನೀಡಿದರು.

ವಲಯ ಅರಣ್ಯಧಿಕಾರಿ ಶಾಲಿನಿ, ಶಿಕ್ಷಣ ಸಂಯೋಜಕ ರಾಮಕೃಷ್ಣಪ್ಪ, ಯುವಶಕ್ತಿ ಸಂಘಟನೆ ಅಧ್ಯಕ್ಷ ಸುಬ್ರಮಣಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಜಿಲ್ಲಾ ಸಂಘಟನಾ ಆಯುಕ್ತ ವಿ.ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT