ಸೋಮವಾರ, ಸೆಪ್ಟೆಂಬರ್ 16, 2019
27 °C
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲಾಧಿಕಾರಿ ಮಂಜುನಾಥ್‌ ಹೇಳಿಕೆ

ಕ್ರೀಡೆಯು ಸಮಗ್ರ ಶಿಕ್ಷಣದ ಭಾಗ

Published:
Updated:
Prajavani

ಕೋಲಾರ: ‘ಸಮಗ್ರ ಶಿಕ್ಷಣದ ಭಾಗವಾದ ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅಭಿಪ್ರಾಯಪಟ್ಟರು.

ಇಲ್ಲಿ ಬುಧವಾರ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ‘ಮಕ್ಕಳು ಆರೋಗ್ಯವಾಗಿದ್ದರೆ ಮಾತ್ರ ಕಲಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ. ಸದೃಢ ದೇಹದಲ್ಲಿ ಸದೃಢ ಮನಸ್ಸಿರುತ್ತದೆ ಎಂಬ ಮಾತಿನಂತೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ಮುಖ್ಯ’ ಎಂದರು.

‘ಆರೋಗ್ಯ ನಿರ್ವಹಣೆಗೆ ಕ್ರೀಡೆ ಅಮೂಲ್ಯ ಸಾಧನ. ಮಕ್ಕಳ ಸರ್ವತ್ತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದ್ದು, ಕ್ರೀಡಾಸಕ್ತಿ ಇರುವ ಮಕ್ಕಳನ್ನು ಪೋಷಕರು ಮತ್ತು ಶಿಕ್ಷಕರು ಪ್ರೋತ್ಸಾಹಿಸಬೇಕು. ಕ್ರೀಡಾಪಟುಗಳು ಸೋಲು ಗೆಲುವು ಸಮನಾಗಿ ಸ್ವೀಕರಿಸಬೇಕು. ಸೋತರೆ ಬೇಸರಪಡಬೇಕಿಲ್ಲ. ಸೋಲಿಗೆ ಕಾರಣ ಹುಡುಕಿ ಅದನ್ನು ಸರಿಪಡಿಸುವ ಹಾದಿಯಲ್ಲಿ ಮುನ್ನಡೆಯಿರಿ’ ಎಂದು ಕಿವಿಮಾತು ಹೇಳಿದರು.

‘ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವಿದೆ. ಶಾಲೆಗಳಲ್ಲಿ ಶಿಸ್ತು, ಸಮಯಪ್ರಜ್ಞೆ ಬೆಳೆಸುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ, ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ’ ಎಂದು ಶುಭ ಕೋರಿದರು.

ಏಕಾಗ್ರತೆಗೆ ನೆರವು: ‘ಸಾಧನೆಯು ಸಾಧಕನ ಸ್ವತ್ತು. ಸೋಮಾರಿಗಳು ಎಂದಿಗೂ ಕ್ರೀಡಾ ಸಾಧನೆ ಮಾಡಲು ಸಾಧ್ಯವಿಲ್ಲ. ಕ್ರೀಡಾ ಚಟುವಟಿಕೆಗಳು ಕಲಿಕೆಯ ಒಂದು ಭಾಗವಾಗಬೇಕು. ಓದಿನ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಕಲಿಕೆಯಲ್ಲಿ ಏಕಾಗ್ರತೆ ಸಾಧಿಸಲು ನೆರವಾಗುತ್ತದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ಸಲಹೆ ನೀಡಿದರು.

‘ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಬದಲಿಗೆ ಭಾಗವಹಿಸುವಿಕೆ ಮುಖ್ಯ. ಕ್ರೀಡೆಗಳಿಂದ ಸ್ಪರ್ಧಾ ಮನೋಭಾವ ಮೂಡುತ್ತದೆ. ವಿದ್ಯಾರ್ಥಿಗಳು ಓದಿಗಷ್ಟೇ ಸೀಮಿತವಾದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಕ್ರೀಡೆಗಳಲ್ಲಿ ಭಾಗವಹಿಸಿದರೆ ಒತ್ತಡ ನಿವಾರಣೆಯಾಗುತ್ತದೆ. ಆದ್ದರಿಂದ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು’ ಎಂದು ತಿಳಿಸಿದರು.

ಕ್ರೀಡಾಪಟುಗಳಿಗೆ ಸನ್ಮಾನ: ರಾಷ್ಟ್ರ ಮಟ್ಟದ ಜೂಡೋ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕ್ರೀಡಾಪಟುಗಳಾದ ತೊರದೇವಂಡಹಳ್ಳಿಯ ರಕ್ಷಿತಾ, ಸುಷ್ಮಾ, ನವ್ಯಶ್ರೀ, ತರಬೇತುದಾರ ಮುರಳಿ ಮೋಹನ್, ಇತರೆ ತಾಲ್ಲೂಕುಗಳ ಅಜಿತ್, ಅಂಗವಿಕಲ ಕ್ರೀಡಾಪಟು ಕೀರ್ತಿಲಕ್ಷ್ಮಿ, ಕಾರ್ತಿಕ್ ಅವರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್.ನಾಗರಾಜಗೌಡ, ಮಾಧವರೆಡ್ಡಿ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಚೌಡಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಬಿ.ಅಶೋಕ್ ಪಾಲ್ಗೊಂಡಿದ್ದರು.

Post Comments (+)