ಮಂಗಳವಾರ, ಮೇ 11, 2021
27 °C
ಪೊಲೀಸರ ಜತೆ ಸಾರಿಗೆ ನೌಕರರ ಕುಟುಂಬ ಸದಸ್ಯರ ವಾಗ್ವಾದ

ಕೆಎಸ್‌ಆರ್‌ಟಿಸಿ ಕಚೇರಿಗೆ ಮುತ್ತಿಗೆ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ಕುಟುಂಬ ಸದಸ್ಯರು ಇಲ್ಲಿ ಗುರುವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲು ಯತ್ನಿಸಿದರು.

ಆಗ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದರಿಂದ ಪರಸ್ಪರ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಬಳಿಕ ಪೊಲೀಸರು ಸಾರಿಗೆ ನೌಕರರ ಕುಟುಂಬ ಸದಸ್ಯರನ್ನು ವಶಕ್ಕೆ ತೆಗೆದುಕೊಂಡು ಪರಿಸ್ಥಿತಿ ತಿಳಿಗೊಳಿಸಿದರು.

‘ಆರನೇ ವೇತನ ಆಯೋಗದ ಶಿಫಾರಸ್ಸು ಜಾರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಸತತ 9 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಸರ್ಕಾರ ಸೌಜನ್ಯಕ್ಕೂ ಮುಷ್ಕರನಿರತ ನೌಕರರ ಅಹವಾಲು ಆಲಿಸುವ ಪ್ರಯತ್ನ ಮಾಡಿಲ್ಲ’ ಎಂದು ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

‘ಚಾಲಕರು ಮತ್ತು ನಿರ್ವಾಹಕರು ಜೀವದ ಹಂಗು ತೊರೆದು ಹಗಲು ರಾತ್ರಿ ಕರ್ತವ್ಯ ನಿರ್ವಹಿಸುತ್ತಾರೆ. ಆದರೆ, ಸರ್ಕಾರಕ್ಕೆ ನೌಕರರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಸಾರಿಗೆ ನೌಕರರ ಹಿತ ಕಡೆಗಣಿಸಿದ್ದಾರೆ. ಈ ಧೋರಣೆ ಸರಿಯಲ್ಲ’ ಎಂದು ಕಿಡಿಕಾರಿದರು.

‘ನೌಕರರು ಬೇಡಿಕೆಗಳು ನ್ಯಾಯಯುತವಾಗಿವೆ. ಸರ್ಕಾರ ಈ ಬೇಡಿಕೆಗಳನ್ನು ಈಡೇರಿಸುವುದನ್ನು ಬಿಟ್ಟು ನೌಕರರ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ದುರುದ್ದೇಶಪೂರ್ವಕವಾಗಿ ನೌಕರರ ವೇತನ ತಡೆ ಹಿಡಿಯಲಾಗಿದೆ. ಅಲ್ಲದೇ, ಸಾಕಷ್ಟು ನೌಕರರನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ. ವೇತನ ಬಾರದ ಕಾರಣ ಜೀವನ ನಿರ್ವಹಣೆ ಕಷ್ಟವಾಗಿದೆ’ ಎಂದು ಅಳಲು ತೋಡಿಕೊಂಡರು.

ತಾರತಮ್ಯ ನೀತಿ: ‘ಸರ್ಕಾರ ಸಾರಿಗೆ ನೌಕರರ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಇತರೆ ಇಲಾಖೆಗಳಲ್ಲಿನ ನೌಕರರಿಗೆ ಹೆಚ್ಚಿನ ವೇತನವಿದೆ. ಆದರೆ, ಸಾರಿಗೆ ನೌಕರರ ವೇತನ ತುಂಬಾ ಕಡಿಮೆಯಿದೆ. ವೇತನ ತಾರತಮ್ಯ ನಿವಾರಿಸುವಂತೆ ಸಾರಿಗೆ ನೌಕರರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಬೇಡಿಕೆಗೆ ಸ್ಪಂದಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸರ್ಕಾರ ಹಟಮಾರಿತನ ಬಿಟ್ಟು ಮುಷ್ಕರನಿರತ ಸಾರಿಗೆ ನೌಕರರೊಂದಿಗೆ ಮಾತುಕತೆ ನಡೆಸಬೇಕು. ಆರನೇ ವೇತನ ಆಯೋಗದ ಶಿಫಾರಸ್ಸು ಜಾರಿ ಮಾಡಬೇಕು. ನೌಕರರ ಮೇಲಿನ ಶೋಷಣೆ ತಪ್ಪಿಸಬೇಕು. ವರ್ಗಾವಣೆ ನೀತಿ ಸರಳಗೊಳಿಸಬೇಕು. ತಡೆ ಹಿಡಿದಿರುವ ವೇತನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಮನವೊಲಿಕೆ ಪ್ರಯತ್ನ: ಶಾಸಕ ಕೆ.ಶ್ರೀನಿವಾಸಗೌಡ ಹಾಗೂ ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಅವರು ಸ್ಥಳಕ್ಕೆ ಬಂದು ಸಾರಿಗೆ ನೌಕರರ ಕುಟುಂಬ ಸದಸ್ಯರ ಅಹವಾಲು ಆಲಿಸಿದರು. ಅಲ್ಲದೇ, ಮುಷ್ಕರನಿರತ ನೌಕರರನ್ನು ಭೇಟಿಯಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಮನವೊಲಿಸುವ ಪ್ರಯತ್ನ ಮಾಡಿದರು.

ಸಾರಿಗೆ ನೌಕರರ ಮುಷ್ಕರದಿಂದ ಗುರುವಾರ ಬಸ್‌ಗಳು ಇಲ್ಲದೆ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಯಿತು. ಯುಗಾದಿ ಹಬ್ಬ ಆಚರಣೆಗಾಗಿ ಜಿಲ್ಲೆಗೆ ಬಂದಿದ್ದವರು ಬೆಂಗಳೂರು ಸೇರಿದಂತೆ ಬೇರೆ ಊರುಗಳಿಗೆ ಹೋಗಲು ಬಸ್‌ ಇಲ್ಲದೆ ಪರದಾಡಿದರು. ಕೆಎಸ್‌ಆರ್‌ಟಿಸಿ ಬಸ್‌ಗಳು ಇಲ್ಲದ ಕಾರಣ ಪ್ರಯಾಣಿಕರು ಖಾಸಗಿ ಬಸ್‌ಗಳ ಮೊರೆ ಹೋದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.