ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿ:ಬೆಂಗಳೂರು ಉತ್ತರ ವಿ.ವಿ ಕುಲಸಚಿವ ರೆಡ್ಡಿ

ಅಭಿಪ್ರಾಯ
Last Updated 6 ಮೇ 2019, 20:00 IST
ಅಕ್ಷರ ಗಾತ್ರ

ಕೋಲಾರ: ‘ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮಾನಸಿಕ, ದೈಹಿಕ ಆರೋಗ್ಯದ ಜತೆಗೆ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ’ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವ ಎಂ.ಎಸ್.ರೆಡ್ಡಿ ಅಭಿಪ್ರಾಯಪಟ್ಟರು.

ಬೆಂಗಳೂರು ಉತ್ತರ ವಿ.ವಿ ಹಾಗೂ ಸರ್ಕಾರಿ ಮಹಿಳಾ ಕಾಲೇಜು ಸಹಯೋಗದಲ್ಲಿ ಇಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತರ ಕಾಲೇಜು ಪ್ರಥಮ ಮಹಿಳಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ‘ಕ್ರೀಡಾ ಚಟುವಟಿಕೆಗಳು ಕಲಿಕೆಯ ಒಂದು ಭಾಗವಾಗಬೇಕು. ಓದಿನ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಕಲಿಕೆಯಲ್ಲಿ ಏಕಾಗ್ರತೆ ಸಾಧಿಸಲು ನೆರವಾಗುತ್ತದೆ’ ಎಂದು ಕಿವಿಮಾತು ಹೇಳಿದರು.

‘ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಬದಲಿಗೆ ಭಾಗವಹಿಸುವಿಕೆ ಮುಖ್ಯ. ಕ್ರೀಡೆಗಳಿಂದ ಸ್ಪರ್ಧಾ ಮನೋಭಾವ ಮೂಡುತ್ತದೆ. ಉತ್ತಮ ಕಲಿಕೆಗೆ ಮಕ್ಕಳು ಆರೋಗ್ಯವಂತರಾಗಿರಬೇಕು. ವಿದ್ಯಾರ್ಥಿಗಳು ಓದಿಗಷ್ಟೇ ಸೀಮಿತವಾದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಕ್ರೀಡೆಗಳಲ್ಲಿ ಭಾಗವಹಿಸಿದರೆ ಒತ್ತಡ ನಿವಾರಣೆಯಾಗುತ್ತದೆ. ಆದ್ದರಿಂದ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು’ ಎಂದು ಸಲಹೆ ನೀಡಿದರು.

ಅನುತ್ಪಾದಕ ಕ್ಷೇತ್ರವಲ್ಲ: ‘ವಿದ್ಯಾರ್ಥಿಗಳಿಗೆ ಶಿಕ್ಷಣದಷ್ಟೇ ಕ್ರೀಡಾ ಚಟುವಟಿಕೆಗಳು ಮುಖ್ಯ. ಬೆಳೆಯುವ ಮಕ್ಕಳ ಆರೋಗ್ಯಕ್ಕೆ ಕ್ರೀಡೆ ಪೂರಕ. ಕ್ರೀಡಾ ಚಟುವಟಿಕೆಗಳು ಸಮಗ್ರ ಶಿಕ್ಷಣದ ಭಾಗ. ಕ್ರೀಡೆಯಿಂದ ಆರೋಗ್ಯ ಸುಧಾರಿಸುತ್ತದೆ ಮತ್ತು ಓದಿನಲ್ಲಿ ಆಸಕ್ತಿ ಮೂಡುತ್ತದೆ’ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಂಡಿತ್ ಮುನಿವೆಂಕಟಪ್ಪ ಹೇಳಿದರು.

‘ದೇಶದಲ್ಲಿ ಕ್ರೀಡೆಗಳು ಎಲ್ಲಿಯವರೆಗೆ ಪಠ್ಯವಾಗಿ ರೂಪುಗೊಳ್ಳುವುದಿಲ್ಲವೋ ಆವರೆಗೆ ಹೆಚ್ಚಿನ ಉತ್ತೇಜನ ಸಿಗುವುದಿಲ್ಲ. ಶಿಕ್ಷಣ ಮತ್ತು ಆರೋಗ್ಯ ಅನುತ್ಪಾದಕ ಕ್ಷೇತ್ರಗಳೆಂದು ಸರ್ಕಾರ ಭಾವಿಸಿದೆ. ಆದರೆ, ಈ ಕ್ಷೇತ್ರಗಳು ಅನುತ್ಪಾದಕವಲ್ಲ. ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಕ್ಷೇತ್ರಗಳು ಸಹಕಾರಿ’ ಎಂದರು.

ಸಮತೋಲನಕ್ಕೆ ಅತ್ಯಗತ್ಯ: ‘ಶಿಕ್ಷಣವು ಜ್ಞಾನ ವೃದ್ಧಿಸುವಂತೆ ಕ್ರೀಡಾ ಚಟುವಟಿಕೆಗಳು ದೈಹಿಕ ಸಮತೋಲನಕ್ಕೆ ಅತ್ಯಗತ್ಯ. ವಿದ್ಯಾರ್ಥಿಗಳ ಸರ್ವತ್ತೋಮುಖ ಬೆಳವಣಿಗೆಗೆ ಶಿಕ್ಷಣ ಮತ್ತು ಕ್ರೀಡೆಯನ್ನು ಜೀವನದ ಅವಿಭಾಜ್ಯ ಅಂಗವಾಗಿ ಸ್ವೀಕರಿಸಬೇಕು’ ಎಂದು ಕಾಲೇಜಿನ ಪ್ರಾಂಶುಪಾಲೆ (ಪ್ರಭಾರ) ಬೃಂದಾದೇವಿ ಅಭಿಪ್ರಾಯಪಟ್ಟರು.

ಕೋಲಾರ, ವೇಮಗಲ್, ಮಾಲೂರು, ಕೆಜಿಎಫ್, ಬಂಗಾರಪೇಟೆ, ಕೋಲಾರ ಸ್ನಾತಕೋತ್ತರ ವಿ.ವಿ ಕೇಂದ್ರ, ಚಿಕ್ಕಬಳ್ಳಾಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸೇರಿದಂತೆ 11ಕ್ಕೂ ಹೆಚ್ಚು ಕಾಲೇಜಿನ ಮಹಿಳಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. ಸಿಎಂಆರ್ ಮಂಡಿ ಮಾಲೀಕ ಶ್ರೀನಾಥ್‌ಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT