ಬುಧವಾರ, ಜೂನ್ 29, 2022
23 °C
ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಪುಟ್ಟಸ್ವಾಮಿ ಭರವಸೆ

ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಮೇಲ್ದರ್ಜೆಗೆ: ಪುಟ್ಟಸ್ವಾಮಿ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಸರ್ಕಾರದ ಸೂಚನೆಯಂತೆ ಕಾರ್ಪೊರೇಟ್‌ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಅನುದಾನದಲ್ಲಿ ಆಕಾಂಕ್ಷಾ ಸಂಸ್ಥೆ ಮೂಲಕ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು’ ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಭರವಸೆ ನೀಡಿದರು.

ಎಸ್ಸಿಲಾರ್‌ ವಿಷನ್ ಪ್ರತಿಷ್ಠಾನದ ವತಿಯಿಂದ ಇಲ್ಲಿ ಶುಕ್ರವಾರ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಗೆ 5 ಆಮ್ಲಜನಕ ಸಾಂದ್ರಕಗಳನ್ನು ಹಸ್ತಾಂತರಿಸಿ ಮಾತನಾಡಿ, ‘ಆಕಾಂಕ್ಷಾ ಸಂಸ್ಥೆಯು ರಾಜ್ಯದಲ್ಲಿ ಈವರೆಗೆ 800 ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಿದೆ’ ಎಂದು ತಿಳಿಸಿದರು.

‘ಸುಮಾರು 1400 ಕೈಗಾರಿಕೆಗಳು ಸಿಎಸ್‌ಆರ್‌ ಅಡಿ ನೀಡುವ ಹಣವನ್ನು ಜವಾಬ್ದಾರಿಯಿಂದ ಆದ್ಯತೆ ಮೇರೆಗೆ ವ್ಯವಸ್ಥಿತವಾಗಿ ಸಾಮಾಜಿಕ ಕಾರ್ಯಗಳಿಗೆ ಬಳಸುತ್ತಿದ್ದೇವೆ. ಸಿಎಸ್‌ಆರ್‌ ಅನುದಾನದಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ  ವತಿಯಿಂದ ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕು ಆಸ್ಪತ್ರೆಗಳಲ್ಲಿ ಸದ್ಯದಲ್ಲೇ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಿಸಲಾಗುತ್ತದೆ’ ಎಂದರು.

‘ಕೋವಿಡ್ 2ನೇ ಅಲೆಯಲ್ಲಿ ಅತಿ ಹೆಚ್ಚು ಸೋಂಕಿನ ಪ್ರಕರಣ ಕಂಡುಬಂದಿವೆ. ಕೋವಿಡ್‌ 3ನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಮನೆ ಮನೆಗೂ ಭೇಟಿ ಕೊಟ್ಟು ಕೋವಿಡ್ ಪರೀಕ್ಷೆ ಮಾಡಿ ಸೋಂಕು ದೃಢಪಟ್ಟವರಿಗೆ ವೈದ್ಯಕೀಯ ಕಿಟ್‌ ನೀಡುತ್ತಿದ್ದೇವೆ. 3ನೇ ಅಲೆಯಲ್ಲಿ ಸೋಂಕು ಅತಿ ಹೆಚ್ಚು ಹರಡದಂತೆ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ’ ಎಂದು ವಿವರಿಸಿದರು.

‘ರಾಜ್ಯದ 19 ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಶೇ 5ಕ್ಕಿಂತ ಕಡಿಮೆಯಿದೆ. ಉಳಿದ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಶೇ 5ಕ್ಕಿಂತ ಹೆಚ್ಚು ಇದೆ. ಸರ್ಕಾರ ಕೋವಿಡ್ ನಿಯಂತ್ರಿಸಲು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ’ ಎಂದು ಮಾಹಿತಿ ನೀಡಿದರು.

ಐಸಿಯುಗೆ ಮನವಿ: ಎಸ್‌ಎನ್ಆರ್‌ ಆಸ್ಪತ್ರೆಯಲ್ಲಿ ಸುಸಜ್ಜಿತ ತೀವ್ರ ನಿಗಾ ಘಟಕ (ಐಸಿಯು) ಮತ್ತು ಉತ್ತಮ ಕಟ್ಟಡ ನಿರ್ಮಿಸಿ ಕೊಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವಿಕುಮಾರ್ ಉಪಾಧ್ಯಕ್ಷರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಪುಟ್ಟಸ್ವಾಮಿ, ‘ಶೀಘ್ರವೇ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಐಸಿಯು ಮತ್ತು ಕಟ್ಟಡ ನಿರ್ಮಿಸಿ ಕೊಡುತ್ತೇವೆ’ ಎಂದು ಭರವಸೆ ನೀಡಿದರು.

‘ಕೋವಿಡ್ 2ನೇ ಅಲೆಯ ಆರಂಭದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ತೀವ್ರವಾಗಿತ್ತು. ಈಗ ಯಾವುದೇ ತೊಂದರೆ ಇಲ್ಲದೆ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ 6 ಸಾವಿರ ಲೀಟರ್‌ ಸಾಮರ್ಥ್ಯದ ವೈದ್ಯಕೀಯ ಆಮ್ಲಜನಕದ ಟ್ಯಾಂಕ್ ನಿರ್ಮಿಸಲಾಗಿದ್ದು, ಟ್ಯಾಂಕ್‌ಗೆ 2 ದಿನದಲ್ಲಿ ಆಮ್ಲಜನಕ ತುಂಬಿಸಲಾಗುವುದು’ ಎಂದು ಡಾ.ರವಿಕುಮಾರ್ ಹೇಳಿದರು.

‘ಆಸ್ಪತ್ರೆಯಲ್ಲಿ 1 ಸಾವಿರ ಲೀಟರ್ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ ಹಂತದಲ್ಲಿದ್ದು, ಶೀಘ್ರವೇ ಕಾರ್ಯಾರಂಭ ಮಾಡಲಿದೆ. ದಾನಿಗಳು ಸಾರ್ವಜನಿಕ ಹಿತಾಸಕ್ತಿಯಿಂದ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿರುವ ಆಮ್ಲಜನಕ ಸಾಂದ್ರಕಗಳನ್ನು ಸದ್ಬಳಕೆ ಮಾಡುತ್ತೇವೆ’ ಎಂದರು.

ತಹಶೀಲ್ದಾರ್ ಶೋಭಿತಾ, ವೈದ್ಯ ಡಾ.ಬಾಲಸುಂದರ್‌, ಸಿಎಸ್‍ಆರ್ ಸಲಹೆಗಾರ ಮಹೇಶ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.