ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ರೈತರು ದೇಶದ ಅನ್ನದಾತ ಪ್ರಭುಗಳು

Last Updated 21 ಜುಲೈ 2020, 16:30 IST
ಅಕ್ಷರ ಗಾತ್ರ

ಕೋಲಾರ: ‘ರೈತರು ದೇಶದ ಅನ್ನದಾತ ಪ್ರಭುಗಳು. ಇಡೀ ದೇಶಕ್ಕೆ ಅನ್ನ ನೀಡುವ ರೈತರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ’ ಎಂದು ನಗರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್ ರಂಗಶಾಮಯ್ಯ ಅಭಿಪ್ರಾಯಪಟ್ಟರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ನಂಜುಂಡಸ್ವಾಮಿ ಬಣ) ವತಿಯಿಂದ ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರೈತ ಹುತಾತ್ಮ ದಿನಾಚರಣೆಯಲ್ಲಿ ಮಾತನಾಡಿ, ‘ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾನು ರೈತನ ಮಗನಾಗಿದ್ದು, ರೈತರ ಕಷ್ಟದ ಅರಿವಿದೆ. ಸರ್ಕಾರಗಳು ಹಂತ ಹಂತವಾಗಿ ರೈತರ ಸಮಸ್ಯೆ ಬಗೆಹರಿಬೇಕು’ ಎಂದರು.

‘ರೈತರಿದ್ದರೆ ಮಾತ್ರ ನಾವು ಬದುಕಲು ಸಾಧ್ಯ. ರೈತರು ದೇಶದ ನಿಜವಾದ ಮಾಲೀಕರು. ಶ್ರಮಜೀವಿಗಳಾದ ರೈತರನ್ನು ಕಾಪಾಡುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ನಡೆಯಬೇಕು. ರೈತರ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಬೇಕು’ ಎಂದು ನಗರ ಠಾಣೆ ಎಸ್‌ಐ ಅಣ್ಣಯ್ಯ ಹೇಳಿದರು.

‘ಜಿಲ್ಲೆಯ ಎಲ್ಲಾ ಕೆರೆಗಳಿಗೂ ನೀರು ತುಂಬಿಸಿ ರೈತರನ್ನು ಕಾಪಾಡಬೇಕು. ಎತ್ತಿನಹೊಳೆ ಹಾಗೂ ಯರಗೋಳ್ ಯೋಜನೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ಜಿಲ್ಲೆಗೆ ಶುದ್ಧ ಕುಡಿಯುವ ನೀರು ತರಬೇಕು. ಕೆರೆಗಳ ತವರು ಜಿಲ್ಲೆಯಾದ ಕೋಲಾರದ ಬಹುಪಾಲು ಕೆರೆಗಳ ಒತ್ತುವರಿಯಾಗಿದೆ’ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಸಂಚಾಲಕ ವೆಂಕಟೇಶ್ ಕಳವಳ ವ್ಯಕ್ತಪಡಿಸಿದರು.

ಬೆಂಬಲ ಬೆಲೆ: ‘ರೈತರ ಬಲಿದಾನದ ಮೇಲೆ ಸರ್ಕಾರಗಳು ನಡೆಯುತ್ತಿದೆ. ರೈತರ ಮೇಲೆ ಆಣೆ ಪ್ರಮಾಣ ಮಾಡಿ ಅಧಿಕಾರಕ್ಕೆ ಬರುವ ಜನಪ್ರತಿನಿಧಿಗಳು ರೈತರ ಕೊರಳಿಗೆ ಕುಣಿಕೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಸ್ವಾಮಿನಾಥನ್ ಆಯೋಗದ ವರದಿ ಅನ್ವಯ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು’ ಎಂದು ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ರಾಮುಶಿವಣ್ಣ ಒತ್ತಾಯಿಸಿದರು.

‘ಸರ್ಕಾರಿ ಕಚೇರಿಗಳಲ್ಲಿ ರೈತರ ಸಮಸ್ಯೆಗಳನ್ನು ತ್ವರಿತ ಗತಿಯಲ್ಲಿ ಬಗೆಹರಿಸಬೇಕು. ಎಪಿಎಂಸಿಗಳಲ್ಲಿ ದಲ್ಲಾಳಿಗಳ ಹಾವಳಿ ಹಾಗೂ ಕಮಿಷನ್‌ ದಂಧೆಗೆ ಕಡಿವಾಣ ಹಾಕಬೇಕು. ತೂಕ ಮತ್ತು ಅಳತೆಯಲ್ಲಿ ವಂಚನೆ ತಪ್ಪಿಸಬೇಕು’ ಎಂದು ಮನವಿ ಮಾಡಿದರು.

ರೈತ ಸಂಘ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ವೇಣುಗೋಪಾಲ್, ಶ್ರೀನಿವಾಸಪುರ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರಪ್ಪ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT