ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಆತಂಕ ಬೇಡ

ಪೋನ್‌–ಇನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಡಿಡಿಪಿಐ ರತ್ನಯ್ಯ ಕಿವಿಮಾತು
Last Updated 23 ಏಪ್ರಿಲ್ 2020, 12:56 IST
ಅಕ್ಷರ ಗಾತ್ರ

ಕೋಲಾರ: ‘ಲಾಕ್‌ಡೌನ್‌ ಅಂತ್ಯಗೊಂಡ ನಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲೇ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿ ಪರೀಕ್ಷೆ ನಡೆಸಲಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಆತಂಕಪಡಬೇಕಿಲ್ಲ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ಕಿವಿಮಾತು ಹೇಳಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಇಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪೋನ್‌–ಇನ್ ಕಾರ್ಯಕ್ರಮದಲ್ಲಿ ಮಾತನಾಡಿ, ‘ವಿದ್ಯಾರ್ಥಿಗಳು ಲಾಕ್‌ಡೌನ್‌ ಅವಧಿಯಲ್ಲಿ ಮನೆಯಿಂದ ಹೊರಬಾರದೆ ಅಭ್ಯಾಸ ಮುಂದುವರಿಸಬೇಕು’ ಎಂದು ಸಲಹೆ ನೀಡಿದರು.

ಫೋನ್–ಇನ್‌ ಕಾರ್ಯಕ್ರಮಕ್ಕೆ ಕರೆ ಮಾಡಿದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು, ‘ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತದೆಯೇ?’ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಡಿಪಿಐ, ‘ಖಂಡಿತ ಪರೀಕ್ಷೆ ನಡೆಯುತ್ತದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ. ವಿದ್ಯಾರ್ಥಿಗಳಿಗೆ ಓದಲು ಅನುಕೂಲವಾಗುವಂತೆ ಪ್ರತಿ ವಿಷಯದ ಪರೀಕ್ಷೆ ನಡುವೆ ಅವಕಾಶ ನೀಡಲಾಗುತ್ತದೆ, 10 ದಿನಗಳ ಪುನರ್ಮನನ ತರಗತಿ ನಡೆಸಲಾಗುತ್ತದೆ’ ಎಂದರು.

ಒಟ್ಟಾರೆ 178 ವಿದ್ಯಾರ್ಥಿಗಳು ಕರೆ ಮಾಡಿದರು. ಈ ಪೈಕಿ ಗ್ರಾಮೀಣ ಭಾಗದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕರೆ ಮಾಡಿದ್ದು ವಿಶೇಷವಾಗಿತ್ತು.

ಶಿಕ್ಷಕರನ್ನು ಸಂಪರ್ಕಿಸಿ: ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ ಜಿಲ್ಲಾ ನೋಡಲ್‌ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್, ‘ಸಮಸ್ಯೆಗಳಿದ್ದರೆ ಶಿಕ್ಷಕರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಉತ್ತರ ಪಡೆದುಕೊಳ್ಳಿ. ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬೇಡಿ’ ಎಂದು ತಿಳಿಸಿದರು.

‘ಇಲಾಖೆ ನೀಡಿರುವ 6 ಸೆಟ್ ಪ್ರಶ್ನೆಪತ್ರಿಕೆ, ‘ನನ್ನನ್ನೊಮ್ಮೆ ಗಮನಿಸಿ’ ಅಭ್ಯಾಸ ಮಾಡಿ. ಅದರ ಪ್ರತಿ ಇಲ್ಲದಿದ್ದರೆ ದೂರವಾಣಿ ಕರೆ ಮಾಡಿ ತಿಳಿಸಿದರೆ ಸಾಫ್ಟ್ ಪ್ರತಿ ಕಳುಹಿಸುತ್ತೇವೆ. ಏ.20ರಂದು ಮತ್ತೊಮ್ಮೆ ಪೋನ್‌ಇನ್ ಕಾರ್ಯಕ್ರಮ ನಡೆಸಿ ಮಕ್ಕಳ ಸಮಸ್ಯೆ ಪರಿಹರಿಸುತ್ತೇವೆ’ ಎಂದು ವಿವರಿಸಿದರು.

ತಜ್ಞರ ಮಾಹಿತಿ: ‘ಚಂದನ ವಾಹಿನಿಯಲ್ಲಿ ಎಸ್ಸೆಸ್ಸೆಲ್ಸಿ ಪಠ್ಯಕ್ರಮದ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲೀಷ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ಕಾರ್ಯಕ್ರಮ ಮೂಡಿಬರಲಿದೆ. ಜತೆಗೆ ಪರೀಕ್ಷೆ ಹೇಗೆ ಎದುರಿಸಬೇಕೆಂಬ ಬಗ್ಗೆ ತಜ್ಞರು ಮಾಹಿತಿ ನೀಡಲಿದ್ದಾರೆ’ ಎಂದು ಹೇಳಿದರು.

ಶಿಕ್ಷಣ ಇಲಾಖೆ ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿ ಆತಂಕ ನಿವಾರಿಸಿದರು. ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ಬಿಇಒ ಕೆ.ಎಸ್.ನಾಗರಾಜಗೌಡ, ಡಿವೈಪಿಸಿ ಮೋಹನ್ ಬಾಬು, ವಿಷಯ ಪರಿವೀಕ್ಷಕರಾದ ಗಾಯತ್ರಿ, ಶಶಿವಧನ, ಕೃಷ್ಣಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT