ಸೋಮವಾರ, ಜೂಲೈ 13, 2020
28 °C
ಸಭೆಯಲ್ಲಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗೆ ಸೂಚನೆ

ಎಸ್ಸೆಸ್ಸೆಲ್ಸಿ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ: ಡಿಪಿಐ ರತ್ನಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಣ್ಣ ತಪ್ಪಿಗೂ ಅವಕಾಶ ನೀಡದೆ ಸುಸೂತ್ರವಾಗಿ ಪರೀಕ್ಷೆ ನಡೆಸಬೇಕು. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ಸೂಚಿಸಿದರು.

ಜಿಲ್ಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರಿಗೆ ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವಸಿದ್ಧತಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ‘ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆ ಪಡೆದ ನಂತರ ಪರೀಕ್ಷೆ ಮುಗಿಸಿ ಉತ್ತರ ಪತ್ರಿಕೆಗಳ ಲಕೋಟೆ ಕಳುಹಿಸುವವರೆಗೂ ಹೆಚ್ಚು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ’ ಎಂದರು.

‘ಪರೀಕ್ಷಾ ಕೇಂದ್ರಗಳ ಸುಸ್ಥಿತಿ ಬಗ್ಗೆ ಗಮನಹರಿಸಿ. ಮಕ್ಕಳನ್ನು ಯಾವುದೇ ಕಾರಣಕ್ಕೂ ನೆಲದ ಮೇಲೆ ಕೂರಿಸುವಂತಿಲ್ಲ. ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ಬೆಳಕಿನ ವ್ಯವಸ್ಥೆ ಸಮರ್ಪಕವಾಗಿರಬೇಕು. ಮುಖ್ಯ ಅಧೀಕ್ಷಕರು ಕೇಂದ್ರಕ್ಕೆ ಖುದ್ದು ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು. ಪರೀಕ್ಷೆ ಪ್ರಕ್ರಿಯೆಯಲ್ಲಿ ಲೋಪವಾದರೆ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ಪರೀಕ್ಷಾ ಕೊಠಡಿಗಳಲ್ಲಿ ವಿನಾಕಾರಣ ಓಡಾಡಿ ಮಕ್ಕಳ ಏಕಾಗ್ರತೆಗೆ ಧಕ್ಕೆ ಮಾಡಬೇಡಿ. ಪ್ರತಿ ಕೊಠಡಿಗೂ ಪ್ರತ್ಯೇಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಗುಣಾತ್ಮಕ ಫಲಿತಾಂಶ ನಮ್ಮ ಗುರಿ. ಪರೀಕ್ಷಾ ಪಾವಿತ್ರ್ಯತೆ ಧಕ್ಕೆ ಬಾರದಂತೆ ಎಚ್ಚರ ವಹಿಸು. ಮುಖ್ಯ ಅಧೀಕ್ಷಕರು ಬದ್ಧತೆಯಿಂದ ಕಾರ್ಯ ನಿರ್ವಹಿಸಿದರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ’ ಎಂದು ಕಿವಿಮಾತು ಹೇಳಿದರು.

‘ಪರೀಕ್ಷಾ ಕೇಂದ್ರಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶ ನಿರ್ಬಂಧಿಸಿ. ಪರೀಕ್ಷಾ ಕಾರ್ಯ ಮುಗಿಯುವರೆಗೂ ಇಲಾಖೆ ಸಿಬ್ಬಂದಿ ಮಾತ್ರ ಇರಬೇಕು. ಕೇಂದ್ರಗಳಿಗೆ ಪೊಲೀಸ್‌ ಭದ್ರತೆ ಪಡೆಯಿರಿ. ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ನಕಲು ಮಾಡಲು ಅವಕಾಶ ನೀಡಬೇಡಿ. ಪರೀಕ್ಷಾ ನಕಲು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ’ ಎಂದು ಹೇಳಿದರು.

‘ಮಕ್ಕಳಲ್ಲಿ ಕೊರೊನಾ ಸೋಂಕಿನ ಭೀತಿ ಉಂಟು ಮಾಡಬೇಡಿ. ಅವರಿಗೆ ಆತ್ಮಸ್ಥೈರ್ಯ ತುಂಬಿ. ಮಕ್ಕಳು ಪರೀಕ್ಷೆ ಸಂದರ್ಭದಲ್ಲಿ ಮನೆಯಿಂದಲೇ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬರಲಿ. ಶಾಲೆಗೆ ಬರುವುದು ಬೇಡ. ಅವರಿಗೆ ಸ್ವಚ್ಛತೆಯ ಅರಿವು ಮೂಡಿಸಿ. ಜತೆಗೆ ಮುಖಗವಸು ಧರಿಸುವಂತೆ ತಿಳಿಸಿ’ ಎಂದು ಹೇಳಿದರು.

70 ಕೇಂದ್ರ: ‘ಜಿಲ್ಲೆಯಲ್ಲಿ ಒಟ್ಟು 70 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 20,906 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ, ಬಂಗಾರಪೇಟೆಯಲ್ಲಿ 11, ಕೆಜಿಎಫ್‌ನಲ್ಲಿ 9, ಕೋಲಾರದಲ್ಲಿ 17, ಮಾಲೂರಿನಲ್ಲಿ 9, ಮುಳಬಾಗಿಲಿನಲ್ಲಿ 11 ಹಾಗೂ ಶ್ರೀನಿವಾಸಪುರ ತಾಲ್ಲೂಕಿನಲ್ಲಿ 13 ಕೇಂದ್ರಗಳಿವೆ’ ಎಂದು ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಮಾಹಿತಿ ನೀಡಿದರು.

‘ಪರೀಕ್ಷಾ ಕಾರ್ಯಗಳಿಗೆ ನೇಮಿಸಿಕೊಳ್ಳುವ ಶಿಕ್ಷಕರ ಪಟ್ಟಿಯನ್ನು ಕಡ್ಡಾಯವಾಗಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನುಮೋದಿಸಿರಬೇಕು. ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಸ್ವಾಧೀನಾಧಿಕಾರಿ ನೇಮಿಸಲಾಗಿದೆ. ಈ ಸ್ವಾಧೀನಾಧಿಕಾರಿಗಳು ವಿದ್ಯಾರ್ಥಿಗಳ ಹಾಗೂ ಕೊಠಡಿ ಮೇಲ್ವಿಚಾರಕರ ಮೊಬೈಲ್ ವಶಕ್ಕೆ ಪಡೆದು ಪರೀಕ್ಷೆ ನಂತರ ಹಿಂದಿರುಗಿಸುತ್ತಾರೆ’ ಎಂದು ವಿವರಿಸಿದರು.

‘ಪರೀಕ್ಷಾ ಕೇಂದ್ರದಲ್ಲಿ ನೀರು ಕೊಡುವ ಸಿಬ್ಬಂದಿಯಿಂದ ಹಿಡಿದು ಮುಖ್ಯ ಅಧೀಕ್ಷಕರವರೆಗೆ ಎಲ್ಲಾ ಸಿಬ್ಬಂದಿಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯೇ ಗುರುತಿನ ಚೀಟಿ ನೀಡಿದೆ. ಈ ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ಬಳಸಬೇಕು. ಗುರುತಿನ ಚೀಟಿ ಇಲ್ಲದ ವ್ಯಕ್ತಿಗಳನ್ನು ಕೇಂದ್ರಕ್ಕೆ ಸೇರಿಸಬಾರದು’ ಎಂದರು.

ದೂರು ನೀಡಿ: ‘ಕೊಠಡಿ ಮೇಲ್ವಿಚಾರಕರನ್ನು ಲಾಟರಿ ಮೂಲಕ ಆಯ್ಕೆ ಮಾಡಬೇಕು. ಅವರು ಪರೀಕ್ಷೆ ಆರಂಭಕ್ಕೂ ಅರ್ಧ ತಾಸು ಮುನ್ನ ಕೇಂದ್ರದಲ್ಲಿ ಹಾಜರಿರಬೇಕು. ತಪ್ಪಿದಲ್ಲಿ ಇಲಾಖಾ ಅಧಿಕಾರಿಗಳಿಗೆ ದೂರು ನೀಡಿ. ಈಗಾಗಲೇ ಉತ್ತರ ಪತ್ರಿಕೆಗಳು ಬಂದಿದ್ದು, ಮುಖ್ಯ ಅಧೀಕ್ಷಕರು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬೇಕು’ ಎಂದು ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾದೇವಿ, ಸಿದ್ದರಾಜು, ಗಿರಿಜೇಶ್ವರಿದೇವಿ, ಡಿವೈಪಿಸಿ ಮೋಹನ್‌ಬಾಬು, ವಿಷಯ ಪರಿವೀಕ್ಷಕರಾದ ಗಾಯತ್ರಿ, ಶಶಿವಧನ, ಕೃಷ್ಣಪ್ಪ, ವೆಂಕಟೇಶಪ್ಪ, ಜಿಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ರುದ್ರಪ್ಪ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.