ಬುಧವಾರ, ಆಗಸ್ಟ್ 17, 2022
25 °C

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲ್ಲಿಸಿ: ಶ್ರೀನಿವಾಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಹಿಡಿಯುವ ಅವಕಾಶ ಹೆಚ್ಚಿದೆ. ರಾಜಿಗೆ ಅವಕಾಶ ನೀಡದೆ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಕಾಂಗ್ರೆಸ್ ಕಿಸಾನ್ ಖೇತ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ಮನವಿ ಮಾಡಿದರು.

ಗ್ರಾ.ಪಂ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿ ಬುಧವಾರ ನಡೆದ ಕಾಂಗ್ರೆಸ್‌ನ ಬೂತ್ ಮಟ್ಟದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ಗ್ರಾ.ಪಂ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಪಕ್ಷದ ಚಿಹ್ನೆ ಇರುವುದಿಲ್ಲ. ಇದು ಪಕ್ಷಾತೀತವಾಗಿ ನಡೆಯುವ ಚುನಾವಣೆ. ಆದರೂ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌ನ ಅಸ್ತಿತ್ವ ಉಳಿಸಿಕೊಳ್ಳಬೇಕು’ ಎಂದು ಹೇಳಿದರು.

‘ಮಾಜಿ ಶಾಸಕ ವರ್ತೂರು ಪ್ರಕಾಶ್ ಮತದಾರರನ್ನು ತಪ್ಪು ದಾರಿಗೆ ಎಳೆಯಲು ತಾನು ಕಾಂಗ್ರೆಸ್ ಸೇರುತ್ತೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ತಕ್ಕ ಉತ್ತರ ನೀಡಿದ್ದಾರೆ. ವರ್ತೂರು ಪ್ರಕಾಶ್‌ ಅವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಎಂದು ತಿಳಿಸಿದರು.

‘ಗ್ರಾ.ಪಂ ಚುನಾವಣೆಯು ಮುಂಬರುವ ಎಲ್ಲಾ ಚುನಾವಣೆಗಳಿಗೆ ತಳಹದಿ. ಪಕ್ಷದ ನೆಲೆ ಭದ್ರಪಡಿಸಿಕೊಂಡು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಎದುರಿಸಬೇಕು. ಕಾರ್ಯಕರ್ತರು ಪಕ್ಷ ಸಂಘಟನೆ ಬಲಪಡಿಸಬೇಕು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್ ಸಲಹೆ ನೀಡಿದರು.

‘ಪಕ್ಷದ ಮುಖಂಡರು ಕಾರ್ಯಕರ್ತರ ಬೆಂಬಲಕ್ಕಿದ್ದು, ಧೈರ್ಯವಾಗಿ ಚುನಾವಣೆ ಎದುರಿಸಬೇಕು. ತಾಲ್ಲೂಕಿನ 19 ಗ್ರಾ.ಪಂಗಳ ಪೈಕಿ 11 ಪಂಚಾಯಿತಿಗಳಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ಅವಕಾಶವಿದೆ. ಹಲವು ಪಂಚಾಯಿತಿಗಳಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲವಿದ್ದು, ಇದನ್ನು ನಿವಾರಣೆ ಮಾಡುತ್ತೇವೆ’ ಎಂದು ವಿವರಿಸಿದರು.

ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಉಪಾಧ್ಯಕ್ಷ ಮಂಜುನಾಥ್, ಮುಖಂಡರಾದ ಗೋಪಾಲಕೃಷ್ಣಗೌಡ, ಕೃಷ್ಣಮೂರ್ತಿ, ಕುಮಾರ್, ಜಯದೇವ್, ಯುವರಾಜ್, ಲೋಕೇಶ್ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು