ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸುಸೂತ್ರ

ಪರೀಕ್ಷೆಗೆ 23 ವಿದ್ಯಾರ್ಥಿಗಳು ಗೈರು: ಸುರಕ್ಷತಾ ಮಾರ್ಗಸೂಚಿ ಪಾಲನೆ
Last Updated 27 ಸೆಪ್ಟೆಂಬರ್ 2021, 15:54 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯು ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆಯಿತು.

ಕೋವಿಡ್ ಸಂದರ್ಭದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಹಾಗೂ ಹಿಂದಿನ ಶೈಕ್ಷಣಿಕ ವರ್ಷಗಳ ಅನುತ್ತೀರ್ಣ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾದರು. ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 304 ಮಂದಿ ಪೈಕಿ 281 ಮಂದಿ ಹಾಜರಾಗಿದ್ದು, 23 ಮಂದಿ ಗೈರಾದರು. ಮೊದಲ ದಿನ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ನಡೆಯಿತು. ತಲಾ 40 ಅಂಕಗಳಿಗೆ ಬಹು ಆಯ್ಕೆ ವಿಧಾನದಲ್ಲಿ ಪರೀಕ್ಷೆ ನಡೆದಿದ್ದು, ಭಾಷಾ ವಿಷಯಗಳ ಪರೀಕ್ಷೆಯು ಸೆ.29ರಂದು ನಡೆಯಲಿದೆ.

‘ಇಲಾಖೆಯು ಕೋವಿಡ್ ಆತಂಕದ ನಡುವೆಯೂ ಜುಲೈನಲ್ಲಿ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿತ್ತು. ಇದೀಗ ಪೂರಕ ಪರೀಕ್ಷೆಯೂ ಸುಗಮವಾಗಿ ನಡೆಯುತ್ತಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ಸುದ್ದಿಗಾರರಿಗೆ ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಯಿತು. ಬೆಳಿಗ್ಗೆ 10.30ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ಅಂತರ ಕಾಯ್ದುಕೊಳ್ಳಲು ಮತ್ತು ಗುಂಪುಗೂಡುವಿಕೆ ತಡೆಯಲು ಬೆಳಿಗ್ಗೆ 9.30ರಿಂದಲೇ ವಿದ್ಯಾರ್ಥಿಗಳಿಗೆ ಕೇಂದ್ರದೊಳಗೆ ಹೋಗಲು ಅವಕಾಶ ಕಲ್ಪಿಸಲಾಯಿತು.

ಥರ್ಮಲ್ ಸ್ಕ್ರೀನಿಂಗ್: ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ಸ್ವಯಂ ಸೇವಕರು ಪ್ರತಿ ವಿದ್ಯಾರ್ಥಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಕೈಗಳಿಗೆ ಸ್ಯಾನಿಟೈಸ್ ಹಾಕಿ ಮಾಸ್ಕ್ ವಿತರಿಸಿದರು. ಪ್ರತಿ ಕೇಂದ್ರದ ಮುಂದೆ ವಿದ್ಯಾರ್ಥಿಗಳಿಗೆ ಅಂತರ ಕಾಯ್ದುಕೊಳ್ಳಲು ಅವಕಾಶವಾಗುವಂತೆ ಬಾಕ್ಸ್‌ ರಚಿಸಲಾಗಿತ್ತು. ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು.

ಸಿಬ್ಬಂದಿ ಕೈಗಳಿಗೆ ಗ್ಲೌಸ್ ಧರಿಸಿಯೇ ಪರೀಕ್ಷಾ ಕಾರ್ಯ ನಿರ್ವಹಿಸಿದರು. ಪರೀಕ್ಷೆ ಮುಗಿಸಿ ಹೋಗುವಾಗಲೂ ಮಕ್ಕಳು ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಕೆ ವಹಿಸಲಾಯಿತು. ಕೇಂದ್ರಕ್ಕೆ ಪೋಷಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಜಿಲ್ಲಾ ಕೇಂದ್ರದ ಹಾಗೂ ಬಂಗಾರಪೇಟೆಯ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ನಾಗೇಶ್, ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT