ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟರ ಅನುದಾನ ಸಕಾಲಕ್ಕೆ ಬಳಸಿ: ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚನೆ

ಅನುಸೂಚಿತ ಜಾತಿ–ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ
Last Updated 9 ನವೆಂಬರ್ 2021, 15:47 IST
ಅಕ್ಷರ ಗಾತ್ರ

ಕೋಲಾರ: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭ್ಯುದಯಕ್ಕೆ ಮೀಸಲಿಟ್ಟ ಅನುದಾನ ಆ ವರ್ಷವೇ ಬಳಕೆ ಆಗಬೇಕು. ನಿಗದಿತ ಗಡುವಿನೊಳಗೆ ಅನುದಾನ ಬಳಕೆಯಾಗದೆ ಸರ್ಕಾರಕ್ಕೆ ವಾಪಸ್‌ ಹೋದರೆ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಇಲ್ಲಿ ಮಂಗಳವಾರ ನಡೆದ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ. ಈ ಯೋಜನೆಗಳ ಸೌಲಭ್ಯ ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಬೇಕು’ ಎಂದು ಸೂಚಿಸಿದರು.

‘ಬ್ಯಾಂಕ್‌ಗಳು ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದು, ಈ ಬಗ್ಗೆ ದೂರು ಬಂದಿವೆ. ಬ್ಯಾಂಕ್‌ ಅಧಿಕಾರಿಗಳ ಮನಸ್ಥಿತಿ ಬದಲಾಗಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗಬೇಕು. ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರೆಯಬೇಕು’ ಎಂದರು.

‘ವಿಧವಾ ಪುರ್ನವಿವಾಹವು ಮಹಾತ್ಮ ಗಾಂಧಿಜೀಯವರ ಕಲ್ಪನೆಯಾಗಿದೆ. ವಿಧವಾ ಪುರ್ನವಿವಾಹಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸರ್ಕಾರದ ಯೋಜನೆ, ಸೌಲಭ್ಯ ಹಂಚಿಕೆಯಲ್ಲಿ ಯಾವುದೇ ಅಕ್ರಮ ನಡೆಯಬಾರದು. 94ಸಿ ಅಡಿ ಬಾಕಿಯಿರುವ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಪಡಿಸಿ. ಜನರಿಗೆ ಪುನರ್ವಸತಿ ಸೌಲಭ್ಯ ಕಲ್ಪಿಸಬೇಕು ಹಾಗೂ ಜಿಲ್ಲೆಯಲ್ಲಿ ಕೊಳೆಗೇರಿಗಳನ್ನು ನಿರ್ಮೂಲನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿಗೆ ಆದೇಶಿಸಿದರು.

ಅನುದಾನ ಹೆಚ್ಚಿಸಿ: ‘ಜಿಲ್ಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರವಾಗಿದೆ. ಜಿಲ್ಲೆಯಲ್ಲಿ ಪರಿಶಿಷ್ಟರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಂತರ್ಜಾತಿ ವಿವಾಹವಾದ ಪ್ರತಿಯೊಬ್ಬರಿಗೂ ಸಕಾಲದಲ್ಲಿ ಪ್ರೋತ್ಸಾಹಧನ ವಿತರಿಸಿ. ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದೆ. ಗಂಗಾ ಕಲ್ಯಾಣ ಯೋಜನೆಯಡಿ ನೀಡುವ ಅನುದಾನವನ್ನು ಹೆಚ್ಚಿಸಬೇಕು’ ಎಂದು ಸಮಿತಿ ಸದಸ್ಯ ಎಚ್.ಕೆ.ಕುಮಾರಸ್ವಾಮಿ ಹೇಳಿದರು.

‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಪ್ರತ್ಯೇಕ ಸ್ಮಶಾನ ಭೂಮಿ ನೀಡಲು ಅವಕಾಶವಿದೆ. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ತಹಶೀಲ್ದಾರ್‌ಗಳು ಸ್ಮಶಾನಗಳಿಗೆ ಭೂಮಿ ಗುರುತಿಸಿ ಹಂಚಿಕೆ ಮಾಡಬೇಕು. 94ಸಿ ಅಡಿ ಎಲ್ಲಾ ಬಡವರು ಅರ್ಜಿ ಸಲ್ಲಿಸಿರುತ್ತಾರೆ. ಈ ಪೈಕಿ ಕಡು ಬಡವರನ್ನು ಗುರುತಿಸಿ ಸೌಲಭ್ಯ ನೀಡಿ’ ಎಂದು ಸಮಿತಿ ಸದಸ್ಯ ಎಚ್.ಎಂ.ರಮೇಶ್‌ಗೌಡ ತಿಳಿಸಿದರು.

ಪರಿಹಾರ ನೀಡಿಕೆ: ‘ಜಿಲ್ಲೆಗೆ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಬಿಡುಗಡೆಯಾದ ಅನುದಾನದಲ್ಲಿ ಶೇ 95ರಷ್ಟನ್ನು ಬಳಕೆ ಮಾಡಲಾಗಿದೆ. ದೌರ್ಜನ್ಯಕ್ಕೆ ಒಳಗಾದವರಿಗೆ ಪರಿಹಾರ ನೀಡಲಾಗಿದೆ. 2020-21ನೇ ಸಾಲಿನಲ್ಲಿ 64 ದೌರ್ಜನ್ಯ ಪ್ರಕರಣ ದಾಖಲಾಗಿವೆ. ಜಿಲ್ಲೆಯು 2019ರಲ್ಲಿ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿದೆ. 156 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಭೂಮಿ ಮಂಜೂರು ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ವಿವರಿಸಿದರು.

ಸಮಿತಿ ಸದಸ್ಯರಾದ ಅವಿನಾಶ್‌ ಉಮೇಶ್ ಜಾಧವ್‌, ಸಂಜೀವ ಮಠಂದೂರು, ಬಿ.ಹರ್ಷವರ್ಧನ್, ತಳವಾರ್ ಸಾಬಣ್ಣ, ಜಿ.ಪಂ ಸಿಇಒ ಉಕೇಶ್‌ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್‌ಬಾಬು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು ಹಾಗೂ ತಾ.ಪಂ ಕಾರ್ಯ ನಿರ್ವಹಣಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT