ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜ ಬದಲಿಸುವ ಶಕ್ತಿ ಹೆಣ್ಣಿಗಿದೆ

Last Updated 9 ಮಾರ್ಚ್ 2021, 17:30 IST
ಅಕ್ಷರ ಗಾತ್ರ

ಕೋಲಾರ: ‘ಹೆಣ್ಣು ಹುಟ್ಟಿದರೆ ದೊಡ್ಡ ಹಬ್ಬ. ಪ್ರತಿ ಮನೆಯಲ್ಲಿ ಹೆಣ್ಣು ಮಗು ಜನಿಸಬೇಕು. ಇಡೀ ಸಮಾಜವನ್ನು ಬದಲಾಯಿಸುವ ಶಕ್ತಿ ಹೆಣ್ಣಿನಲ್ಲಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘವು ಇಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸಾಧಕ ಮುಖ್ಯ ಶಿಕ್ಷಕಿಯರನ್ನು ಸನ್ಮಾನಿಸಿ ಮಾತಾನಾಡಿದರು.

‘ಮಹಿಳಾ ದಿನಾಚರಣೆ ನಿರಂತರವಾಗಬೇಕು. ಮಹಿಳೆಯರ ಸಾಧನೆಗೆ ಮಿತಿಯಲ್ಲ. ಅವರನ್ನು ಗೌರವಿಸುವ ಕೆಲಸ ಆಗಬೇಕು. ಮಹಿಳೆಯರು ಆರೋಗ್ಯವಾಗಿದ್ದರೆ ಇಡೀ ಕುಟುಂಬ ಆರೋಗ್ಯವಾಗಿರುತ್ತದೆ. ಹೆಣ್ಣು ಮಕ್ಕಳು ಸುಶಿಕ್ಷಿತರಾದರೆ ಕುಟುಂಬ ಆರ್ಥಿಕವಾಗಿ ಸಶಕ್ತವಾಗುತ್ತದೆ’ ಎಂದು ಹೇಳಿದರು.

‘ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರು ಸಮಾನರು. ಮಹಿಳೆಯರು ಸಂಕುಚಿತ ಭಾವನೆ ಬಿಟ್ಟು ಸಮಸ್ಯೆಗಳನ್ನು ಚರ್ಚಿಸಿ ಪರಿಹಾರೋಪಾಯ ಕಂಡುಕೊಳ್ಳಬೇಕು. ನಾಲ್ಕು ಗೋಡೆಗಳ ಮಧ್ಯೆ ಜೀವಿಸುವ ಮಹಿಳೆ ಯಾವುದೇ ವಿಚಾರವನ್ನು ಮುಕ್ತವಾಗಿ ಚರ್ಚಿಸಲು ಹಿಂಜರಿಯಬಾರದು’ ಎಂದು ಸಲಹೆ ನೀಡಿದರು.

‘ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಬೇಕು. ಗಂಡು ಮಕ್ಕಳಂತೆಯೇ ಹೆಣ್ಣು ಮಕ್ಕಳನ್ನು ಬೆಳೆಸಿ ಸುಶಿಕ್ಷಿತರಾಗಿ ಮಾಡಬೇಕು. ಹೆಣ್ಣು ಗಂಡೆಂದು ತಾರತಮ್ಯ ಮಾಡುವುದು ಸರಿಯಲ್ಲ. ಪ್ರತಿ ಮನೆಯಲ್ಲೂ ಹೆಣ್ಣು ಮಕ್ಕಳಿಗೆ ಶಿಕ್ಷಣದ ಮೂಲಕ ಸ್ವಾವಲಂಬಿಗಳಾಗಿಸಬೇಕು’ ಎಂದು ಸಂಘದ ವಿಭಾಗೀಯ ಕಾರ್ಯದರ್ಶಿ ಆರ್‌.ಶ್ರೀನಿವಾಸನ್ ಕಿವಿಮಾತು ಹೇಳಿದರು.

ದಬ್ಬಾಳಿಕೆ ಹೆಚ್ಚುತ್ತಿದೆ: ‘ಮಹಿಳೆಯರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿದ್ದರೆ ಯಾವುದೇ ಕೆಲಸವನ್ನು ನಿರ್ಭಯವಾಗಿ ಮಾಡಬಹುದು. ಸಮಾಜ ಬೆಳೆದಂತೆ ಮಹಿಳೆಯರ ಮೇಲಿನ ದೌರ್ಜನ್ಯ, ಶೋಷಣೆ ಕಡಿಮೆಯಾಗಬೇಕು. ಆದರೆ, ಮಹಿಳೆಯರ ಮೇಲೆ ದಬ್ಬಾಳಿಕೆ ಹೆಚ್ಚುತ್ತಿದೆ’ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಜಿ.ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಮುಖ್ಯೋಪಾಧ್ಯಾಯರಾದ ಸರೋಜಮ್ಮ, ಟಿ.ಸುಧಾ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ವಿ.ರುದ್ರಪ್ಪ, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಶ್ರೀನಿವಾಸ್, ಉಪಾಧ್ಯಕ್ಷ ಕೆ.ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಜಗನ್ನಾಥ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT