ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಸಿಗೆ: ನೀರಿನ ಸಮಸ್ಯೆ ಪರಿಹರಿಸುವಂತೆ ಜಿ.ಪಂ ಅಧ್ಯಕ್ಷ ವೆಂಕಟೇಶ್‌ ಸೂಚನೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Last Updated 17 ಮಾರ್ಚ್ 2021, 16:10 IST
ಅಕ್ಷರ ಗಾತ್ರ

ಕೋಲಾರ: ‘ಬೇಸಿಗೆ ಕಾಲ ಆರಂಭವಾಗಿದ್ದು, ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಗಂಭೀರವಾಗುತ್ತಿದೆ. ಜಿಲ್ಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ. ಬಳಿಕ ಆ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿ ಅಥವಾ ಟ್ಯಾಂಕರ್ ಮೂಲಕ ನೀರು ಪೂರೈಸಿ ಸಮಸ್ಯೆ ಬಗೆಹರಿಸಿ’ ಎಂದು ತಿಳಿಸಿದರು.

‘ಈಗಾಗಲೇ ಜಿಲ್ಲೆಯ 45 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ. ಬೇಸಿಗೆ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ನೀರಿನ ಜತೆಗೆ ಮೇವಿನ ಸಮಸ್ಯೆ ಎದುರಾಗುವ ಸಾದ್ಯತೆ ಇದೆ. ಮೇವಿನ ಕೊರತೆ ನೀಗಿಸಲು ಸಿದ್ಧತೆ ಮಾಡಿಕೊಳ್ಳಿ. ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಬೇಕು’ ಎಂದರು.

‘2019–20ನೇ ಸಾಲಿನ ಅನುದಾನದಲ್ಲಿ ಸರ್ಕಾರಿ ಪ್ರೌಢ ಶಾಲೆಗಳಿಗೆ ಪೀಠೋಪಕರಣ ಸರಬರಾಜು ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಗುತ್ತಿಗೆದಾರರಿಗೆ ಹಣ ಪಾವತಿಸಿದ್ದಾರೆ. ಆದರೆ, ಈವರೆಗೂ ಶಾಲೆಗಳಿಗೆ ಪೀಠೋಪಕರಣ ಸರಬರಾಜಅಗಿಲ್ಲ. ಸಾಮಾನ್ಯ ಸಭೆಯಲ್ಲಿ ಈ ಸಂಗತಿ ಪ್ರಸ್ತಾಪವಾಗಿದ್ದರೂ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಶಾಲೆಗಳಿಗೆ ಪಿಠೋಪಕರಣ ಸರಬರಾಜು ಆಗವುದಕ್ಕೂ ಮುನ್ನವೇ ಗುತ್ತಿಗೆದಾರರಿಗೆ ಬಿಲ್‌ ಬಿಡುಗಡೆ ಮಾಡಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಜತೆಗೆ ಗುತ್ತಿಗೆದಾರರಿಂದ ಹಣ ವಸೂಲಿ ಮಾಡಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.

2ನೇ ಅಲೆ ಆತಂಕ: ‘ದೇಶದೆಲ್ಲೆಡೆ ಕೊರೊನಾ 2ನೇ ಅಲೆಯ ಆತಂಕ ಎದುರಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಿಸಬೇಕು. ಜತೆಗೆ ಕೊರೊನಾ ತಡೆಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಜನ ಸ್ವಯಂಪ್ರೇರಿತವಾಗಿ ಲಸಿಕೆ ಪಡೆಯುವಂತೆ ಪ್ರೇರೇಪಿಸಬೇಕು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.

‘ಹಣಕಾಸು ವರ್ಷ ಮುಗಿಯುತ್ತಾ ಬಂದಿದೆ. ಕಾಲಮಿತಿಯೊಳಗೆ ಅನುದಾನ ಬಳಕೆ ಮಾಡಬೇಕು. ಇಲಾಖೆಗಳಲ್ಲಿ ಅನುದಾನ ಬಳಕೆಯಾಗದೆ ಸರ್ಕಾರಕ್ಕೆ ವಾಪಸ್‌ ಹೋದರೆ ಅಧಿಕಾರಿಗಳೇ ಹೊಣೆ’ ಎಂದು ಎಚ್ಚರಿಕೆ ನೀಡಿದರು.

ಬಿಲ್‌ ಪಾವತಿಸಿಲ್ಲ: ‘ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿರುವ ಟ್ಯಾಂಕರ್‌ ಮಾಲೀಕರಿಗೆ ಈವರೆಗೂ ಬಿಲ್ ಪಾವತಿಸಿಲ್ಲ. ಈ ಸಂಬಂಧ ಸಾಕಷ್ಟು ದೂರು ಬಂದಿವೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಕಾಲಕ್ಕೆ ಬಿಲ್‌ ಪಾವತಿಯಾಗುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಜಿ.ಪಂ ಉಪಾಧ್ಯಕ್ಷೆ ಯಶೋದಾ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ ಸಿಇಒ ಎನ್.ಎಂ.ನಾಗರಾಜ್, ‘ಕಾರ್ಯ ನಿರ್ವಹಣಾಧಿಕಾರಿಗಳು ಗ್ರಾ.ಪಂಗಳ ಕ್ರಿಯಾ ಯೋಜನೆ ಸಿದ್ಧಪಡಿಸುವಾಗ ಕುಡಿಯುವ ನೀರಿನ ಪೂರೈಕೆ ಮತ್ತು ಸಿಬ್ಬಂದಿ ಸಂಬಳಕ್ಕೆ ಹೆಚ್ಚಿನ ಅನುದಾನ ಮೀಸಲಿಡಬೇಕು. ಶಿಥಿಲಾವಸ್ಥೆಯಲ್ಲಿರುವ ಓವರ್ ಹೆಡ್‌ ಟ್ಯಾಂಕ್‌ಗಳನ್ನು ನೆಲಸಮಗೊಳಿಸುವ ಮೂಲಕ ಸಂಭವನೀಯ ಅನಾಹುತ ತಪ್ಪಿಸಬೇಕು’ ಎಂದು ಆದೇಶಿಸಿದರು.

ಜಿ.ಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್‌ಪ್ರಸಾದ್‌, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ನಿರ್ಮಲಾ, ಉಪ ಕಾರ್ಯದರ್ಶಿ ಸಂಜೀವಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT