ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19 ವಿರುದ್ಧದ ಹೋರಾಟಕ್ಕೆ ಸಹಕರಿಸಿ

ಸಭೆಯಲ್ಲಿ ಜಿಲ್ಲೆಯ ಜನರಿಗೆ ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್ ಮನವಿ
Last Updated 28 ಮಾರ್ಚ್ 2020, 15:39 IST
ಅಕ್ಷರ ಗಾತ್ರ

ಕೋಲಾರ: ‘ಕೋವಿಡ್‌–19 ಹತೋಟಿಗಾಗಿ ಇಡೀ ದೇಶಕ್ಕೆ ದಿಗ್ಬಂಧನ ವಿಧಿಸಲಾಗಿದ್ದು, ಜಿಲ್ಲೆಯ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ಸಹಕರಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಮನವಿ ಮಾಡಿದರು.

ಇಲ್ಲಿ ಶನಿವಾರ ನಡೆದ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಮಾತನಾಡಿ, ‘ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲೆಯ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ 450 ಹಾಸಿಗೆ ಸಾಮರ್ಥ್ಯದ ಐಸೋಲೇಷನ್ ವಾರ್ಡ್‌ ಸ್ಥಾಪಿಸಲಾಗಿದೆ. ಹಾಸಿಗೆ ಸಾಮರ್ಥ್ಯ ಹೆಚ್ಚಿಸುವ ಪ್ರಯತ್ನ ನಡೆದಿದೆ’ ಎಂದು ತಿಳಿಸಿದರು.

‘ಕೋಲಾರದ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆ, ಕೆಜಿಎಫ್ ಸರ್ಕಾರಿ ಆಸ್ಪತ್ರೆ, ಬಂಗಾರಪೇಟೆ ತಾಲ್ಲೂಕು ಆಸ್ಪತ್ರೆ, ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ವಾರ್ಡ್‌ಗಳನ್ನು ಕಾಯ್ದಿರಿಸಲಾಗಿದೆ. ಜನರು ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬರಬಾರದು’ ಎಂದು ಹೇಳಿದರು.

‘ಜಿಲ್ಲೆಯ ವೈದ್ಯರು, ನರ್ಸ್‌ಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ರಜೆ ಪಡೆಯುವಂತಿಲ್ಲ. ಜಿಲ್ಲೆಗೆ ಅಗತ್ಯವಿರುವ ತಜ್ಞ ವೈದ್ಯರ ಪಟ್ಟಿ ಸಿದ್ಧಪಡಿಸಿ. ತುರ್ತು ಸಂದರ್ಭದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ತಜ್ಞ ವೈದ್ಯರನ್ನು ಕರೆಸಿಕೊಳ್ಳಲು ಸಹಕಾರಿಯಾಗುತ್ತದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಸಲಹೆ ನೀಡಿದರು.

ರಾಸಾಯನಿಕ ಸಿಂಪಡಿಸಿ

‘ಮಾವಿನ ತೋಟಗಳಲ್ಲಿ ಕೀಟನಾಶಕ ಸಿಂಪಡಿಸುವ ಟ್ರ್ಯಾಕ್ಟರ್‌ಗಳನ್ನು ತಾಲ್ಲೂಕಿಗೆ 2ರಂತೆ ಬಾಡಿಗೆಗೆ ಪಡೆದು ಗ್ರಾಮೀಣ ಭಾಗದಲ್ಲಿ ಕೊರೊನಾ ವೈರಸ್ ನಾಶಕ ರಾಸಾಯನಿಕ ಸಿಂಪಡಿಸಬೇಕು. ಜಿಲ್ಲೆಯಲ್ಲಿರುವ 38 ಆಂಬುಲೆನ್ಸ್‌ಗಳಲ್ಲಿ ಕೊರೊನಾ ಸೋಂಕು ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವ ಸಂದೇಶ ಬಿತ್ತರಿಸಬೇಕು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

‘ಹೊರ ದೇಶಗಳಿಂದ ಜಿಲ್ಲೆಗೆ ಬಂದಿರುವ 161 ಮಂದಿಯನ್ನು ಅವರ ಮನೆಗಳಲ್ಲೇ ಪ್ರತ್ಯೇಕ ನಿಗಾದಲ್ಲಿ (ಹೋಂ ಕ್ವಾರಂಟೈನ್) ಇರಿಸಲಾಗಿದೆ. ಈ ವ್ಯಕ್ತಿಗಳು ಯಾರ ಯಾರ ಜತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಸಂಗ್ರಹಿಸಿ. ಈ ವ್ಯಕ್ತಿಗಳ ಪೈಕಿ ಯಾರಿಗಾದರೂ ಕೊರೊನಾ ಸೋಂಕು ಇರುವುದು ದೃಢಪಟ್ಟರೆ ಇವರ ಜತೆಗೆ ಸಂಪರ್ಕದಲ್ಲಿದ್ದವರನ್ನು ಗುರುತಿಸಿ ಹೋಂ ಕ್ವಾರಂಟೈನ್‌ನಲ್ಲಿ ಇಡಲು ಅನುಕೂಲವಾಗುತ್ತದೆ’ ಎಂದು ಹೇಳಿದರು.

ಮದ್ಯ ಮಾರಾಟ

‘ಜಿಲ್ಲೆಯ ಕೆಲ ಬಾರ್‌ಗಳಲ್ಲಿ ಹಾಗೂ ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೂರು ಬಂದಿವೆ. ಇಂತಹ ಬಾರ್‌ ಮತ್ತು ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿ’ ಎಂದು ಅಬಕಾರಿ ಇಲಾಖೆ ಉಪ ಆಯುಕ್ಷೆ ಸುಮಿತಾ ಅವರಿಗೆ ಆದೇಶಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎನ್‌.ವಿಜಯ್‌ಕುಮಾರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT