ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ನಿವಾಸದ ಮುಂದೆ ಧರಣಿ

ಕ್ಷೇತ್ರದ ಅಭಿವೃದ್ಧಿ ಕುಂಠಿತ: ರೈತ ಸಂಘ ಸದಸ್ಯರ ಆಕ್ರೋಶ
Last Updated 14 ಸೆಪ್ಟೆಂಬರ್ 2019, 14:39 IST
ಅಕ್ಷರ ಗಾತ್ರ

ಕೋಲಾರ: ಶಾಸಕ ಕೆ.ಶ್ರೀನಿವಾಸಗೌಡ ಕ್ಷೇತ್ರದ ಅಭಿವೃದ್ಧಿ ಮರೆತಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶನಿವಾರ ಶಾಸಕರ ನಿವಾಸದ ಎದುರು ಧರಣಿ ನಡೆಸಿದರು.

‘ಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲಸೌಕರ್ಯ ಸಮಸ್ಯೆ ಗಂಭೀರವಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಶಾಸಕರು ಕ್ಷೇತ್ರ ಅಭಿವೃದ್ಧಿಪಡಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ರಸ್ತೆಗಳು ಗುಂಡಿಯಮಯವಾಗಿದ್ದು, ಜನರ ಗೋಳು ಹೇಳತೀರದು. ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ತಾರಕ್ಕೇರಿದೆ. ಜನರಿಂದ ಆಯ್ಕೆಯಾಗಿ ಜನರ ಮಧ್ಯೆಯಿದ್ದು, ಸಮಸ್ಯೆ ಬಗೆಹರಿಸಬೇಕಾದ ಶಾಸಕರು ಕಾಣೆಯಾಗಿದ್ದಾರೆ. ಭ್ರಷ್ಟ ಅಧಿಕಾರಿಗಳು ಬಡ ಜನರು ಹಾಗೂ ರೈತರನ್ನು ಸುಲಿಗೆ ಮಾಡುತ್ತಿದ್ದಾರೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ತಾಲ್ಲೂಕಿನಲ್ಲಿ ಸತತ ಬರ ಪರಿಸ್ಥಿತಿಯಿದೆ. ಈ ವರ್ಷವೂ ಉತ್ತಮ ಮಳೆಯಾಗಿಲ್ಲ. ಇದರಿಂದ ಬೆಳೆಗಳು ಒಣಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಎದುರಾಗಿದೆ. ಶಾಸಕರು ಬರ ಪರಿಹಾರ ಕಾಮಗಾರಿಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಅವರಿಗೆ ರೈತರ ಬಗ್ಗೆ ಕಾಳಜಿಯಿಲ್ಲ’ ಎಂದು ಆರೋಪಿಸಿದರು.

ಅರಿವಿಲ್ಲ: ‘ಮಳೆ ನಂಬಿ ಬಿತ್ತನೆ ಮಾಡಿದ ರೈತರು ಬೆಳೆ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗುತ್ತಿಲ್ಲ. ರೈತರ ಪ್ರತಿ ಕೆಲಸಕ್ಕೂ ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ. ಲಂಚದ ಹಾವಳಿ ಮಿತಿ ಮೀರಿದ್ದು, ಶಾಸಕರಿಗೆ ಇದರ ಅರಿವಿಲ್ಲ’ ಎಂದು ಧರಣಿನಿರತರು ಕಿಡಿಕಾರಿದರು.

‘ಮೃತ್ಯುಕೂಪ ರಸ್ತೆಗಳನ್ನು ದುರಸ್ತಿ ಮಾಡಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಲಂಚಬಾಕ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಬರ ಪರಿಹಾರ ಕಾಮಗಾರಿ ಚುರುಕುಗೊಳಿಸಬೇಕು. ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಪರಿಹಾರಕ್ಕೆ ಹೆಚ್ಚು ಒತ್ತು ಕೊಡಬೇಕು. ಸರ್ಕಾರಿ ಜಾಗದ ಒತ್ತುವರಿ ತೆರವುಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ, ಸದಸ್ಯರಾದ ನಾಗೇಶ್, ಮಂಜುನಾಥ್, ವೆಂಕಟೇಶಪ್ಪ, ತಿಮ್ಮಣ್ಣ, ಮೂರ್ತಿ, ಪುರುಷೋತ್ತಮ್, ನವೀನ್, ಕೇಶವ, ಶಿವು, ಆಂಜಿನಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT