ಶುಕ್ರವಾರ, ಏಪ್ರಿಲ್ 16, 2021
31 °C

ರೋಗ ನಿವಾರಣೆಗೆ ಕ್ರೀಡೆ ಮದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಆರೋಗ್ಯ ನಿರ್ವಹಣೆಗೆ ಕ್ರೀಡೆ ಅಮೂಲ್ಯ ಸಾಧನ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿರುವ ಕ್ರೀಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು’ ಎಂದು ಸಂಸದ ಎಸ್‌.ಮುನಿಸ್ವಾಮಿ ಹೇಳಿದರು.

ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಇಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆ ವೀಕ್ಷಿಸಿ ಮಾತನಾಡಿ, ‘ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಬದಲಿಗೆ ಭಾಗವಹಿಸುವಿಕೆ ಮುಖ್ಯ. ಕ್ರೀಡೆಗಳಿಂದ ಸ್ಪರ್ಧಾ ಮನೋಭಾವ ಮೂಡುತ್ತದೆ. ಜತೆಗೆ ಒತ್ತಡ ನಿವಾರಣೆಯಾಗುತ್ತದೆ’ ಎಂದರು.

‘ಹಳ್ಳಿಗಳಲ್ಲಿ ಈ ಹಿಂದೆ ರಾಗಿ ಕಟಾವು ಮಾಡಿಕೊಂಡು ಬಂದ ನಂತರ ಕಬಡ್ಡಿ ಆಡುತ್ತಿದ್ದೆವು. ಬೆಂಗಳೂರಿನ ಹೂಡಿಯಲ್ಲಿ 3 ಕಬಡ್ಡಿ ತಂಡಗಳಿದ್ದವು. ಪ್ರತಿ ಬಾರಿ ಸ್ಪರ್ಧೆಯಲ್ಲಿ ಆ ತಂಡಗಳೇ ಗೆಲ್ಲುತ್ತಿದ್ದವು. ಆಧುನಿಕತೆ ಬೆಳೆದಂತೆ ಗ್ರಾಮೀಣ ಕ್ರೀಡೆಗಳು ಮರೆಯಾಗುತ್ತಿವೆ. ಹಿಂದೆ ಗ್ರಾಮೀಣ ಕ್ರೀಡೆಗಳು ಹೆಚ್ಚು ಚಾಲ್ತಿಯಲ್ಲಿದ್ದವು. ಆದರೆ, ಈಗ ಗ್ರಾಮೀಣ ಕ್ರೀಡೆಗಳು ನೇಪಥ್ಯಕ್ಕೆ ಸರಿದಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಕೋಲಾರದಲ್ಲಿ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸುವ ಉದ್ದೇಶವಿತ್ತು. ಆದರೆ, ಸ್ಥಳೀಯ ಕಬಡ್ಡಿ ಕ್ರೀಡಾಪಟುಗಳು ಸಿದ್ಧತೆ ನಡೆಸಿದ್ದರು. ಅವರಿಗೆ ನಿರಾಸೆ ಮಾಡುವುದು ಬೇಡವೆಂಬ ಕಾರಣಕ್ಕೆ ಪಂದ್ಯಾವಳಿ ಮುಂದೂಡಲಾಗಿದೆ. ಬೆಂಗಳೂರಿನ ಹೂಡಿಯಲ್ಲಿ ರಾಜ್ಯ ಮಟ್ಟದ ಜೂನಿಯರ್ ತಂಡಕ್ಕೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ತಲಾ 21 ಪುರುಷ ಹಾಗೂ ಮಹಿಳೆಯರಿಗೆ ಕೋಲಾರದಲ್ಲೇ ತರಬೇತಿ ನೀಡಲಾಗುವುದು’ ಎಂದು ವಿವರಿಸಿದರು.

ಅನಾರೋಗ್ಯ ಸಮಸ್ಯೆ: ‘ದೈಹಿಕ ಚಟುವಟಿಕೆ ಕಡಿಮೆಯಾಗಿರುವುದರಿಂದ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ದೇಶದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದೆ. ಕುಡಿಯುವ ನೀರು, ಸೇವಿಸುವ ಗಾಳಿ, ತಿನ್ನುವ ಆಹಾರದ ಗುಣಮಟ್ಟದಲ್ಲಿ ವ್ಯತ್ಯಾಸವಾದರೆ ಆರೋಗ್ಯ ಹಾಳಾಗುತ್ತದೆ. ದೈನಂದಿನ ಕಾರ್ಯ ಚಟುವಟಿಕೆಯಲ್ಲಿ ಒತ್ತಡಕ್ಕೆ ಸಿಲುಕಬೇಕಾಗುತ್ತದೆ. ರೋಗ ನಿವಾರಣೆಗೆ ಕ್ರೀಡೆ ಒಳ್ಳೆಯ ಮದ್ದು’ ಎಂದು ಸಲಹೆ ನೀಡಿದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ, ನಿರ್ದೇಶಕ ಅಪ್ಪಿ ನಾರಾಯಣಸ್ವಾಮಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ್‌ಬಾಬು, ಅಂತರರಾಷ್ಟೀಯ ಕಬಡ್ಡಿ ಪಟು ಬಾಬಣ್ಣ, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಸೂರಿ, ಸದಸ್ಯರಾದ ಪ್ರಕಾಶಗೌಡ, ರಮೇಶ್, ಮಂಜುನಾಥ್ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು