ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಕಡಿಮೆ: ಸಚಿವ ನಾಗೇಶ್‌ ಹೇಳಿಕೆ

Last Updated 5 ಆಗಸ್ಟ್ 2020, 15:11 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್‌ ಹೇಳಿದರು.

ಕೋವಿಡ್-19 ನಿಯಂತ್ರಣ ಸಂಬಂಧ ಇಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿ, ‘ಸೋಂಕಿನ ನಿಯಂತ್ರಣಕ್ಕೆ ಅಧಿಕಾರಿಗಳು ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಜಿಲ್ಲೆಯಲ್ಲಿ ಈವರೆಗೆ 1,497 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಪೈಕಿ 806 ಮಂದಿ ಗುಣಮುಖರಾಗಿದ್ದಾರೆ. 32 ಸೋಂಕಿತರು ಮೃತಪಟ್ಟಿದ್ದು, 662 ಪ್ರಕರಣಗಳು ಸಕ್ರಿಯವಾಗಿವೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಪ್ರಮಾಣ ಕಡಿಮೆಯಿದೆ’ ಎಂದು ವಿವರಿಸಿದರು.

‘ಕೊರೊನಾ ಸೋಂಕಿನ ಗ್ರಾಮೀಣ ಭಾಗದ ಜನರಲ್ಲಿ ಅರಿವು ಕಡಿಮೆಯಿದೆ. ಮಾಧ್ಯಮಗಳ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು’ ಎಂದು ಶಾಸಕ ಕೆ.ಆರ್‌.ರಮೇಶ್‌ಕುಮಾರ್ ಸಲಹೆ ನೀಡಿದರು.

‘ಕೊರೊನಾ ಸೋಂಕಿನ ಹೊರತಾಗಿ ಇತರೆ ಆರೋಗ್ಯ ಸಮಸ್ಯೆಗಳ ಕಾರಣಕ್ಕೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸುವಂತೆ ವೈದ್ಯರು ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು. ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿ, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು’ ಎಂದು ಹೇಳಿದರು.

‘ಕೊರೊನಾ ಸೋಂಕಿತರಲ್ಲದ ರೋಗಿಗಳ ಚಿಕಿತ್ಸೆಗೆ ಪ್ರತ್ಯೇಕವಾಗಿ 100 ಹಾಸಿಗೆ ಸಾಮರ್ಥ್ಯದ ವಾರ್ಡ್‌ ಮೀಸಲಿಡಬೇಕು’ ಎಂದು ವಿಧಾನ ಪರಿಷತ್ ಸದಸ್ಯ ನಸೀರ್ ಅಹಮ್ಮದ್‌ ಮನವಿ ಮಾಡಿದರು.

ಅಧಿಕಾರಿಗಳು ನಿರ್ಣಾಯಕ: ‘ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಸೋಂಕಿತರ ಮನೆಯ ಪ್ರದೇಶವನ್ನು ಕಂಟೈನ್‌ಮೆಂಟ್‌ ವಲಯವಾಗಿ ಪರಿವರ್ತಿಸಲಾಗುತ್ತಿದೆ. ಕಂಟೈನ್‌ಮೆಂಟ್ ವಲಯಗಳ ನಿರ್ವಹಣೆಗೆ ಸರ್ಕಾರದಿಂದ ಯಾವುದೇ ರೀತಿಯ ಅನುದಾನವಿಲ್ಲ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮಾಹಿತಿ ನೀಡಿದರು.

ಶಾಸಕ ಕೆ.ವೈ.ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್‌ರೆಡ್ಡಿ, ಇಲಕಿಯಾ ಕರುಣಾಕರನ್, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಸ್ವಾಮಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT