ಗುರುವಾರ , ಮೇ 13, 2021
22 °C
ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನೆರವು: ಕೋಚಿಮುಲ್ ಅಧ್ಯಕ್ಷ ನಂಜೇಗೌಡ ಭರವಸೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಜಿಲ್ಲೆ ಮೊದಲ ಸ್ಥಾನಕ್ಕೇರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡಲು ಕೋಚಿಮುಲ್ ಸಿದ್ಧವಿದೆ’ ಎಂದು ಶಾಸಕ ಹಾಗೂ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕೆ.ವೈ.ನಂಜೇಗೌಡ ಭರವಸೆ ನೀಡಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೋಚಿಮುಲ್‌ನಿಂದ ಮುದ್ರಿಸಿ ಹೊರ ತಂದಿರುವ ಕನ್ನಡ, ಇಂಗ್ಲೀಷ್ ಮಾಧ್ಯಮದ ‘ನನ್ನನ್ನೊಮ್ಮೆ ಗಮನಿಸಿ’ ಪ್ರಶ್ನೋತ್ತರ ಕೋಠಿ ಹಾಗೂ ಪ್ರಶ್ನೆಪತ್ರಿಕೆಗಳ ಹೊತ್ತಿಗೆಗಳನ್ನು ಬಿಡುಗಡೆ ಮಾಡಿ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ಈ ಬಾರಿ ರಾಜ್ಯದಲ್ಲಿ ಮೊದಲ ಸ್ಥಾನಕ್ಕೇರಬೇಕು’ ಎಂದು ಆಶಿಸಿದರು.

‘ಸರ್ಕಾರಿ ಶಾಲೆಗಳ ಅದರಲ್ಲೂ ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕೋಚಿಮುಲ್ ಸಂಕಲ್ಪ ಮಾಡಿದೆ, ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹೊರ ತಂದಿರುವ ‘ನನ್ನನ್ನೊಮ್ಮೆ ಗಮನಿಸಿ’ ಪ್ರಶ್ನೆಕೋಠಿಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಕೋಚಿಮುಲ್ ಹಾಲು ಉತ್ಪಾದಕರ ಮಕ್ಕಳಿಗೆ ವಿಶೇಷವಾಗಿ ವಿದ್ಯಾರ್ಥಿವೇತನ ನೀಡುತ್ತಿದೆ. ಎಸ್ಸೆಸ್ಸೆಲ್ಸಿ ಸಾಧಕ ಮಕ್ಕಳಿಗೆ ತಲಾ ₹ 5 ಸಾವಿರ, ಪಿಯುಸಿ ಸಾಧಕರಿಗೆ ತಲಾ ₹ 7,500, ವೈದ್ಯಕೀಯ ವಿದ್ಯಾರ್ಥಿಗಳಿಗೆ ತಲಾ ₹ 25 ಸಾವಿರ, ಎಂಜಿನಿಯರಿಂಗ್ ಮತ್ತು ಪದವಿ ವಿದ್ಯಾರ್ಥಿಗಳಿಗೆ ತಲಾ ₹ 20 ಸಾವಿರ ನೆರವು ನೀಡುತ್ತಿದೆ’ ಎಂದು ವಿವರಿಸಿದರು.

ಧೈರ್ಯ ತುಂಬಿ: ‘ಹಿಂದಿನ ವರ್ಷ ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 5ನೇ ಸ್ಥಾನ ಪಡೆದಿತ್ತು. ಈ ಬಾರಿ ಜಿಲ್ಲೆಯು ಪ್ರಥಮ ಅಥವಾ ದ್ವಿತೀಯ ಸ್ಥಾನದಲ್ಲಿರಬೇಕು. ಯಾವುದೇ ವಿದ್ಯಾರ್ಥಿ ಅನುತ್ತೀರ್ಣವಾಗಬಾರದು’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

‘ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅಗತ್ಯ ಧೈರ್ಯ ತುಂಬಿ. ಮಕ್ಕಳ ಸಾಮಾನ್ಯ ಜ್ಞಾನ ವೃದ್ಧಿಗೆ ಕ್ರಮ ವಹಿಸಿ. ಪ್ರತಿ ವಿದ್ಯಾರ್ಥಿಗೂ ಪ್ರಶ್ನೋತ್ತರ ಕೋಠಿ ಸಿಗುವಂತೆ ಮಾಡಿ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ’ ಎಂದು ಸಲಹೆ ನೀಡಿದರು.

ವಿಶೇಷ ತರಗತಿ: ‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯ ಘನತೆ ಎತ್ತಿ ಹಿಡಿಯಲು ಎಲ್ಲಾ ಶಿಕ್ಷಕರು ಶ್ರಮಿಸುತ್ತಿದ್ದಾರೆ. ವಿಶೇಷ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಇಲಾಖೆಯಿಂದ ಫೋನ್‌–ಇನ್ ಕಾರ್ಯಕ್ರಮದ ಮೂಲಕ ಧೈರ್ಯ ತುಂಬಿ ಗೊಂದಲ ನಿವಾರಿಸಲಾಗುತ್ತಿದೆ’ ಎಂದು ಡಿಡಿಪಿಐ ಕೃಷ್ಣಮೂರ್ತಿ ಮಾಹಿತಿ ನೀಡಿದರು.

‘ಹಿಂದಿನ ವರ್ಷ ಫೋನ್‌–ಇನ್ ಕಾರ್ಯಕ್ರಮದಲ್ಲಿ ಹಲವು ಮಕ್ಕಳು ಪ್ರಶ್ನೆಗಳಿಗೆ ಉತ್ತರ ಕೇಳುತ್ತಿದ್ದರು. ಹೀಗಾಗಿ ಈ ಬಾರಿ ‘ನನ್ನನ್ನೊಮ್ಮೆ ಗಮನಿಸಿ’ ಪ್ರಶ್ನೋತ್ತರ ಕೋಠಿ ಸಿದ್ಧಪಡಿಸಲಾಗಿದೆ. ಇದು ಎಲ್ಲಾ ಹಂತದ ವಿದ್ಯಾರ್ಥಿಗಳಿಗೂ ಸಹಕಾರಿಯಾಗಿದೆ’ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಜಿಲ್ಲಾ ನೋಡಲ್‌ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದರು.

‘ಜಿಲ್ಲೆಯಲ್ಲಿ ಹೈನೋದ್ಯಮದ ಮೂಲಕ ರೈತರ ಬದುಕಿಗೆ ದಾರಿ ತೋರಿರುವ ಕೋಚಿಮುಲ್ ಇದೀಗ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸುವ ಕಾರ್ಯಕ್ಕೂ ಕೈಜೋಡಿಸಿದೆ’ ಎಂದು ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಕೋಚಿಮುಲ್ ನಿರ್ದೇಶಕರಾದ ಕಾಡೇನಹಳ್ಳಿ ನಾಗರಾಜ್, ವೆಂಕಟೇಶ್, ವ್ಯವಸ್ಥಾಪಕ ನಿರ್ದೇಶಕ ತಿಪ್ಪಾರೆಡ್ಡಿ, ವ್ಯವಸ್ಥಾಪಕ ನಾಗೇಶ್, ವಿಷಯ ಪರಿವೀಕ್ಷಕರಾದ ಗಾಯತ್ರಿ, ಶಶಿವಧನ, ಕೃಷ್ಣಪ್ಪ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು