ಕೋಲಾರ: ‘ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 125ನೇ ವರ್ಷಾಚರಣೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೂಚಿಸಿದರು.
ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 125ನೇ ವರ್ಷಾಚರಣೆ ಸಂಬಂಧ ಇಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಸೆ.11ರಿಂದ 2019ರ ಸೆ.11ರವರೆಗೆ ಒಂದು ವರ್ಷ ಈ ಕಾರ್ಯಕ್ರಮ ಆಚರಿಸಲಾಗುತ್ತದೆ’ ಎಂದರು.
ಸ್ವಾಮಿ ವಿವೇಕಾನಂದರು 1893ರಲ್ಲಿ ಚಿಕಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಭಾರತದ ತತ್ವಾದರ್ಶವನ್ನು ಹೃದಯ ಸ್ಪರ್ಶಿಯಾಗಿ ತಿಳಿಸಿದ್ದರು. ಸೆ.11ರ ಆ ದಿನವು ಮಹತ್ವದ್ದು. ಅವರ ಭಾಷಣದ ಸಂದೇಶ ಮತ್ತು ಆಲೋಚನೆಗಳು ಪ್ರತಿಯೊಬ್ಬರಿಗೂ ತಿಳಿಯಬೇಕು’ ಎಂದು ಹೇಳಿದರು.
‘ವಿವೇಕಾನಂದರ ಕುರಿತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶಾಲಾ ಮತ್ತು ಕಾಲೇಜುಗಳಲ್ಲಿ ಚರ್ಚಾ ಸ್ಪರ್ಧೆ, ಭಾಷಣ ಸ್ಪರ್ಧೆ ನಡೆಸಬೇಕು. ಸೆ.11ರಂದು ನಗರದ ಟಿ.ಚನ್ನಯ್ಯ ರಂಗಮಂದಿರಲ್ಲಿ ನಡೆಯುವ ಸಮಾರಂಭದಲ್ಲಿ ವರ್ಷಾಷರಣೆಗೆ ಚಾಲನೆ ಸಿಗಲಿದೆ’ ಎಂದು ವಿವರಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ.ಬಿ.ರಾಜೇಂದ್ರಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಹಾಜರಿದ್ದರು.