ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾನ ಶಿಕ್ಷಣಕ್ಕೆ ಸರ್ಕಾರಿ ಶಾಲೆ ಉಳಿಸಿ

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸೂಚನೆ
Last Updated 6 ನವೆಂಬರ್ 2019, 15:06 IST
ಅಕ್ಷರ ಗಾತ್ರ

ಕೋಲಾರ: ‘ಶಿಕ್ಷಕರ ಬೇಡಿಕೆ ಈಡೇರಿಕೆಗೆ ಇಲಾಖೆ ಸಿದ್ಧವಿದೆ. ಆದರೆ, ಸಂಘಟನೆಗಳ ಹೆಸರಿನಲ್ಲಿ ಮಕ್ಕಳಿಗೆ ಅನ್ಯಾಯ ಮಾಡದೆ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಬದ್ಧತೆಯಿಂದ ಕೆಲಸ ಮಾಡಿ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಶಿಕ್ಷಕರಿಗೆ ಸೂಚಿಸಿದರು.

ತಾಲ್ಲೂಕಿನ ಬೆಗ್ಲಿ ಸರ್ಕಾರಿ ಪ್ರೌಢ ಶಾಲೆಗೆ ಬುಧವಾರ ಭೇಟಿ ನೀಡಿ ಮಾತನಾಡಿ, ‘ಶಿಕ್ಷಕರ ಸಮಸ್ಯೆ ಪರಿಹರಿಸಲು ಇಲಾಖೆ ಸಿದ್ಧವಿದೆ. ಸಮಾನ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳನ್ನು ಉಳಿಸಲು ಗುಣಮಟ್ಟದ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿ’ ಎಂದು ಹೇಳಿದರು.

‘ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳಕ್ಕೆ ಗಮನ ಹರಿಸಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜತೆಗೆ 8 ಮತ್ತು 9ನೇ ತರಗತಿ ಮಕ್ಕಳಿಗೂ ವಿಶೇಷ ತರಗತಿ ನಡೆಸಬೇಕು. ಶಿಕ್ಷಕರಲ್ಲಿ ಸಮಯಪ್ರಜ್ಞೆ ಅಗತ್ಯ. ಶಾಲೆಯಲ್ಲಿ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ. ಮಕ್ಕಳಲ್ಲಿ ಶಿಸ್ತು ಬೆಳೆಸಬೇಕು ಮತ್ತು ಕಲಿಕಾಸಕ್ತಿ ಹೆಚ್ಚಿಸಲು ಬೋಧನಾ ಕ್ರಮದಲ್ಲಿ ಸುಧಾರಣೆ ಆಗಬೇಕು’ ಎಂದು ಸಲಹೆ ನೀಡಿದರು.

‘ವಿದ್ಯಾರ್ಥಿಗಳಲ್ಲಿ ಉನ್ನತ ಶಿಕ್ಷಣ ಪಡೆಯುವ ಗುರಿ ಸ್ವಾಗತಾರ್ಹ. ಇಂದಿನ ಪರಿಸ್ಥಿತಿಯಲ್ಲಿ ಬದುಕಿಗಾಗಿ ಐಟಿಐ, ಡಿಪ್ಲೋಮಾದಂತಹ ಕೌಶಲಾಧಾರಿತ ಶಿಕ್ಷಣ ಪಡೆಯಬೇಕು. ಗ್ರಾಮೀಣ ಮಕ್ಕಳು ಪದವಿ, ಉನ್ನತ ಶಿಕ್ಷಣ ಪಡೆಯುವ ಇಂಗಿತ ಸರಿಯಾದರೂ ಅದರ ಜತೆಗೆ ಬದುಕು, ಜೀವನಾಧಾರದ ಶಿಕ್ಷಣವೂ ಅಗತ್ಯ’ ಎಂದು ಅಭಿಪ್ರಾಯಪಟ್ಟರು.

ಸಿರಿಧಾನ್ಯದ ಊಟ: ‘ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಖಾಸಗಿ ಕಂಪನಿಗಳಿಂದ ಸಿಎಸ್ಆರ್‌ ಅಡಿ ಅನುದಾನ ಪಡೆಯಲು ಯೋಜನೆ ರೂಪಿಸಲಾಗುತ್ತಿದೆ. ಶಾಲೆಗಳ ದುರಸ್ತಿಗೆ ಅನುದಾನ ನೀಡಲಾಗುವುದು. ಕೋಲಾರ ತಾಲ್ಲೂಕಿನ 4 ಶಾಲೆಗಳಲ್ಲಿ ಪ್ರತಿ ಬುಧವಾರ ಮಕ್ಕಳಿಗೆ ಸಿರಿಧಾನ್ಯದ ಬಿಸಿಯೂಟ ನೀಡಲಾಗುತ್ತಿದೆ. ಇದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ’ ಎಂದು ವಿವರಿಸಿದರು.

‘ಬೆಗ್ಲಿ ಶಾಲೆ ನಿರ್ವಹಣೆ, ಅಡುಗೆ ಮನೆಯ ಸ್ವಚ್ಛತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ‘ಮಕ್ಕಳಲ್ಲಿ ಶಿಸ್ತು, ಸಂಸ್ಕಾರ ಬೆಳೆಸಬೇಕು. ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಮೂಡಿಸಿ’ ಎಂದು ಕಿವಿಮಾತು ಹೇಳಿದರು.

ಶಾಲೆಯಿಂದ ಕುಷ್ಟಗಿ ಜಿಲ್ಲೆಗೆ ವರ್ಗಾವಣೆಗೊಂಡ ಕನ್ನಡ ಶಿಕ್ಷಕಿ ಯಲ್ಲವ್ವ ಅವರನ್ನು ಸನ್ಮಾನಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ, ಶಾಲೆಯ ಮುಖ್ಯ ಶಿಕ್ಷಕ ಮಹದೇವನಾಯಕ್, ಪಟ್ನ ಶಾಲೆ ಮುಖ್ಯ ಶಿಕ್ಷಕ ನಾಗರಾಜ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ನಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT