ಬುಧವಾರ, ಫೆಬ್ರವರಿ 19, 2020
23 °C

‘ಸಿದ್ದರಾಮಯ್ಯರ ಸರ್ಟಿಫಿಕೇಟ್‌ ಬೇಕಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಅಧಿಕಾರ ನೀಡುವುದು ಜನರೇ ವಿನಃ ಸಿದ್ದರಾಮಯ್ಯ ಅಲ್ಲ. 14 ತಿಂಗಳ ನನ್ನ ಆಡಳಿತಕ್ಕೆ ಯಾರಿಂದಲೂ ಸರ್ಟಿಫಿಕೇಟ್‌ ಪಡೆಯುವ ಅಗತ್ಯವಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲವೆಂಬ ಸಿದ್ದರಾಮಯ್ಯರ ಹೇಳಿಕೆಗೆ ಇಲ್ಲಿ ಶುಕ್ರವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ‘ನಾನು ಅಧಿಕಾರಕ್ಕಾಗಿ ಯಾರ ಮನೆ ಬಾಗಿಲಿಗೂ ಹೋಗಿಲ್ಲ. ನನ್ನ ಮನೆ ಬಾಗಿಲಿಗೆ ಬಂದಿದ್ದು ಯಾರೆಂದು ಸಿದ್ದರಾಮಯ್ಯ ಅವರೇ ಹೇಳಲಿ’ ಎಂದು ವಾಗ್ದಾಳಿ ನಡೆಸಿದರು.

‘5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರ ಸಂಖ್ಯೆಯನ್ನು 78ಕ್ಕೆ ತಂದು ನಿಲ್ಲಿಸಿದರು. 2013ರಲ್ಲಿ ಯಡಿಯೂರಪ್ಪ ಬಿಜೆಪಿ ತೊರೆದು ಬೇರೆ ಪಕ್ಷ ಮಾಡದೆ ಹೋಗಿದ್ದರೆ ಕಾಂಗ್ರೆಸ್‌ನ ಸ್ಥಿತಿ ಏನಾಗುತ್ತಿತ್ತು? ಹಿಂದಿನದನ್ನು ಮರೆತಿರುವ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ. ಅದನ್ನು ಬಿಟ್ಟು ನನ್ನನ್ನು ಟೀಕಿಸುವುದು ಸರಿಯಲ್ಲ’ ಎಂದು ಗುಡುಗಿದರು.

‘ನಮ್ಮ ಪಕ್ಷದ ಶಕ್ತಿ ಏನೆಂದು ಗೊತ್ತಿದೆ. ಒಳ್ಳೆಯ ಕೆಲಸ ಮಾಡಿದ್ದೇನೆ. ನನಗೂ ಒಂದು ಅವಕಾಶ ಕೊಡಿ ಎಂದು ಜನರನ್ನು ಕೇಳಿದ್ದೇನೆ. ಇದರಲ್ಲಿ ತಪ್ಪೇನಿದೆ? ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಜತೆ ಬಹಿರಂಗ ಚರ್ಚೆಗೆ ಸಿದ್ಧ’ ಎಂದು ಸವಾಲು ಹಾಕಿದರು.

‘ಮೈತ್ರಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ₹19 ಸಾವಿರ ಕೋಟಿ ಅನುದಾನ ನೀಡಿದೆ. ಈಗ ಬಿಜೆಪಿ ಸರ್ಕಾರದಲ್ಲಿ ಏನಾಗಿದೆ. ಯಡಿಯೂರಪ್ಪರ ಮೇಲೆ ಅನುಕಂಪ ವ್ಯಕ್ತಪಡಿಸುತ್ತಿರುವ ಸಿದ್ದರಾಮಯ್ಯ ಅವರಿಗೆ 14 ತಿಂಗಳ ನಮ್ಮ ಕಷ್ಟ ಅರ್ಥವಾಗಲಿಲ್ಲವೇ?’ ಎಂದು ಪ್ರಶ್ನಿಸಿದರು.

‘ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದವರು ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಬಿಜೆಪಿಯ ಆಂತರಿಕ ಜಗಳದಲ್ಲಿ ಮೂಗು ತೂರಿಸುವುದಿಲ್ಲ. ರಾಜಕಾರಣದಲ್ಲಿ ಏನಾಗುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಯಡಿಯೂರಪ್ಪ ಅವರಿಗೆ ಸಾಕಷ್ಟು ಅನುಭವವಿದ್ದು, ಅವರ ಪಕ್ಷದ ಸಮಸ್ಯೆ ಬಗೆಹರಿಸಿಕೊಳ್ಳುತ್ತಾರೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು