ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ದಿನ ಸರಳ ಆಚರಣೆ: ಡಿಡಿಪಿಐ ಜಯರಾಮರೆಡ್ಡಿ

ಮನರಂಜನೆಗೆ ಅವಕಾಶವಿಲ್ಲ
Last Updated 3 ಸೆಪ್ಟೆಂಬರ್ 2020, 16:33 IST
ಅಕ್ಷರ ಗಾತ್ರ

ಕೋಲಾರ: ‘ಕೋವಿಡ್–19 ಭೀತಿ ಹಾಗೂ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಶೋಕಾಚರಣೆ ಇರುವುದರಿಂದ ಶಿಕ್ಷಕರ ದಿನ ಸರಳವಾಗಿ ಆಚರಿಸಲಾಗುತ್ತದೆ’ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ ತಿಳಿಸಿದರು.

ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸೆ.5ರಂದು ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ ಹಾಗೂ ಶಾಲಾ ಹಂತದಲ್ಲಿ ಸರಳವಾಗಿ ಶಿಕ್ಷಕರ ದಿನ ಆಚರಿಸಲು ಸೂಚಿಸಲಾಗಿದೆ. ಶಿಕ್ಷಣ ಇಲಾಖೆ ಆಯುಕ್ತರ ನಿರ್ದೇಶನದಂತೆ ಕೋವಿಡ್ ಸುರಕ್ಷತಾ ಮಾರ್ಗಸೂಚಿ ಕಡ್ಡಾಯವಾಗಿ ಅನುಸರಿಸಲಾಗುತ್ತದೆ’ ಎಂದರು.

‘ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ, ನಿವೃತ್ತರಿಗೆ ಬೀಳ್ಕೊಡುಗೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಶೋಕಾಚರಣೆ ಕಾರಣಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಜನರ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ವೇದಿಕೆಯಲ್ಲಿ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಹಾಗೂ ಡಿಡಿಪಿಐ ಅವರಿಗೆ ಮಾತ್ರ ಆಸನ ವ್ಯವಸ್ಥೆ ಮಾಡಲಾಗುತ್ತದೆ’ ಎಂದು ವಿವರಿಸಿದರು.

‘ತಾಲ್ಲೂಕು ಮಟ್ಟದ ಕಾರ್ಯಕ್ರಮದಲ್ಲೂ ಕೋವಿಡ್ ಸುರಕ್ಷತಾ ಮಾರ್ಗಸೂಚಿ ಪಾಲನೆ ಕಡ್ಡಾಯ, ಜತೆಗೆ ಸರಳವಾಗಿ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗಿದೆ. ವೇದಿಕೆಯಲ್ಲಿ ಸ್ಥಳೀಯ ಶಾಸಕರು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಕಾರ್ಯ ನಿರ್ವಹಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ತಹಶೀಲ್ದಾರ್‌ಗೆ ಆಸನ ವ್ಯವಸ್ಥೆ ಕಲ್ಪಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಆಹ್ವಾನ ಪತ್ರಿಕೆ: ‘50 ಮಂದಿಗೆ ಮೀರದಂತೆ ಆಹ್ವಾನ ಪತ್ರಿಕೆ ಮುದ್ರಿಸುವಂತೆ ಇಲಾಖೆ ಸೂಚಿಸಿದೆ. ರೈತ ಗೀತೆ, ನಾಡಗೀತೆ, ರಾಧಕೃಷ್ಣನ್‌ರ ಭಾವಚಿತ್ರಕ್ಕೆ ಪುಷ್ಪನಮನ, ಪ್ರಾಸ್ತಾವಿಕ ನುಡಿ, ಅತಿಥಿಗಳ ಸಂದೇಶ, ವಂದನಾರ್ಪಣೆ, ರಾಷ್ಟ್ರಗೀತೆ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡಲಾಗಿದೆ’ ಎಂದು ಹೇಳಿದರು.

‘ಶಾಲಾ ಹಂತದಲ್ಲಿ ಶಿಕ್ಷಕರ ದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಹಾಗೂ ಶಿಕ್ಷಕರು ರಾಧಾಕೃಷ್ಣನ್‌ರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸುವ ಮೂಲಕ ಸರಳವಾಗಿ, ಸುರಕ್ಷಿತವಾಗಿ ಶಿಕ್ಷಕರ ದಿನ ಆಚರಿಸುವಂತೆ ಸೂಚಿಸಲಾಗಿದೆ’ ಎಂದರು.

‘ಕಾರ್ಯಕ್ರಮದಲ್ಲಿ ಅಂತರ ಕಾಪಾಡುವುದರ ಜತೆಗೆ ಪ್ರವೇಶ ದ್ವಾರದಲ್ಲೇ ಥರ್ಮಲ್‌ ಸ್ಕ್ರೀನಿಂಗ್ ನಡೆಸಲಾಗುತ್ತದೆ. ಜತೆಗೆ ಕಡ್ಡಾಯವಾಗಿ ಸ್ಯಾನಿಟೈಸರ್‌ ಬಳಸಿ ಮಾಸ್ಕ್ ಧರಿಸಿರಬೇಕು. ಶುದ್ದ ಕುಡಿಯುವ ನೀರು ಒದಗಿಸಬಹುದು. ಆದರೆ, ಊಟ, ಲಘು ಉಪಹಾರದ ವ್ಯವಸ್ಥೆ ಮಾಡುವಂತಿಲ್ಲ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT