ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಕ್ಷಣಿಕ ಸಾಧನೆಯಲ್ಲಿ ಜಿಲ್ಲೆಗೆ ಹಿನ್ನಡೆ

ಶಿಕ್ಷಕರ ದಿನಾಚರಣೆಯಲ್ಲಿ ಸಂಸದ ಮುನಿಸ್ವಾಮಿ ವಿಷಾದ
Last Updated 5 ಸೆಪ್ಟೆಂಬರ್ 2019, 14:03 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯು ಶೈಕ್ಷಣಿಕ ಸಾಧನೆಯಲ್ಲಿ ಮುಂಚೂಣಿಯಲ್ಲಿತ್ತು. ಈ ಹಿಂದೆ ಇಲ್ಲಿನವರೇ ಹೆಚ್ಚಿನ ಸಂಖ್ಯೆಯಲ್ಲಿ ಕೇಂದ್ರ ಹಾಗೂ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಿದ್ದರು. ಆದರೆ, ಈಗ ಸ್ವಲ್ಪ ಹಿನ್ನಡೆಯಾಗಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ವಿಷಾದಿಸಿದರು.

ಜಿಲ್ಲಾಡಳಿತವು ಇಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರ ಸ್ಥಾಪನೆ ಮಾಡುತ್ತೇವೆ’ ಎಂದು ಭರವಸೆ ನೀಡಿದರು.

‘ಶಿಲೆಯನ್ನು ಶಿಲ್ಪವಾಗಿಸುವ ಶಿಕ್ಷಕರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಖಾಸಗಿ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‍ಆರ್) ನೀಡುವ ಹಣವನ್ನು ಶಾಲೆಗಳ ಅಭಿವೃದ್ಧಿಗೆ ಬಳಕೆ ಮಾಡಬೇಕು. ಶಾಲೆ ಆವರಣವನ್ನು ಹಸಿರಾಗಿಸಿ ಉತ್ತಮ ಪರಿಸರ ನಿರ್ಮಾಣ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು. ಮುಂದಿನ ಶಿಕ್ಷಕರ ದಿನಾಚರಣೆ ವೇಳೆಗೆ ಗುರುಭವನ ನಿರ್ಮಾಣ ಮಾಡಬೇಕು’ ಎಂದು ಹೇಳಿದರು.

‘ಶಿಕ್ಷಕರು ಶಾಲಾ ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಬೇಕು. ವಾರಕ್ಕೊಂದು ದಿನ ಗ್ರಾಮಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಬೇಕು. ಹಳೆ ವಿದ್ಯಾರ್ಥಿಗಳ ನೆರವು ಪಡೆದು ಶಾಲೆ ಅಭಿವೃದ್ಧಿಪಡಿಸಬೇಕು’ ಎಂದು ಸಲಹೆ ನೀಡಿದರು.

ರಾಧಾಕೃಷ್ಣನ್ ಆದರ್ಶ: ‘ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಕರಾಗಿ ಸೇವೆ ಸಲ್ಲಿಸಿ ರಾಷ್ಟ್ರಪತಿ ಹುದ್ದೆ ಅಲಂಕರಿಸುವ ಮಟ್ಟಿಗೆ ಬೆಳೆದರು. ಅವರ ಆದರ್ಶ, ದೂರದೃಷ್ಟಿ ಶಿಕ್ಷಕರಲ್ಲಿ ಮೂಡಬೇಕು. ವಿದ್ಯಾರ್ಥಿಗಳನ್ನು ಶಾಲೆಯತ್ತ ಸೆಳೆಯುವ ಶಕ್ತಿ ಪಡೆದುಕೊಳ್ಳಿ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಕಿವಿಮಾತು ಹೇಳಿದರು.

‘ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ತಾ.ಪಂಗೆ ಕೇವಲ ₹ 15 ಲಕ್ಷ ಬರುತ್ತದೆ. ಈ ಹಣ ಸಾಲದು. ಜಿಲ್ಲೆಯಲ್ಲಿ ಆರಂಭಗೊಂಡಿರುವ ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ ಮತ್ತಷ್ಟು ಸೌಕರ್ಯ ಒದಗಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ ಮನವಿ ಮಾಡಿದರು.

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ 18 ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ವಿಧಾನ ಪರಿಷತ್‌ ಸದಸ್ಯ ಆರ್‌.ಚೌಡರೆಡ್ಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಶೈಲಾ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್‌) ಪ್ರಾಂಶುಪಾಲ ಶ್ರೀಕಂಠ, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ (ಡಿವೈಪಿಸಿ) ಶ್ರೀನಿವಾಸಮೂರ್ತಿ, ಶಿಕ್ಷಣ ಅಧಿಕಾರಿಗಳಾದ ನಾಗೇಂದ್ರಪ್ರಸಾದ್, ಸಿ.ಆರ್.ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಗಾನಂದ ಕೆಂಪರಾಜು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಬಿ.ಅಶೋಕ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT