ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾಂಗಣದಲ್ಲಿ ಸಭೆಯ ಸಿದ್ಧತೆ ಪರಿಶೀಲನೆ

ಏ.13ಕ್ಕೆ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆ
Last Updated 11 ಏಪ್ರಿಲ್ 2019, 16:43 IST
ಅಕ್ಷರ ಗಾತ್ರ

ಕೋಲಾರ: ಕಾಂಗ್ರೆಸ್‌– ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರ ನಗರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏ.13ರಂದು ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದ್ದು, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಗುರುವಾರ ಸಭೆಗೆ ಮಾಡಿರುವ ಸಿದ್ಧತೆ ಪರಿಶೀಲಿಸಿದರು.

ಅವಿಭಜಿತ ಕೋಲಾರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಜನ, ಎರಡೂ ಪಕ್ಷಗಳ ಕಾರ್ಯಕರ್ತರು ಹಾಗೂ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸೆಪಟ್‌ ಕ್ರೀಡಾಂಗಣಕ್ಕೆ ಪೊಲೀಸ್‌ ಬಂದೋಬಸ್ತ್ ಕಲ್ಪಿಸುವ ಬಗ್ಗೆ ಪರಿಶೀಲನೆ ಮಾಡಿದರು.

ಕ್ರೀಡಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಸಭೆ ಆರಂಭವಾಗಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್, ಮುನಿಯಪ್ಪ ಹಾಗೂ ಎರಡೂ ಜಿಲ್ಲೆಗಳ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ.

ಲಕ್ಷ ಮಂದಿ ಭಾಗಿ: ಸಭೆಗೆ ಮಾಡಿರುವ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಾರೆಡ್ಡಿ, ‘ಪಕ್ಷದ ಅಭ್ಯರ್ಥಿ ಮುನಿಯಪ್ಪರ ಪರ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಿಂದ 1 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ’ ಎಂದು ಹೇಳಿದರು.

‘ಸಭೆಗೆ ಆಗಮಿಸುವವರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ’ ಎಂದು ವಿವರಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ 21 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ 7 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಎರಡೂ ಪಕ್ಷಗಳ ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಮುನಿಯಪ್ಪರ ಪರ ಪ್ರಚಾರ ನಡೆಯುತ್ತಿದ್ದು, ಅವರು 8ನೇ ಬಾರಿ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಖಜಾಂಚಿ ರಾಮ್‌ಪ್ರಸಾದ್, ಎಸ್ಸಿ ಘಟಕದ ಅಧ್ಯಕ್ಷ ಜಯದೇವ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT