ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎನ್‌ಆರ್‌ ಆಸ್ಪತ್ರೆ ಅವ್ಯವಸ್ಥೆ: ಸಿಬ್ಬಂದಿಗೆ ತರಾಟೆ

ಆಸ್ಪತ್ರೆಯಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವೀರಪ್ಪ ಪರಿಶೀಲನೆ
Last Updated 6 ಮೇ 2022, 13:42 IST
ಅಕ್ಷರ ಗಾತ್ರ

ಕೋಲಾರ: ‘ಚಿಕಿತ್ಸೆ ಬಯಸಿ ಆಸ್ಪತ್ರೆಗೆ ಬರುವ ಬಡ ರೋಗಿಗಳು ಪ್ರಾಣಿಗಳಲ್ಲ. ಅವರು ನಮ್ಮಂತೆಯೇ ಮನುಷ್ಯರು. ಮನೆಯವರು ಅಥವಾ ಸಂಬಂಧಿಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದರೆ ಇದೇ ರೀತಿ ನಿರ್ಲಕ್ಷ್ಯ ತೋರುತ್ತಿದ್ದಿರಾ?’ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವಿ.ವೀರಪ್ಪ ಇಲ್ಲಿನ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಎಸ್‌ಎನ್ಆರ್‌ ಆಸ್ಪತ್ರೆಗೆ ಶುಕ್ರವಾರ ದಿಢೀರ್‌ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ರೋಗಿಗಳ ಅಹವಾಲು ಆಲಿಸಿದ ಅವರು, ‘ಸರ್ಕಾರ ರೋಗಿಗಳ ಆರೈಕೆಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತದೆ. ಆದರೆ, ಆಸ್ಪತ್ರೆ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಯು ರೋಗಿಗಳನ್ನು ಪಶುಗಳಂತೆ ಪರಿಗಣಿಸಿ ಉತ್ತಮ ವೈದ್ಯಕೀಯ ಸೇವೆ ನೀಡದೆ ನಿರ್ಲಕ್ಷಿಸಿದ್ದೀರಿ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.‌

‘ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಯ ಕಾರ್ಯವೈಖರಿ ಸಮಾಧಾನಕರವಾಗಿಲ್ಲ. ಜತೆಗೆ ಆಸ್ಪತ್ರೆಯಲ್ಲಿ ಸ್ವಚ್ಛತೆಯಿಲ್ಲ ಮತ್ತು ಮೂಲಸೌಕರ್ಯಗಳಿಲ್ಲ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಸರ್ಕಾರ ಯಾವುದೇ ಕ್ರಮ ಜರುಗಿಸದಿದ್ದರೆ ಪ್ರಾಧಿಕಾರದಿಂದಲೇ ಅರ್ಜಿ ಹಾಕಿ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವ ಕೆಲಸ ಮಾಡುತ್ತೇವೆ’ ಎಂದು ಗುಡುಗಿದರು.

‘ರಾಜ್ಯದ ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳು ಮತ್ತು ಔಷಧ ಮಾತ್ರೆಗಳ ಕೊರತೆ ಇದೆ. ಈ ಬಗ್ಗೆ ಸಾಕಷ್ಟು ದೂರು ಬಂದಿವೆ. ಈ ಹಿನ್ನೆಲ್ಲೆಯಲ್ಲಿ ಹಲವು ಜಿಲ್ಲೆಗಳಿಗೆ ಖುದ್ದು ಭೇಟಿ ಕೊಟ್ಟು ಆಸ್ಪತ್ರೆಗಳ ಪರಿಸ್ಥಿತಿ ಪರಿಶೀಲಿಸುತ್ತಿದ್ದೇವೆ' ಎಂದು ಹೇಳಿದರು.

‘ಜಿಲ್ಲೆಯ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಸೌಕರ್ಯಗಳಿಲ್ಲ. ಈ ಆಸ್ಪತ್ರೆಗೆ ಹೆಚ್ಚಾಗಿ ಬಡವರು ಬರುತ್ತಾರೆ. ಅವರಿಗೆ ಉತ್ತಮ ಸೇವೆ ನೀಡುವುದು ವೈದ್ಯರ ಜವಾಬ್ದಾರಿ ಆಗಬೇಕು. ಆಸ್ಪತ್ರೆಯಲ್ಲಿನ ನ್ಯೂನತೆಗಳನ್ನು ಕೂಡಲೇ ಸರಿಪಡಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಕಾರಾಗೃಹಕ್ಕೆ ಭೇಟಿ: ಬಳಿಕ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ಅಧ್ಯಕ್ಷರು, ಕೈದಿಗಳಿಗೆ ಕಾನೂನುಬದ್ಧವಾಗಿ ಒದಗಿಸಬೇಕಾದ ಸೌಲಭ್ಯಗಳ ಬಗ್ಗೆ ಜೈಲಿನ ಸಿಬ್ಬಂದಿ ಜತೆ ಚರ್ಚಿಸಿದರು.

‘ಕಾರಾಗೃಹದಲ್ಲಿ ಕೈದಿಗಳ ಭೇಟಿ ಮಾಡುವ ಸ್ಥಳ ಕಿರಿದಾಗಿದೆ. ಜತೆಗೆ ಕೈದಿಗಳಿಗೆ ವೈದ್ಯಕೀಯ ಸೇವೆ, ಗ್ರಂಥಾಲಯ ಸೌಲಭ್ಯವಿಲ್ಲ. ಈ ಸೌಲಭ್ಯಗಳನ್ನು ನೀಡಲು ಕಟ್ಟಡ ಹಳೆಯಾಗಿದ್ದು, ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸುತ್ತೇವೆ’ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ಎನ್‌.ವಿಜಯ್‌ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT