ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ: ಜಿಲ್ಲೆ ಪ್ರಥಮ ಸ್ಥಾನಕ್ಕೇರಲಿ

ಸಭೆಯಲ್ಲಿ ಅಧಿಕಾರಿಗಳಿಗೆ ಜಿ.ಪಂ ಸಿಇಒ ದರ್ಶನ್‌ ಸೂಚನೆ
Last Updated 14 ಫೆಬ್ರುವರಿ 2020, 15:26 IST
ಅಕ್ಷರ ಗಾತ್ರ

ಕೋಲಾರ: ‘ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಬೇಕು. ಫಲಿತಾಂಶ ಸಾಧನೆಯಲ್ಲಿ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಲು ಮಕ್ಕಳನ್ನು ಸಿದ್ಧಗೊಳಿಸಿ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ದರ್ಶನ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳು ಶಾಲೆಗಳ ಉಸ್ತುವಾರಿ ವಹಿಸಬೇಕು. ಮಕ್ಕಳಲ್ಲಿ ಪರೀಕ್ಷೆ ಭಯ ದೂರ ಮಾಡಿ ಆತ್ಮಸ್ಥೈರ್ಯ ತುಂಬಬೇಕು’ ಎಂದು ತಿಳಿಸಿದರು.

‘ಹಿಂದಿನ ವರ್ಷ ಜಿಲ್ಲೆಯ ಫಲಿತಾಂಶ ಸಾಧನೆಯಲ್ಲಿ 6ನೇ ಸ್ಥಾನದಲ್ಲಿತ್ತು. ಈ ಭಾರಿ 1ನೇ ಸ್ಥಾನಕ್ಕೆ ಏರಬೇಕು. ನಿಯಮಿತವಾಗಿ ಶಾಲೆಗಳಿಗೆ ಭೇಟಿ ಕೊಟ್ಟು ಮಕ್ಕಳನ್ನು ಪರೀಕ್ಷೆಗೆ ಸಜ್ಜುಗೊಳಿಸಿ. ಪರೀಕ್ಷೆ ಭಯ ಹೋಗಲಾಡಿಸಿ ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತದೆ’ ಎಂದು ಸಲಹೆ ನೀಡಿದರು.

‘ಜಿಲ್ಲೆಯಲ್ಲಿ ಕೃಷಿ ಹೊಂಡದಲ್ಲಿ ರೈತರು ಮತ್ತು ಮಕ್ಕಳು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಈ ಸಾವು ನೋವು ತಡೆಯಲು ಕೃಷಿ ಇಲಾಖೆ ಆಸಕ್ತಿ ವಹಿಸಬೇಕು. ಕೃಷಿ ಹೊಂಡಗಳ ಸುತ್ತ ಸುರಕ್ಷತೆಗೆ ತಂತಿ ಬೇಲಿ ಅಳವಡಿಸುವಂತೆ ರೈತರಿಗೆ ಸೂಚಿಸಿ’ ಎಂದು ಹೇಳಿದರು.

ಪ್ರಸ್ತಾವ ಸಲ್ಲಿಸಿ: ‘ಜಿಲ್ಲೆಯಲ್ಲಿ ಹಿಂದಿನ 2 ವರ್ಷಗಳಲ್ಲಿ ಎಷ್ಟು ಮಂದಿ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಿ ಕೊಡಿ. ಕೃಷಿ ಹೊಂಡಗಳ ಸುತ್ತ ತಂತಿ ಬೇಲಿ ಅಳವಡಿಸಲು ರೈತರಿಗೆ ಹಣಕಾಸಿನ ನೆರವು ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ’ ಎಂದು ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್, ‘2 ವರ್ಷಗಳಿಂದ ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದಿದ್ದೇವೆ. ಆದರೆ, ಯಾವುದೇ ಪ್ರಯೋಜನ ಆಗಿಲ್ಲ’ ಎಂದು ಹೇಳಿದರು. ಆಗ ಜಿ.ಪಂ ಸಿಇಒ, ‘ಕೃಷಿ ಹೊಂಡಗಳ ಸುತ್ತಲೂ ಬಯೋ ಫೆನ್ಸಿಂಗ್ ಅಳವಡಿಕೆ ಬಗ್ಗೆ ಚಿಂತನೆ ನಡೆಸಿ’ ಎಂದು ಸಲಹೆ ನೀಡಿದರು.

ಅನುದಾನ ಬಳಸಿ: ‘‘ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಮುಲಾಜಿಲ್ಲ. ಮಾರ್ಚ್ ತಿಂಗಳು ಹತ್ತಿರ ಬರುತ್ತಿದೆ. ಸರ್ಕಾರದ ಅನುದಾನ ಸಂಪೂರ್ಣವಾಗಿ ಬಳಕೆಯಾಗಬೇಕು. ಅನುದಾನ ಬಳಕೆಯಾಗದೆ ಸರ್ಕಾರಕ್ಕೆ ವಾಪಸ್‌ ಹೋದರೆ ಅಧಿಕಾರಿಗಳು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ವೆಂಕಟೇಶ್ ಎಚ್ಚರಿಕೆ ನೀಡಿದರು.

‘ಅಂಗನವಾಡಿ ಕಟ್ಟಡಗಳ ನಿರ್ಮಾಣದಲ್ಲಿ ಪ್ರಗತಿ ಶೂನ್ಯ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪಾಲಿ ಅವರನ್ನು ತರಾಟೆಗೆ ತೆಗೆದುಕೊಂಡ ಅಧ್ಯಕ್ಷರು, ‘ಒಂದೂವರೆ ತಿಂಗಳಲ್ಲಿ ಎಷ್ಟು ಅಂಗನವಾಡಿ ಕಟ್ಟಡ ನಿರ್ಮಿಸುತ್ತೀರಿ?’ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಪಾಲಿ, ‘ ಅಂಗನವಾಡಿ ಕಟ್ಟಡಗಳ ಕಾಮಗಾರಿ ಕುರಿತು ಈಗಾಗಲೇ ಅಂದಾಜು ಪಟ್ಟಿ ಸಿದ್ಧಪಡಿಸಿದ್ದೇವೆ. 15 ದಿನದಲ್ಲಿ ಅಂಗನವಾಡಿಗಳ ದುರಸ್ತಿ ಕೆಲಸ ಪೂರ್ಣಗೊಳಿಸುತ್ತೇವೆ’ ಎಂದು ಭರವಸೆ ನೀಡಿದರು.

ನೋಟಿಸ್ ಜಾರಿ: ‘ಶ್ರೀನಿವಾಸಪುರ ತಾಲ್ಲೂಕಿನ ಜೆ.ತಿಮ್ಮಸಂದ್ರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ. ಅಧಿಕಾರಿಗಳು ಆ ಭಾಗದ ಜಿ.ಪಂ ಸದಸ್ಯ ಎಂ.ವಿ.ಶ್ರೀನಿವಾಸ್ ಅವರನ್ನು ಆಹ್ವಾನಿಸದೆ ಕಾರ್ಯಕ್ರಮ ನಡೆಸಿದ್ದಾರೆ. ಈ ಸಂಬಂಧ ಗ್ರಾ.ಪಂ ಕಾರ್ಯದರ್ಶಿ ಮತ್ತು ಅಧ್ಯಕ್ಷರಿಗೆ ನೋಟಿಸ್‌ ಜಾರಿ ಮಾಡಿ’ ಎಂದು ಅಧ್ಯಕ್ಷರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗೆ ಸೂಚಿಸಿದರು.

‘ಪಿಡಿಒ, ಗ್ರಾ.ಪಂ ಕಾರ್ಯದರ್ಶಿ ಮತ್ತು ಅಧ್ಯಕ್ಷರು ಮೊದಲಿನಿಂದಲೂ ನನ್ನನ್ನು ಸರ್ಕಾರಿ ಕಾರ್ಯಕ್ರಮಗಳಿಗೆ ಆಹ್ವಾನಿಸುತ್ತಿಲ್ಲ. ಈ ಸಂಬಂಧ ಪಿಡಿಒಗೆ ಹಿಂದೆಯೇ ನೋಟಿಸ್ ನೀಡಲಾಗಿತ್ತು. ಇತ್ತೀಚೆಗೆ ನಡೆದ ಕಾರ್ಯಕ್ರಮದ ವೇಳೆ ಪಿಡಿಒ ರಜೆಯಲ್ಲಿ ಇದ್ದುದರಿಂದ ಅಲ್ಲಿನ ಕಾರ್ಯದರ್ಶಿ ಮತ್ತು ಅಧ್ಯಕ್ಷರು ಈ ರೀತಿ ಮಾಡಿದ್ದಾರೆ’ ಎಂದು ಜಿ.ಪಂ ಸದಸ್ಯ ಶ್ರೀನಿವಾಸ್ ಆರೋಪಿಸಿದರು.

ಜಿ.ಪಂ ಉಪಾಧ್ಯಕ್ಷೆ ಯಶೋದಾ, ಮುಖ್ಯ ಯೋಜನಾಧಿಕಾರಿ ಮಾದೇಶ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT