ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಸ್ಥೈರ್ಯದಿಂದ ಸಮಸ್ಯೆ ಎದುರಿಸಿ

ಮಹಿಳೆಯರಿಗೆ ಎಸ್‌ಡಿಸಿ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಉಷಾ ಗಂಗಾಧರ್ ಸಲಹೆ
Last Updated 2 ಮಾರ್ಚ್ 2019, 14:06 IST
ಅಕ್ಷರ ಗಾತ್ರ

ಕೋಲಾರ: ‘ಮಹಿಳೆಯರು ಸಮಾಜದಲ್ಲಿ ಎದುರಾಗುವ ಸಮಸ್ಯೆಯನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕು’ ಎಂದು ಎಸ್‌ಡಿಸಿ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಉಷಾ ಗಂಗಾಧರ್ ಸಲಹೆ ನೀಡಿದರು.

ಪ್ರಜಾ ಸೇವಾ ಸಮಿತಿಯು ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪ್ರತಿ ಕ್ಷೇತ್ರದಲ್ಲೂ ಮುಂದಿದ್ದಾರೆ. ಹಲವು ಮಹಿಳೆಯರು ಅನನ್ಯ ಸಾಧನೆ ಮಾಡಿ ಇತರರಿಗೆ ಸ್ಫೂರ್ತಿಯಾಗಿದ್ದಾರೆ’ ಎಂದು ಅಭಿಪ್ರಾಯಪಟ್ಟರು.

‘ಹೆಣ್ಣು ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ. ಸರ್ಕಾರಗಳು ಮಹಿಳಾ ಸಬಲೀಕರಣಕ್ಕಾಗಿ ಅನೇಕ ಯೋಜನೆ ಜಾರಿಗೆ ತಂದಿದ್ದು, ಇದರ ಪ್ರಯೋಜನ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ನಿರ್ಣಾಯಕ’ ಎಂದು ಹೇಳಿದರು.

‘ಮಹಿಳೆಯರ ಶ್ರಮದಿಂದಾಗಿ ಸಾಕಷ್ಟು ಸಾಮಾಜಿಕ ಬದಲಾವಣೆಗಳಾಗುತ್ತಿವೆ. ಜತೆಗೆ ಸಮಾಜವು ಅಭಿವೃದ್ಧಿಯಲ್ಲಿ ಮುಂದಿದೆ’ ಎಂದು ವಕೀಲ ಸಿ.ಬಿ.ಜಯರಾಮ್ ಅಭಿಪ್ರಾಯಪಟ್ಟರು.

ವೇದಿಕೆ ಕಲ್ಪಿಸಿ: ‘ಮನಸ್ಸು ಮಾಡಿದರೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡುವ ಶಕ್ತಿ ಮಹಿಳೆಯರಿಗಿದೆ. ಆದರೆ, ಸಹಕಾರ ಸಿಗದ ಕಾರಣಕ್ಕೆ ಮಹಿಳಾ ಸಾಧಕರು ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಿಳೆಯರಲ್ಲಿರುವ ಪ್ರತಿಭೆ ಅನಾವರಣಕ್ಕೆ ಸಂಘ ಸಂಸ್ಥೆಗಳು ವೇದಿಕೆ ಕಲ್ಪಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸರ್ಕಾರ ಅನೇಕ ಯೋಜನೆ ರೂಪಿಸಿದ್ದು, ಅದರ ಪ್ರಯೋಜನೆ ಪಡೆಯಬೇಕು. ಸ್ವಚ್ಛ ಭಾರತ್ ಯೋಜನೆಯಡಿ ನಿರ್ಮಿಸಿರುವ ಶೌಚಾಲಯಗಳನ್ನು ಸಮರ್ಪಕವಾಗಿ ಬಳಸಿ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನಿರ್ಮಾಣ ಮಾಡಬೇಕು’ ಎಂದರು.

ಲೈಂಗಿಕ ದೌರ್ಜನ್ಯ: ‘ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮೂಲಕ ಶೌಚಾಲಯರಹಿತ ಕುಟುಂಬಗಳನ್ನು ಫಲಾನುಭವಿಗಳನ್ನು ಗುರುತಿಸಿ ಸರ್ಕಾರವೇ ಸ್ವಚ್ಛ ಭಾರತ್ ಯೋಜನೆಯಡಿ ಶೌಚಾಲಯ ನಿರ್ಮಿಸಿಕೊಟ್ಟಿದೆ. ಆದರೆ, ಶೌಚಾಲಯಗಳನ್ನು ಕುರಿ, ಕೋಳಿ ಕೂಡಿ ಹಾಕಲು ಬಳಸಲಾಗುತ್ತಿದೆ’ ಎಂದು ವಿಷಾದಿಸಿದರು.

‘ಬಯಲು ಬಹಿರ್ದೆಸೆಯಿಂದ ಆರೋಗ್ಯದ ಮೇಲೆ ದುಷ್ಟರಿಣಾಮವಾಗುತ್ತದೆ. ಈ ಸಂಗತಿ ಅರಿತು ಬಯಲು ಬಹಿರ್ದೆಸೆ ನಿರ್ಮೂಲನೆಗೆ ಸಂಕಲ್ಪ ಮಾಡಿ. ಇತ್ತೀಚಿಗೆ ತಾಲ್ಲೂಕಿನ ನರಸಾಪುರದಲ್ಲಿ ತಾತ್ಕಲಿಕ ಟೆಂಟ್‌ನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯರ ಮೇಲೆ ಕಿಡಿಗೇಡಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಇಂತಹ ಪ್ರಕರಣ ಮರುಕಳಿಸದಂತೆ ಎಚ್ಚರ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.

ಕನಿಷ್ಠ ವೇತನ: ‘ಸರ್ಕಾರವು ಬಿಸಿಯೂಟ ನೌಕರರು ಹಾಗೂ ಅಂಗನವಾಡಿ ನೌಕರರ ಗೌರವಧನವನ್ನು ₹ 500ರಿಂದ 3 ಸಾವಿರಕ್ಕೆ ಹೆಚ್ಚಿಸಿದೆ. ತಾಳ್ಮೆ ಇದ್ದರೆ ಭವಿಷ್ಯದಲ್ಲಿ ಕನಿಷ್ಠ ವೇತನ ಜಾರಿಯಾಗಬಹುದು’ ಎಂದು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಬಾಲಾಜಿ ತಿಳಿಸಿದರು.

ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆ ಅಧಿಕಾರಿ ವೆಂಕಟರಾಮ್, ಅಂಗನವಾಡಿ ನೌಕರರ ಕ್ಷೇಮಾಭಿವೃದ್ಧಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಶಿವಣ್ಣ, ರೈತ ಸಂಘ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ಹರಟಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಜಿ.ಶ್ರೀನಿವಾಸ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT