ಮಂಗಳವಾರ, ಏಪ್ರಿಲ್ 20, 2021
31 °C
ಬೆಂಗಳೂರು ವಿ.ವಿ ಸಿಂಡಿಕೇಟ್ ಸದಸ್ಯ ಉದಯ್‌ಕುಮಾರ್‌ ಕಿವಿಮಾತು

ಆರೋಗ್ಯ ನಿರ್ವಹಣೆಗೆ ಕ್ರೀಡೆ ಅಮೂಲ್ಯ ಸಾಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಉನ್ನತ ಶಿಕ್ಷಣ ಮತ್ತು ಉದ್ಯೋಗಕ್ಕೆ ಕ್ರೀಡಾಕೂಟದಲ್ಲಿ ಹೆಚ್ಚು ಅವಕಾಶವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು’ ಎಂದು ಬೆಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಉದಯ್‌ಕುಮಾರ್‌ ಕಿವಿಮಾತು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ, ವೇಮಗಲ್ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟದಲ್ಲಿ ಮಾತನಾಡಿ, ‘ಆರೋಗ್ಯ ನಿರ್ವಹಣೆಗೆ ಕ್ರೀಡೆ ಅಮೂಲ್ಯ ಸಾಧನ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿರುವ ಕ್ರೀಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು’ ಎಂದು ತಿಳಿಸಿದರು.

‘ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಬದಲಿಗೆ ಭಾಗವಹಿಸುವಿಕೆ ಮುಖ್ಯ. ಕ್ರೀಡೆಗಳಿಂದ ಸ್ಪರ್ಧಾ ಮನೋಭಾವ ಮೂಡುತ್ತದೆ. ಕ್ರೀಡೆಗಳಲ್ಲಿ ಭಾಗವಹಿಸಿದರೆ ಒತ್ತಡ ನಿವಾರಣೆಯಾಗುತ್ತದೆ. ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾಗುವ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಬೇಕು’ ಎಂದರು.

‘ಆಧುನಿಕತೆ ಬೆಳೆದಂತೆ ಗ್ರಾಮೀಣ ಕ್ರೀಡೆಗಳು ಮರೆಯಾಗುತ್ತಿವೆ. ಹಿಂದೆ ಗ್ರಾಮೀಣ ಕ್ರೀಡೆಗಳು ಹೆಚ್ಚು ಚಾಲ್ತಿಯಲ್ಲಿದ್ದವು. ಆದರೆ, ಈಗ ಗ್ರಾಮೀಣ ಕ್ರೀಡೆಗಳು ನೇಪಥ್ಯಕ್ಕೆ ಸರಿದಿವೆ. ದೈಹಿಕ ಚಟುವಟಿಕೆ ಕಡಿಮೆಯಾಗಿರುವುದರಿಂದ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ದೇಶದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದೆ. ರೋಗ ನಿವಾರಣೆಗೆ ಕ್ರೀಡೆ ಒಳ್ಳೆಯ ಮದ್ದು’ ಎಂದು ಸಲಹೆ ನೀಡಿದರು.

‘ದೈಹಿಕ ಸದೃಢತೆ ಹೆಚ್ಚು ಮಹತ್ವ ಪಡೆದಿದೆ. ಕುಡಿಯುವ ನೀರು, ಸೇವಿಸುವ ಗಾಳಿ, ತಿನ್ನುವ ಆಹಾರದ ಗುಣಮಟ್ಟದಲ್ಲಿ ವ್ಯತ್ಯಾಸವಾದರೆ ಆರೋಗ್ಯ ಹಾಳಾಗುತ್ತದೆ. ದೈನಂದಿನ ಕಾರ್ಯ ಚಟುವಟಿಕೆಯಲ್ಲಿ ಒತ್ತಡಕ್ಕೆ ಸಿಲುಕಬೇಕಾಗುತ್ತದೆ. ವ್ಯಾಯಾಮ, ಯೋಗ, ಉತ್ತಮ ಆಹಾರ ಸೇವನೆ ಅತ್ಯಗತ್ಯ’ ಎಂದು ಹೇಳಿದರು.

ಜೀವನದ ಭಾಗವಾಗಲಿ: ‘ಯುವಶಕ್ತಿಯು ಸದೃಢ ಮನಸ್ಸಿನಿಂದ ಸದೃಢ ಆರೋಗ್ಯ ಹೊಂದುವ ಮೂಲಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಬೇಕು. ಪೋಷಕರು ತಮ್ಮ ಮಕ್ಕಳು ವೈದ್ಯರು, ಎಂಜಿನಿಯರ್, ಐಎಎಸ್ ಅಧಿಕಾರಿಗಳಾಗಬೇಕೆಂದು ಬಯಸುತ್ತಾರೆ. ಆದರೆ, ಉತ್ತಮ ಕ್ರೀಡಾಪಟುವಾಗಲಿ ಎಂದು ಯಾರೂ ಬಯಸುವುದಿಲ್ಲ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಗೌಡ ಕಳವಳ ವ್ಯಕ್ತಪಡಿಸಿದರು.

‘ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗ. ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ಯೋಗ, ವ್ಯಾಯಾಮ ಮಾಡಿ. ಕ್ರೀಡೆಯು ಜೀವನದ ಭಾಗವಾಗಲಿ. ಕ್ರೀಡಾಪಟುಗಳು ಉತ್ಸಾಹ ಕಳೆದುಕೊಳ್ಳಬಾರದು. ಯಾವಾಗಲೂ ಗೆಲ್ಲುವ ಹುಮ್ಮಸ್ಸು ಇರಬೇಕು’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ್‌ಬಾಬು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ತಿಮ್ಮಯ್ಯ, ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚೌಡಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ, ಜಿಲ್ಲಾ ಪಿಯುಸಿ ಕನ್ನಡ ಉಪನ್ಯಾಸಕರ ಸಂಘದ ಅಧ್ಯಕ್ಷ ಜೆ.ಜಿ.ನಾಗರಾಜ್, ಜಿಲ್ಲಾ ಪಿಯುಸಿ ಉಪನ್ಯಾಸಕರ ಸಂಘದ ಅಧ್ಯಕ್ಷ ಟಿ.ಕೆ.ನಟರಾಜ್ ಪಾಲ್ಗೊಂಡರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.