ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಸಮಗ್ರ ಬೆಳವಣಿಗೆಗೆ ಕ್ರೀಡೆ ಮುಖ್ಯ

ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ: ಜಿಲ್ಲಾಧಿಕಾರಿ ಮಂಜುನಾಥ್‌ ಅಭಿಪ್ರಾಯ
Last Updated 20 ನವೆಂಬರ್ 2019, 16:48 IST
ಅಕ್ಷರ ಗಾತ್ರ

ಕೋಲಾರ: ‘ಕ್ರೀಡಾಕೂಟದಲ್ಲಿ ಸೋಲು ಗೆಲುವುಗಿಂತ ಭಾಗವಹಿಸುವಿಕೆ ಮುಖ್ಯ. ಕ್ರೀಡಾಪಟುಗಳು ಕ್ರೀಡಾ ಸ್ಫೂರ್ತಿಯಿಂದ 17ನೇ ರಾಷ್ಟ್ರೀಯ ಅಂತರ ಜಿಲ್ಲಾ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿ ಜಿಲ್ಲೆಗೆ ಕೀರ್ತಿ ತರಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಆಶಿಸಿದರು.

ನ.23ರಿಂದ 25ರವರೆಗೆ ಆಂಧ್ರಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರೀಯ ಅಂತರ ಜಿಲ್ಲಾ ಕ್ರೀಡಾಕೂಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಕ್ರೀಡಾಪಟುಗಳಿಗೆ ಇಲ್ಲಿ ಬುಧವಾರ ಕ್ರೀಡಾ ಸಮವಸ್ತ್ರ ವಿತರಿಸಿ ಮಾತನಾಡಿ, ‘ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಶಿಕ್ಷಣದ ಜತೆಗೆ ಕ್ರೀಡೆಯು ಮುಖ್ಯ’ ಎಂದು ಅಭಿಪ್ರಾಯಪಟ್ಟರು.

‘ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆ ಅಗತ್ಯ. ಗೆಲ್ಲುವ ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಂಡರೆ ಖಂಡಿತ ಜಯ ಸಿಗುತ್ತದೆ. ಮಕ್ಕಳ ಸರ್ವತ್ತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದ್ದು, ಕ್ರೀಡಾಸಕ್ತಿ ಇರುವ ಮಕ್ಕಳನ್ನು ಪೋಷಕರು ಮತ್ತು ಶಿಕ್ಷಕರು ಪ್ರೋತ್ಸಾಹಿಸಬೇಕು’ ಎಂದು ಕಿವಿಮಾತು ಹೇಳಿದರು.

‘ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸುವ ಸಂಬಂಧ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ. ಬಜೆಟ್‌ನಲ್ಲಿ ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ. ಕೈಗಾರಿಕೆಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ ಸಿಎಸ್‍ಆರ್ ಅಡಿ ಹಣಕಾಸು ನೆರವು ನೀಡುವಂತೆ ಕೋರಲಾಗಿದೆ. ಯಾವುದೇ ಅನುದಾನ ಬಂದರೂ ಸಿಂಥೆಟಿಕ್‌ ಟ್ರ್ಯಾಕ್‌ ನಿರ್ಮಾಣ ಮಾಡಲಾಗುತ್ತದೆ’ ಎಂದು ಭರವಸೆ ನೀಡಿದರು.

ಹೆಚ್ಚಿನ ಮಹತ್ವ: ‘ಮಕ್ಕಳು ಆರೋಗ್ಯವಾಗಿದ್ದರೆ ಮಾತ್ರ ಕಲಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ. ಸದೃಢ ದೇಹದಲ್ಲಿ ಸದೃಢ ಮನಸ್ಸಿರುತ್ತದೆ ಎಂಬ ಮಾತಿನಂತೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ಮುಖ್ಯ. ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ ಹೇಳಿದರು.

‘ಕ್ರೀಡಾಪಟುಗಳು ಕ್ರೀಡೆಯನ್ನು ಸವಾಲಾಗಿ ಸ್ವೀಕರಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಅಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸಿ. ಕ್ರೀಡೆಗಳಿಂದ ಸ್ಪರ್ಧಾ ಮನೋಭಾವ ಮೂಡುತ್ತದೆ. ವಿದ್ಯಾರ್ಥಿಗಳು ಓದಿಗಷ್ಟೇ ಸೀಮಿತವಾದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಕ್ರೀಡೆಗಳಲ್ಲಿ ಭಾಗವಹಿಸಿದರೆ ಒತ್ತಡ ನಿವಾರಣೆಯಾಗುತ್ತದೆ. ಆದ್ದರಿಂದ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು’ ಎಂದು ಸಲಹೆ ನೀಡಿದರು.

ವಿಚಲಿತರಾಗಬೇಡಿ: ‘ಕ್ರೀಡಾಕೂಟದಲ್ಲಿ ಸ್ಪರ್ಧಿಗಳ ಸಂಖ್ಯೆ ಹೆಚ್ಚಿರುವುದರಿಂದ ವಿಚಲಿತರಾಗಬಾರದು. ಅಭ್ಯಾಸದ ಮೇಲೆ ನಂಬಿಕೆಯಿಟ್ಟು ವಿಶ್ವಾಸದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಎದುರಾಳಿ ಸ್ಪರ್ಧಿಗಳನ್ನು ಧೈರ್ಯದಿಂದ ಎದುರಿಸಿ ಗೆಲುವು ಸಾಧಿಸಬೇಕು’ ಎಂದು ಅಂತರರಾಷ್ಟ್ರೀಯ ಕ್ರೀಡಾಪಟುಗಳಾದ ಬಿಂಧುರಾಣಿ ಮತ್ತು ಬಾಬುಶೆಟ್ಟಿ ನುಡಿದರು.

‘ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಯಾಗ ಕಾರಣ ಕ್ರೀಡಾಪಟುಗಳಿಗೆ ಸಾಕಷ್ಟು ತೊಂದರೆಯಾಗಿದೆ. ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸದಿರುವುದರಿಂದ ಕ್ರೀಡಾಪಟುಗಳು ರಸ್ತೆಯಲ್ಲಿ ಕ್ರೀಡಾಭ್ಯಾಸ ಮಾಡುವಂತಾಗಿದೆ’ ಎಂದು ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ಕೆ.ಜಯದೇವ್ ಕಳವಳ ವ್ಯಕ್ತಪಡಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ದೇವಿಕಾ, ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಅಧ್ಯಕ್ಷ ಎಚ್.ಜಗನ್ನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT