ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ರೇಷ್ಮೆ ಕೃಷಿ ರೈತರ ಆರ್ಥಿಕ ಜೀವಾಳ- ಇಂದ್ರಾಣಿ

Last Updated 9 ನವೆಂಬರ್ 2021, 16:28 IST
ಅಕ್ಷರ ಗಾತ್ರ

ಕೋಲಾರ: ‘ಚೀನಾ ರೇಷ್ಮೆ ಆಮದು ತಡೆ ಜತೆಗೆ ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭದಾಯಕವಾಗಿ ರೇಷ್ಮೆ ಕೃಷಿ ನಿರ್ವಹಣೆ ಮಾಡಲು ರೈತರು ತಾಂತ್ರಿಕ ಅರಿವು ಪಡೆಯಬೇಕು’ ಎಂದು ಚನ್ನಪಟ್ಟಣದ ರೇಷ್ಮೆ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕಿ ಇಂದ್ರಾಣಿ ಕಿವಿಮಾತು ಹೇಳಿದರು.

ತಾಲ್ಲೂಕಿನ ಚೋಳಘಟ್ಟ ಗ್ರಾಮದಲ್ಲಿ ರೇಷ್ಮೆ ಬೆಳೆಗಾರರಿಗೆ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ರೇಷ್ಮೆ ಕೃಷಿಯು ಜಿಲ್ಲೆಯ ರೈತರ ಆರ್ಥಿಕ ಜೀವಾಳವಾಗಿದೆ. ಈ ಉದ್ಯಮದಲ್ಲಿ ಖರ್ಚು ಕಡಿಮೆ ಮಾಡಿ ಲಾಭ ಹೆಚ್ಚಿಸುವ ಹಾದಿಯಲ್ಲಿ ಇಲಾಖೆ ನೀಡುವ ತಂತ್ರಜ್ಞಾನದ ಸದುಪಯೋಗ ಪಡೆಯಬೇಕು’ ಎಂದು ಸಲಹೆ ನೀಡಿದರು.

‘ರೇಷ್ಮೆ ಉತ್ಪಾದನೆಯಲ್ಲಿ ದೇಶವು ಜಾಗತಿಕವಾಗಿ 2ನೇ ಸ್ಥಾನದಲ್ಲಿದೆ. ಚೀನಾ ಮೊದಲ ಸ್ಥಾನದಲ್ಲಿದೆ. ನೂಲು ಬಿಚ್ಚಾಣಿಕೆದಾರರು ಗುಣಮಟ್ಟದ ನೆಪ ಮಾಡಿಕೊಂಡು ಚೀನಾ ರೇಷ್ಮೆಗೆ ಬೇಡಿಕೆಯೊಡ್ಡುತ್ತಾರೆ. ರೈತರು ಗುಣಮಟ್ಟದ ರೇಷ್ಮೆಗೂಡು ಉತ್ಪಾದಿಸಿದರೆ ಚೀನಾ ರೇಷ್ಮೆ ಆಮದು ನಿಲ್ಲುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ಜಿಲ್ಲೆಯ ರೇಷ್ಮೆಗೂಡಿಗೆ ಹೆಚ್ಚಿನ ಬೇಡಿಕೆಯಿದೆ. ರೇಷ್ಮೆ ಇಲಾಖೆಯಲ್ಲಿ ಹಲವು ಯೋಜನೆಗಳಿದ್ದು, ರೈತರು ಇವುಗಳನ್ನು ಸದ್ಬಳಕೆ ಮಾಡಿಕೊಂಡು ಗುಣಮಟ್ಟದ ಹಿಪ್ಪುನೇರಳೆ ಬೆಳೆಯಬೇಕು. ವಿದೇಶಿ ಪೈಪೋಟಿಗೆ ಅನುಗುಣವಾಗಿ ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಂಡು ದ್ವಿತಳಿ ರೇಷ್ಮೆಗೂಡು ಉತ್ಪಾದಿಸಬೇಕು. ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡು ದ್ವಿತಳಿ ಗೂಡು ಉತ್ಪಾದಿಸಬೇಕು ಮತ್ತು ಚಳಿಗಾಲದಲ್ಲಿ ಸುಣ್ಣಕಟ್ಟು ರೋಗ ನಿಯಂತ್ರಣಕ್ಕೆ ಕ್ರಮ ವಹಿಸಬೇಕು’ ಎಂದು ಸಲಹೆ ನೀಡಿದರು.

‘ಚೀನಾ ರೇಷ್ಮೆ ಆಮದಿನಿಂದ ದೇಶದ ರೇಷ್ಮೆ ಬೆಳೆಗಾರರು ಹಾಗೂ ನೂಲು ಬಿಚ್ಚಾಣಿಕೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಶದ ರೈತರು ಗುಣಮಟ್ಟದ ರೇಷ್ಮೆ ಉತ್ಪಾದಿಸಿದರೆ ನೂಲು ಬಿಚ್ಚಾಣಿಕೆದಾರರು ಸ್ವದೇಶಿ ನೂಲು ಖರೀದಿಸುತ್ತಾರೆ. ವೈಜ್ಞಾನಿಕ ಕೃಷಿ ಪದ್ಧತಿ ಅನುಸರಿಸಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ಪಡೆಯಬಹುದು’ ಎಂದರು.

ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಎಂ.ಎಸ್.ಕಲ್ಯಾಣಸ್ವಾಮಿ, ರೇಷ್ಮೆ ವಿಸ್ತರಣಾಧಿಕಾರಿಗಳಾದ ಎನ್.ಚಂದ್ರಶೇಖರಗೌಡ, ಜಯಶಂಕರ್‌, ಪ್ರಗತಿಪರ ರೈತರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT