ಸೋಮವಾರ, ಆಗಸ್ಟ್ 15, 2022
22 °C
ಕೇಂದ್ರದ ಕೃಷಿ ಕಾಯ್ದೆಗಳಿಗೆ ರೈತ ಸಂಘಟನೆಗಳ ವಿರೋಧ

ಇಂದು ಬಂದ್‌: ಕೋಲಾರದಲ್ಲಿ ಕಟ್ಟೆಚ್ಚರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ 3 ಪ್ರಮುಖ ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಮಂಗಳವಾರ (ಡಿ.8) ಭಾರತ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಬಂದ್‌ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ವಿವಿಧ ಸಂಘಟನೆಗಳ ಸದಸ್ಯರು ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳಲ್ಲಿ ಸೋಮವಾರ ಬೈಕ್‌ ರ್‌್ಯಾಲಿ ನಡೆಸಿ ಬಂದ್‌ಗೆ ಬೆಂಬಲ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ಬಹುತೇಕ ಪ್ರಗತಿಪರ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸಿದ್ದು, ಬಂದ್‌ ತೀವ್ರಗೊಳ್ಳುವ ಸಾಧ್ಯತೆಯಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳು, ರೈಲು ನಿಲ್ದಾಣಗಳು, ಕೇಂದ್ರ ಸರ್ಕಾರಿ ಕಚೇರಿಗಳು, ವಾಣಿಜ್ಯ ಸ್ಥಳಗಳು ಹಾಗೂ ಆಯಕಟ್ಟಿನ ಜಾಗಗಳಲ್ಲಿ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದೆ.

ಆಟೊ ಚಾಲಕರು, ಸರಕು ಸಾಗಣೆ ವಾಹನ ಮಾಲೀಕರು, ಖಾಸಗಿ ಬಸ್‌ ಮಾಲೀಕರು ಮತ್ತು ಚಾಲಕರ ಒಕ್ಕೂಟವು ಬಂದ್‌ ಬೆಂಬಲಿಸಿದ್ದು, ಸಂಚಾರ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಹಾಲು, ತರಕಾರಿ, ದಿನಸಿ ಹಾಗೂ ಔಷಧ ಮಾರಾಟ ಮಳಿಗೆಗಳು ಎಂದಿನಂತೆ ತೆರೆಯಲಿವೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸೇವೆ ಒದಗಿಸಲಿವೆ. ಪೆಟ್ರೋಲ್‌ ಬಂಕ್‌, ಬ್ಯಾಂಕ್‌ಗಳಲ್ಲಿ ಪ್ರತಿನಿತ್ಯದಂತೆ ವಹಿವಾಟು ನಡೆಯುಲಿದೆ.

ಶಾಂತಿಯುತವಾಗಿ ಬಂದ್‌ ನಡೆಸಬೇಕು. ಬಸ್‌ಗಳ ಮೇಲೆ ಕಲ್ಲು ತೂರುವ, ಸರ್ಕಾರಿ ಕಚೇರಿಗಳನ್ನು ಬಲವಂತವಾಗಿ ಮುಚ್ಚಿಸುವ ಪ್ರಯತ್ನ ಮಾಡಬಾರದು. ಸಾರ್ವಜನಿಕ ಆಸ್ತಿಗೆ ನಷ್ಟ ಉಂಟು ಮಾಡಬಾರದು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡಿದರೆ ಶಿಸ್ತುಕ್ರಮ ಜರುಗಿಸುತ್ತೇವೆ ಎಂದು ಪೊಲೀಸರು ಸಂಘಟನೆಗಳ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ಅಂಗಡಿ ಮಾಲೀಕರು ಸ್ವಯಂಪ್ರೇರಿತರಾಗಿ ವಹಿವಾಟು ಸ್ಥಗಿತಗೊಳಿಸಿದರೆ ಅಭ್ಯಂತರವಿಲ್ಲ. ಆದರೆ, ಸಂಘಟನೆಗಳ ಮುಖಂಡರು ಬಲವಂತವಾಗಿ ಅಂಗಡಿ ಮುಚ್ಚಿಸುವಂತಿಲ್ಲ ಹಾಗೂ ವಾಹನಗಳನ್ನು ಅಡ್ಡಗಟ್ಟುವಂತಿಲ್ಲ ಎಂದು ಪೊಲೀಸರು ಸೂಚಿಸಿದ್ದಾರೆ.

ಮರಣ ಶಾಸನ: ‘ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಶಕ್ತಿ ತುಂಬುವುದು ಎಲ್ಲಾ ಸಂಘಟನೆಗಳ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪ್ರಗತಿಪರ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸಿವೆ. ರೈತ, ಕಾರ್ಮಿಕ, ದಲಿತರಿಗೆ ಮರಣ ಶಾಸನವಾಗಿರುವ ಕಾಯ್ದೆಗಳ ವಿರುದ್ಧ ನಡೆಯುವ ಹೋರಾಟ ಯಶಸ್ವಿಯಾಗಲಿದೆ’ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ನಾರಾಯಣಸ್ವಾಮಿ ಹೇಳಿದರು.

‘ದೆಹಲಿ ಗಡಿಯಲ್ಲಿ ಹಲವು ದಿನಗಳಿಂದ ಹೋರಾಟ ಮಾಡುತ್ತಿದ್ದರೂ ರೈತರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ. ಕೇಂದ್ರವು ವಿದ್ಯುತ್‌ ಖಾಸಗೀಕರಣ, ಎಪಿಎಂಸಿ, ಕೃಷಿ ತಿದ್ದುಪಡಿ ಕಾಯ್ದೆ ವಾಪಸ್‌ ಪಡೆಯಬೇಕು’ ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.