ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಶಿಕ್ಷಕರ ಅರ್ಹತಾ ಪರೀಕ್ಷೆ

ಪರೀಕ್ಷೆಗೆ 5,530 ಅಭ್ಯರ್ಥಿಗಳ ನೋಂದಣಿ: ಡಿಡಿಪಿಐ ಜಯರಾಮರೆಡ್ಡಿ ಹೇಳಿಕೆ
Last Updated 3 ಅಕ್ಟೋಬರ್ 2020, 11:58 IST
ಅಕ್ಷರ ಗಾತ್ರ

ಕೋಲಾರ: ‘ಕೋವಿಡ್‌–19 ಆತಂಕದ ನಡುವೆಯೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಭಾನುವಾರ (ಅ.4) ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲು ಇಲಾಖೆ ಸಿದ್ಧತೆ ಮಾಡಿಕೊಂಡಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ ತಿಳಿಸಿದರು.

ಟಿಇಟಿ ಸಂಬಂಧ ಇಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿ, ‘ಜಿಲ್ಲಾ ಕೇಂದ್ರದ 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರಾಥಮಿಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ 1,917 ಮಂದಿ ಮತ್ತು ಪ್ರೌಢ ಶಿಕ್ಷಕರ ಅರ್ಹತಾ ಪರೀಕ್ಷೆಗೆ 3,613 ಮಂದಿ ಹೆಸರು ನೋಂದಾಯಿಸಿದ್ದಾರೆ. ಒಟ್ಟಾರೆ 5,530 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದು ವಿವರಿಸಿದರು.

‘ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆಗೆ ಮುನ್ನ ಸ್ಯಾನಿಟೈಸ್‌ ಮಾಡಲಾಗಿದೆ. ಕೇಂದ್ರದ ಪ್ರತಿ ಕೊಠಡಿಗೂ ಕಡ್ಡಾಯವಾಗಿ ಸ್ಯಾನಿಟೈಸರ್‌ ಸಿಂಪಡಿಸಲಾಗಿದೆ. ಬೆಳಿಗ್ಗೆ ಮೊದಲ ಅವಧಿಯ ಪರೀಕ್ಷೆ ಮುಗಿದ ನಂತರ ಮಧ್ಯಾಹ್ನದ ಅವಧಿಯ ಪರೀಕ್ಷೆಗೂ ಮುನ್ನ ಕೊಠಡಿಗಳನ್ನು ಮತ್ತೊಮ್ಮೆ ಸ್ಯಾನಿಟೈಸ್‌ ಮಾಡಲಾಗುತ್ತದೆ’ ಎಂದು ಹೇಳಿದರು.

‘ಪರೀಕ್ಷೆಗೆ ಬರುವ ಅಭ್ಯರ್ಥಿಗಳಿಗೆ ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗೆ ಕೇಂದ್ರದ ಪ್ರವೇಶ ಭಾಗದಲ್ಲೇ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತದೆ. ಅಭ್ಯರ್ಥಿಗಳು ಮತ್ತು ಸಿಬ್ಬಂದಿಯು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬರಬೇಕು. ಜತೆಗೆ ಕೈಗಳಿಗೆ ಸ್ಯಾನಿಟೈಸರ್ ಬಳಕೆ ಮಾಡಬೇಕು’ ಎಂದು ಸೂಚಿಸಿದರು.

‘ಈಗಾಗಲೇ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಪರೀಕ್ಷಾ ಸಿದ್ಧತೆ ಪರಿಶೀಲಿಸಿದ್ದೇವೆ. ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಇಲಾಖೆ ಮುನ್ನಚ್ಚರಿಕೆ ವಹಿಸಿದೆ’ ಎಂದು ಮಾಹಿತಿ ನೀಡಿದರು.

ಆಸ್ಪತ್ರೆಯಲ್ಲೇ ಪರೀಕ್ಷೆ: ‘ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತ ಪರೀಕ್ಷಾರ್ಥಿಗಳಿಗೆ ಆಸ್ಪತ್ರೆಯಲ್ಲೇ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ. ಜತೆಗೆ ಪರೀಕ್ಷಾ ಮೇಲ್ವಿಚಾರಕರನ್ನು ನೇಮಿಸಲಾಗುತ್ತದೆ. ಆದರೆ, ಈವರೆಗೆ ಅಂತಹ ಯಾವುದೇ ಪ್ರಕರಣ ಗಮನಕ್ಕೆ ಬಂದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಕೊರೊನಾ ಸೋಂಕು ಅಥವಾ ಸೋಂಕಿತರ ಸಂಪರ್ಕ ಇರುವವರು ಪರೀಕ್ಷಾ ಕೇಂದ್ರಕ್ಕೆ ಬಂದರೆ ಅವರಿಗೆ ಪರೀಕ್ಷೆ ಬರೆಯಲು ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕಾರ್ಯಕ್ಕೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಯ ಸಹಕಾರ ಪಡೆದಿದ್ದು, ಹೆಚ್ಚಿನ ನಿಗಾ ವಹಿಸಲಾಗಿದೆ’ ಎಂದು ಹೇಳಿದರು.

ಹೆಚ್ಚುವರಿ ಸಿಬ್ಬಂದಿ: ‘ಕೋವಿಡ್‌–19 ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ಕಾರ್ಯಕ್ಕೆ ಹಿಂದಿನ ವರ್ಷಗಳಿಗಿಂತ ಹೆಚ್ಚುವರಿ ಸಿಬ್ಬಂದಿ ನೇಮಿಸಿಕೊಳ್ಳಲಾಗಿದೆ. ಸುಗಮ ಪರೀಕ್ಷೆಗೆ ಮುಖ್ಯ ಅಧೀಕ್ಷಕರು, ಅಭಿರಕ್ಷಕರು, ಸ್ಥಾನಿಕ ಜಾಗೃತದಳ, ಕೊಠಡಿ ಮೇಲ್ವಿಚಾರಕರು ಸೇರಿದಂತೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಟಿಇಟಿ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದರು.

‘ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಡೆಸ್ಕ್‌ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇತರೆ ಎಲ್ಲಾ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳು ಮೊಬೈಲ್ ತರುವುದನ್ನು ನಿರ್ಬಂಧಿಸಲಾಗಿದೆ’ ಎಂದರು.

‘ಪ್ರಾಥಮಿಕ ಶಿಕ್ಷಕರ ಹುದ್ದೆಯ ಅರ್ಹತಾ ಪರೀಕ್ಷೆ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆವರೆಗೆ ನಡೆಯಲಿದೆ. ಪ್ರೌಢ ಶಿಕ್ಷಕರ ಅರ್ಹತಾ ಪರೀಕ್ಷೆ ಐಚ್ಛಿಕ ವಿಷಯದ ಪರೀಕ್ಷೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.30ರವರೆಗೆ ನಡೆಯುತ್ತದೆ. ಅಭ್ಯರ್ಥಿಗಳು ಒಂದು ತಾಸು ಮುಂಚಿತವಾಗಿ ಕೇಂದ್ರಕ್ಕೆ ಬರಬೇಕು’ ಎಂದು ಸೂಚಿಸಿದರು.

ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ಡಿವೈಪಿಸಿ ಮೋಹನ್‌ಬಾಬು, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್.ನಾಗರಾಜಗೌಡ, ಕೆಂಪಯ್ಯ, ವಿ.ಉಮಾದೇವಿ, ವಿಷಯ ಪರಿವೀಕ್ಷಕರಾದ ಶಶಿವಧನ, ಗಾಯತ್ರಿ, ಕೃಷ್ಣಪ್ಪ, ವೆಂಕಟೇಶಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT