ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಎಚ್.ಮುನಿಯಪ್ಪ ಪರ, ವಿರುದ್ಧ ಘೋಷಣೆ: ಗುಂಪುಗಳ ನಡುವೆ ಮಾತಿನ ಚಕಮಕಿ, ತಳ್ಳಾಟ

Last Updated 3 ಮೇ 2019, 11:08 IST
ಅಕ್ಷರ ಗಾತ್ರ

ಕೋಲಾರ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಶನಿವಾರ ನಗರದಲ್ಲಿ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಭೆಯಲ್ಲಿ ಕಾಂಗ್ರೆಸ್‌ನ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆಯಿತು.

ಸಭೆಗೆ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಬರುತ್ತಿದ್ದಂತೆಯೇ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ವಿರುದ್ಧ ಘೋಷಣೆ ಕೂಗಲಾರಂಭಿಸಿದರು. ಇದರಿಂದ ಮತ್ತೊಂದು ಗುಂಪಿನ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.

ಈ ವೇಳೆ ಮತ್ತೊಂದು ಗುಂಪಿನವರು ಕೆ.ಎಚ್.ಮುನಿಯಪ್ಪ ಪರವಾಗಿ ಘೋಷಣೆ ಕೂಗಿದಾಗ ಪರಿಸ್ಥಿತಿ ಕೈಮೀರಿತು. ಮಾತಿನ ಚಕಮಕಿಗಳು ಜೋರಾದವು. ಅಲ್ಲದೆ ಕೆಲ ಮುಖಂಡರು ವೇದಿಕೆಗೆ ಏರಿ ಕೆ.ಎಚ್.ಮುನಿಯಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕೆ.ಎಚ್.ಮುನಿಯಪ್ಪ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸಂಕಷ್ಟಗಳನ್ನು ಹೇಳಿಕೊಳ್ಳುವುದಕ್ಕೂ ಸಿಗುತ್ತಿಲ್ಲ. ಹೀಗಾಗಿ ನಮಗೆ ಇಂತಹ ವ್ಯಕ್ತಿ ಬೇಕಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

2004ರ ವಿಧಾನಸಭೆ ಚುನಾವಣೆಯಲ್ಲಿ ಬೇಡ ಎಂದರೂ ಕೆ.ಶ್ರೀನಿವಾಸಗೌಡರನ್ನು ಅಭ್ಯರ್ಥಿಯನ್ನಾಗಿಸಿದರು, 2008ರಲ್ಲಿ ವರ್ತೂರ್‌ ಪ್ರಕಾಶ್‌ಗೆ ಬೆಂಬಲ ನೀಡಿದರು. 2013ರ ಚುನಾವಣೆಯಲ್ಲಿ ಕೋಲಾರ ಕ್ಷೇತ್ರಕ್ಕೆ ತಾನು ಬೇಡವೆಂದು ನಜೀರ್ ಅಹಮದ್ ಅವರೇ ಹೇಳಿದರೂ ಕೇಳದೆ ಇಲ್ಲಿ ಅಭ್ಯರ್ಥಿಯನ್ನಾಗಿ ಮಾಡಿ, ಮತ್ತೆ ವರ್ತೂರ್‌ಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ನಮ್ಮ ಅಭ್ಯರ್ಥಿಯನ್ನು ಸೋಲಿಸಿದರು.

2018ರ ವಿಧಾನಸಭೆ ಚುನಾವಣೆಯಲ್ಲಿಯೂ ಜಮೀರ್‌ಪಾಷ ಅವರಿಗೆ ಆಸೆಯುಟ್ಟಿಸಿ ಕರೆತಂದು ಹೀನಾಯವಾಗಿ ಸೋಲಿಸಿದರು. ಹೀಗೆ ಸತತವಾಗಿ ಅಲ್ಪಸಂಖ್ಯಾತರು ಸೇರಿದಂತೆ ಇತರರಿಗೂ ಅನ್ಯಾಯ ಮಾಡುತ್ತಿರುವ ಕೆ.ಎಚ್.ಮುನಿಯಪ್ಪ ಪರ ನಾವು ಯಾಕೆ ಕೆಲಸ ಮಾಡಬೇಕು ಎಂದು ಪ್ರಶ್ನಿಸಿದರು.

ವೇದಿಕೆಯಲ್ಲಿದ್ದ ಸಿ.ಎಂ.ಇಬ್ರಾಹಿ, ನಜೀರ್ ಅಹಮದ್, ಕೆ.ಎಚ್.ಮುನಿಯಪ್ಪ ಎರಡೂ ಕಡೆಯವರನ್ನು ಸಮಾಧಾನಪಡಿಸಲು ಯತ್ನಿಸಿದಾದರೂ, ವಿಫಲವಾಯಿತು. ಬಿಗುವಿನ ವಾತಾವರಣ ನಿರ್ಮಾಣವಾಯಿತು. ಆನಂತರ ಪೊಲೀಸರು ಮಧ್ಯ ಪ್ರವೇಶ ಮಾಡಿ ಎರಡೂ ಗುಂಪುಗಳ ಮುಖಂಡರನ್ನು ಸಮಾಧಾನಪಡಿಸಿದ ಬಳಿಕ ಪರಿಸ್ಥಿತಿ ತಿಳಿಗೊಂಡಿತು, ಆನಂತರ ಸಭೆಯು ಆರಂಭವಾಯಿತು.

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ‘ಕೆಲ ಯುವಕರು ಬಂದು ಪ್ರಶ್ನೆ ಕೇಳಿದರು ಅದಕ್ಕೆ ಉತ್ತರ ಕೊಟ್ಟಿದ್ದೇವೆ. ನಮ್ಮ ಸಮಸ್ಯೆಗಳನ್ನು ಕೇಳಲು ಸಂಸದರು ಬಂದಿಲ್ಲ ಎಂಬುರ ಬಗ್ಗೆ ತಿಳಿಸಿದ್ದಾರೆ. ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರಿಪಡಿಸಲಾಗುವುದು’ ಎಂದು ಹೇಳಿದರು.

ಸಭೆಯಲ್ಲಿ ಸಂಸದ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT