ಶುಕ್ರವಾರ, ಏಪ್ರಿಲ್ 3, 2020
19 °C
ಕ್ರೀಡಾಕೂಟದಲ್ಲಿ ಜಿ.ಪಂ ಅಧ್ಯಕ್ಷ ವೆಂಕಟೇಶ್ ಹೇಳಿಕೆ

ಆರೋಗ್ಯಕ್ಕೆ ಕ್ರೀಡೆ ಅಮೂಲ್ಯ ಸಾಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಆರೋಗ್ಯ ನಿರ್ವಹಣೆಗೆ ಕ್ರೀಡೆ ಅಮೂಲ್ಯ ಸಾಧನ. ಮಕ್ಕಳ ಸರ್ವತ್ತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದ್ದು, ಕ್ರೀಡಾಸಕ್ತಿಯಿರುವ ಮಕ್ಕಳನ್ನು ಪ್ರೋತ್ಸಾಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಸಲಹೆ ನೀಡಿದರು.

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಮತ್ತು ಹಳ್ಳಿ ಹಾಡು ಸಾಂಸ್ಕೃತಿಕ ಜನಪದ ಕಲಾ ಸಂಘದ ಸಹಯೋಗದಲ್ಲಿ ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ‘ಸಮಗ್ರ ಶಿಕ್ಷಣದ ಭಾಗವಾದ ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ’ ಎಂದರು.

‘ಮಕ್ಕಳು ಆರೋಗ್ಯವಾಗಿದ್ದರೆ ಮಾತ್ರ ಕಲಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ. ಸದೃಢ ದೇಹದಲ್ಲಿ ಸದೃಢ ಮನಸ್ಸಿರುತ್ತದೆ ಎಂಬ ಮಾತಿನಂತೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ಮುಖ್ಯ. ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವಿದೆ’ ಎಂದು ಅಭಿಪ್ರಾಯಪಟ್ಟರು.

‘ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿರುವ ಕ್ರೀಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಬದಲಿಗೆ ಭಾಗವಹಿಸುವಿಕೆ ಮುಖ್ಯ. ಕ್ರೀಡೆಗಳಿಂದ ಸ್ಪರ್ಧಾ ಮನೋಭಾವ ಮೂಡುತ್ತದೆ. ಕ್ರೀಡೆಗಳಲ್ಲಿ ಭಾಗವಹಿಸಿದರೆ ಒತ್ತಡ ನಿವಾರಣೆಯಾಗುತ್ತದೆ’ ಎಂದು ಕಿವಿಮಾತು ಹೇಳಿದರು.

ಕ್ರೀಡೆ ಮದ್ದು: ‘ಆಧುನಿಕತೆ ಬೆಳೆದಂತೆ ಕ್ರೀಡೆಗಳು ಮರೆಯಾಗುತ್ತಿವೆ. ಹಿಂದೆ ಗ್ರಾಮೀಣ ಕ್ರೀಡೆಗಳು ಹೆಚ್ಚು ಚಾಲ್ತಿಯಲ್ಲಿದ್ದವು. ಆದರೆ, ಈಗ ಗ್ರಾಮೀಣ ಕ್ರೀಡೆಗಳು ನೇಪಥ್ಯಕ್ಕೆ ಸರಿದಿವೆ. ದೈಹಿಕ ಚಟುವಟಿಕೆ ಕಡಿಮೆಯಾಗಿರುವುದರಿಂದ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ದೇಶದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದೆ. ರೋಗ ನಿವಾರಣೆಗೆ ಕ್ರೀಡೆ ಒಳ್ಳೆಯ ಮದ್ದು’ ಎಂದು ತಿಳಿಸಿದರು.

‘ಕ್ರೀಡೆಗಳಲ್ಲಿ ಸಕ್ರಿಯವಾಗಿ ಮತ್ತು ಶ್ರದ್ಧೆಯಿಂದ ಭಾಗವಹಿಸಿ ಉನ್ನತ ಮಟ್ಟಕ್ಕೆ ಹೋಗಬೇಕು. ಕ್ರೀಡಾ ಚಟುವಟಿಕೆಗಳಿಗೆ ಜಿಲ್ಲಾ ಪಂಚಾಯಿತಿಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೆದ್ದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲೂ ಜಿಲ್ಲೆಯನ್ನು ಪ್ರತಿನಿಧಿಸಿ ಉತ್ತಮ ಸಾಧನೆ ಮಾಡಿ’ ಎಂದು ಆಶಿಸಿದರು.

ವ್ಯಾಯಾಮ ಅತ್ಯಗತ್ಯ: ‘ದೈಹಿಕ ಸದೃಢತೆ ಹೆಚ್ಚು ಮಹತ್ವ ಪಡೆದಿದೆ. ಕುಡಿಯುವ ನೀರು, ಸೇವಿಸುವ ಗಾಳಿ, ತಿನ್ನುವ ಆಹಾರದ ಗುಣಮಟ್ಟದಲ್ಲಿ ವ್ಯತ್ಯಾಸವಾದರೆ ಆರೋಗ್ಯ ಹಾಳಾಗುತ್ತದೆ. ದೈನಂದಿನ ಕಾರ್ಯ ಚಟುವಟಿಕೆಯಲ್ಲಿ ಒತ್ತಡಕ್ಕೆ ಸಿಲುಕಬೇಕಾಗುತ್ತದೆ. ವ್ಯಾಯಾಮ, ಯೋಗ, ಉತ್ತಮ ಆಹಾರ ಸೇವನೆ ಅತ್ಯಗತ್ಯ’ ಎಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಪ್ರಾಂಶುಪಾಲ ಎನ್.ಕೆ.ಮಂಜುನಾಥ್ ಕಿವಿಮಾತು ಹೇಳಿದರು.

ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಸ್.ಸರಣ್ಯ, ಜನಪದ ಗಾಯಕರಾದ ಚಿಕ್ಕರೆಡ್ಡೆಪ್ಪ, ನಾಗೇಶ್, ಹಳ್ಳಿ ಹಾಡು ಸಾಂಸ್ಕೃತಿಕ ಜನಪದ ಕಲಾ ಸಂಘದ ಸದಸ್ಯ ಎಂ.ವಿ.ಕೃಷ್ಣಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು