ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಸ್ತುಬದ್ಧ ಜೀವನದಿಂದ ಯಶಸ್ಸು

ಸರ್ಕಾರಿ ಮಹಿಳಾ ಕಾಲೇಜು ಸಹಾಯಕ ಪ್ರಾಧ್ಯಾಪಕ ಸೀನಪ್ಪ ಅಭಿಪ್ರಾಯ
Last Updated 16 ಫೆಬ್ರುವರಿ 2020, 9:02 IST
ಅಕ್ಷರ ಗಾತ್ರ

ಕೋಲಾರ: ‘ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ನಿರ್ಣಾಯಕ’ ಎಂದು ನಗರದ ಸರ್ಕಾರಿ ಮಹಿಳಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಲ್.ಸೀನಪ್ಪ ಅಭಿಪ್ರಾಯಪಟ್ಟರು.

ನಗರದ ಸಹ್ಯಾದ್ರಿ ಪದವಿ ಕಾಲೇಜಿನಲ್ಲಿ ಶನಿವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್‌) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ‘ಎನ್‌ಎಸ್‌ಎಸ್‌ ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತ. ಜನ ಸೇವೆಯೇ ಜನಾರ್ಧನ ಸೇವೆ ಎಂಬ ಮಾತಿನಂತೆ ಎನ್‌ಎಸ್‌ಎಸ್‌ ಒಳ್ಳೆಯ ಕೆಲಸವಾಗಿದೆ’ ಎಂದರು.

‘ಸಮಾಜ ನಮಗೆ ಏನು ಕೊಟ್ಟಿದೆ ಎಂಬುದು ಮುಖ್ಯವಲ್ಲ. ಬದಲಿಗೆ ಸಮಾಜಕ್ಕೆ ನಾವು ಏನು ಕೊಡುಗೆ ಕೊಟ್ಟಿದ್ದೇವೆ ಎನ್ನುವುದು ಮುಖ್ಯ. ವಿದ್ಯಾರ್ಥಿಗಳು ಮುಖ್ಯವಾಗಿ ಶಿಸ್ತು, ಸಂಯಮ, ದೇಶಪ್ರೇಮ ಬೆಳೆಸಿಕೊಳ್ಳಬೇಕು. ಶಿಸ್ತುಬದ್ಧ ಜೀವನದಿಂದ ಯಶಸ್ಸು ಸಾಧಿಸಬಹುದು. ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಂಡರೆ ಗುರಿ ಸಾಧನೆಗೆ ಸಹಕಾರಿ’ ಎಂದು ಕಿವಿಮಾತು ಹೇಳಿದರು.

‘ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಕಾಲೇಜಿನ ಹಿರಿಮೆ ಎತ್ತಿ ಹಿಡಿಯಬೇಕು. ಎನ್‌ಎಸ್‌ಎಸ್‌ ಚಟುವಟಿಕೆಗಳಿಂದ ಸೇವಾ ಮನೋಭಾವ, ಸೌಹಾರ್ದತೆ ಮೂಡುತ್ತದೆ’ ಜತೆಗೆ ಸಂಬಂಧ ಬೆಸೆಯುವ ಕೆಲಸ ಆಗುತ್ತದೆ’ ಎಂದು ತಾಲ್ಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಗೋಪಿಕೃಷ್ಣ
ತಿಳಿಸಿದರು.

ಅಸಮತೋಲನ: ‘ಆಧುನಿಕತೆ ಬೆಳೆದಂತೆ ಬೃಹತ್ ಕಟ್ಟಡಗಳು ನಿರ್ಮಾಣಗೊಳುತ್ತಿವೆ. ಅರಿವಿನ ಕೊರತೆಯಿಂದ ಮನುಷ್ಯ ಪರಿಸರದ ಮೇಲೆ ದಾಳಿ ನಡೆಸುತ್ತಿದ್ದು, ಪ್ರಾಕೃತಿಕ ಅಸಮತೋಲನವಾಗುತ್ತಿದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಆದರೆ, ಇತ್ತೀಚಿನ ವರ್ಷಗಳಲ್ಲಿ ಮನುಷ್ಯನ ದುರಾಸೆಯ ಫಲವಾಗಿ ಪರಿಸರ ನಾಶವಾಗಿದೆ’ ಎಂದು ಸಹ್ಯಾದ್ರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಉದಯ್‌ಕುಮಾರ್ ಕಳವಳ ವ್ಯಕ್ತಪಡಿಸಿದರು.

‘ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಪ್ರಜೆಗಳು. ಮಕ್ಕಳೇ ದೇಶದ ಬುನಾದಿ. ಸಮಾಜ ಸರಿ ದಾರಿಯಲ್ಲಿ ಸಾಗಿದರೆ ಮಾತ್ರ ದೇಶದಲ್ಲಿ ಶಾಂತಿ ಹಾಗೂ ಸಹಬಾಳ್ವೆ ನೆಲೆಗೊಳ್ಳುತ್ತದೆ. ಮಕ್ಕಳು ಅಡ್ಡ ದಾರಿ ಹಿಡಿದರೆ ದೇಶದ ಭವಿಷ್ಯ ಕತ್ತಲಾಗುತ್ತದೆ. ಮಕ್ಕಳು ಪಠ್ಯ ಪುಸ್ತಕಗಳಿಗೆ ಸೀಮಿತವಾದರೆ ಜ್ಞಾನ ವೃದ್ಧಿಸಿಕೊಳ್ಳಲು ಸಾಧ್ಯವಿಲ್ಲ’ ಎಂದರು.

ಸಹ್ಯಾದ್ರಿ ಪದವಿ ಕಾಲೇಜು ಪ್ರಾಂಶುಪಾಲ ಎಂ.ಕೃಷ್ಣಪ್ಪ, ಉಪ ಪ್ರಾಂಶುಪಾಲ ಬದ್ರಿನಾಥ್‌, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಜಿ.ವಿ.ಕೃಷ್ಣಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶ್ರೀಧರ್, ರಾಷ್ಟ್ರೀಯ ಸೇವಾ ಯೋಜನೆ ಸಂಚಾಲಕ ರಮೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT