ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 4 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶನಿವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 83ಕ್ಕೆ ಏರಿಕೆಯಾಗಿದೆ.
ಕೋಲಾರ ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರಿಗೆ, ಮಾಲೂರು ತಾಲ್ಲೂಕಿನ ಇಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 4, ಬಂಗಾರಪೇಟೆ ತಾಲ್ಲೂಕಿನ ಇಬ್ಬರು, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 3 ಮಂದಿಯನ್ನು ಮನೆಗೆ ಕಳುಹಿಸಲಾಯಿತು.