ಮಂಗಳವಾರ, ಜನವರಿ 26, 2021
16 °C
ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಅಭಿವೃದ್ಧಿಗೆ ಅಡ್ಡಗಾಲು ಹಾಕಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಿವಾಸಪುರ: ‘ತಾಲ್ಲೂಕು ಅಥವಾ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ನಾನು ಅಡ್ಡಗಾಲು ಹಾಕಿಲ್ಲ. ಅಡ್ಡಿಪಡಿಸಿರುವುದಾಗಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾಡಿರುವ ಆಪಾದನೆಯಲ್ಲಿ ಹುರುಳಿಲ್ಲ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಮತಗಳು ಬಂದಿರುವುದನ್ನು ಸಹಿಸಲಾಗದೆ, ಅಲ್ಲಿ ಏರ್ಪಡಿಸಲಾಗಿದ್ದ ಸಮಾರಂಭವೊಂದರಲ್ಲಿ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು
ಹೇಳಿದರು.

ಮತದಾರರಲ್ಲಿ ಮೌಲ್ಯ ಕುಸಿದಿದೆ ಎಂದು ಹೇಳುವುದರ ಮೂಲಕ, ಮತದಾರರಿಗೆ ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡದ ಮತದಾರರನ್ನು ಗಮನದಲ್ಲಿಟ್ಟುಕೊಂಡು ಹಾಗೆ ಹೇಳಿದ್ದಾರೆ. ಅವರ ಮಾತು ಖಂಡನೀಯ ಎಂದು ಹೇಳಿದರು.

ನಾಲ್ಕು ಬಾರಿ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ. ಏನಾದರೂ ಅಭಿವೃದ್ಧಿ ಆಗಿದ್ದರೆ ನನ್ನ ಕಾಲದಲ್ಲಿ ಮಾತ್ರ. ಅಮಾನಿಕೆರೆ ಸಮೀಪ ಬಡವರಿಗಾಗಿ ನಿರ್ಮಿಸಲಾಗಿದ್ದ 2,000 ಮನೆ ನಿವೇಶನಗಳನ್ನು ರದ್ದುಪಡಿಸಿದ್ದು ಯಾರು ಎಂಬ ವಿಷಯ ಎಲ್ಲರಿಗೂ ಗೊತ್ತು. ಹಾಲಿ ಶಾಸಕರು ನೀಡಿದ ಯಾವುದೇ ಭರವಸೆ ಈಡೇರಿಲ್ಲ ಎಂದು ದೂರಿದರು.

ಕ್ಯಾನ್ಸರ್ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಿಸುವ ಭರವಸೆ ಭರವಸೆಯಾಗಿಯೇ ಉಳಿದುಕೊಂಡಿದೆ. ರೈಲ್ವೆ ಕೋಚ್ ಕಾರ್ಖಾನೆ ಸ್ಥಾಪನೆ ಮಾತು ಮರೆತುಹೋಗಿದೆ. ತಾಲ್ಲೂಕು ಆಡಳಿತ ಸಂಕೀರ್ಣ ನಿರ್ಮಾಣ ಆಗಲಿಲ್ಲ ಎಂದು ಹೇಳಿದರು.

ಎತ್ತಿನ ಹೊಳೆ ಯೋಜನೆ ಜಾರಿ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿಲ್ಲ. ಡಿಸಿಸಿ ಬ್ಯಾಂಕ್ ವತಿಯಿಂದ ಫಲಾನುಭವಿಗಳಿಗೆ ಬಡ್ಡಿರಹಿತ ಸಾಲ ನೀಡಲಾಗುತ್ತಿದೆ. ಆ ಹಣ ಯಾರಪ್ಪನದೂ ಅಲ್ಲ. ಹಣವನ್ನು ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ವಿತರಿಸುವಂತೆ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.

ರಮೇಶ್ ಕುಮಾರ್ ಅವರು ನನ್ನನ್ನು ದೇವರ ಮುಂದೆ ಪ್ರಮಾಣ ಮಾಡಲು ಹೇಳಿದ್ದಾರೆ. ನನಗೆ ಜನರೇ ದೇವರು. ಬಹಿರಂಗ ಚರ್ಚೆಗೆ ಬರಲಿ, ಯಾರು ಏನೆಂಬುದು ತಿಳಿಯುತ್ತದೆ ಎಂದು ಹೇಳಿದರು.

ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಸದಸ್ಯ ಬಿ.ವೆಂಕಟರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯ ಗಣೇಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜುನಾಥ ರೆಡ್ಡಿ, ರಾಜಶೇಖರ ರೆಡ್ಡಿ, ಮುಖಂಡ ಪೂಲ ಶಿವಾರೆಡ್ಡಿ, ಬಿ.ಎಲ್.ಸೂರ್ಯನಾರಾಯಣ, ಕಾರ್ ಬಾಬು, ರವಿ, ಅಪ್ಪೂರು ರಾಜು ಆನಂದ್, ಹೋಳೂರು ಗೋಪಾಲಗೌಡ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.